ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಹೀನ್‌ ಶಾಲೆ ಸಿಎಎ ವಿವಾದ: ಮಕ್ಕಳ ಹಕ್ಕು ಉಲ್ಲಂಘಿಸಿದ ಪೊಲೀಸರು

Last Updated 17 ಆಗಸ್ಟ್ 2021, 1:35 IST
ಅಕ್ಷರ ಗಾತ್ರ

ಬೆಂಗಳೂರು: ಬೀದರ್‌ನ ಶಾಹೀನ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದಾಗ ಮಕ್ಕಳ ಹಕ್ಕುಗಳ ಉಲ್ಲಂಘನೆ ಆಗಿದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಈ ರೀತಿಯ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಆದೇಶಿಸಿದೆ.

ಪೌರತ್ವ ತಿದ್ದುಪಡಿ ಕಾಯ್ದೆ–2019ರ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ನಾಟಕವೊಂದಕ್ಕೆ ಸಂಬಂಧಿಸಿದಂತೆ ಪೊಲೀಸರು ನಡೆಸಿದ ವಿಚಾರಣೆಯನ್ನು ಪ್ರಶ್ನಿಸಿ ವಕೀಲರಾದ ನಯನಾ ಜ್ಯೋತಿ ಮತ್ತು ದಕ್ಷಿಣ ಭಾರತ ಮಾನವ ಹಕ್ಕುಗಳ ಶಿಕ್ಷಣ ಮತ್ತು ಮೇಲ್ವಿಚಾರಣಾ ಸಂಸ್ಥೆ ಅರ್ಜಿ ಸಲ್ಲಿಸಿತ್ತು. ಮಕ್ಕಳನ್ನು ವಿಚಾರಣೆಗೆ ಒಳಪಡಿಸಿದ ಪೊಲೀಸರ ವಿರುದ್ಧ ತನಿಖೆ ನಡೆಸಬೇಕು ಮತ್ತು ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅರ್ಜಿದಾರರು ಕೋರಿದ್ದರು.

‘ವಿಚಾರಣೆ ನಡೆಸಿದ ಛಾಯಾಚಿತ್ರಗಳನ್ನು ನೋಡಿದರೆ ನಾಲ್ವರು ಸಮವಸ್ತ್ರದಲ್ಲಿರುವ ಪೊಲೀಸ್ ಅಧಿಕಾರಿಗಳಲ್ಲಿ ಇಬ್ಬರು ಬಂದೂಕುಗಳನ್ನು ಹೊಂದಿದ್ದು, ಮೂವರು ಮಕ್ಕಳನ್ನು ಕೂರಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಪೊಲೀಸರು ಈ ರೀತಿ ನಡೆಸಿರುವ ವಿಚಾರಣೆಯು ಬಾಲ ನ್ಯಾಯ ಕಾಯ್ದೆಯ ಉಲ್ಲಂಘನೆ’ ಎಂದು ಪೀಠ ಅಭಿಪ್ರಾಯಪಟ್ಟಿತು.

‘ಮಕ್ಕಳ ಹಕ್ಕುಗಳು ಮತ್ತು ಬಾಲ ನ್ಯಾಯ ಕಾಯ್ದೆಯ ಉಲ್ಲಂಘನೆ ಆಗಿರುವ ಗಂಭೀರ ಪ್ರಕರಣ ಎಂಬುದು ಮೇಲ್ನೋಟಕ್ಕೇ ಕಾಣಿಸುತ್ತಿದೆ. ಬಂದೂಕು ಸಹಿತ ಸಮವಸ್ತ್ರ ಧರಿಸಿ ಮಕ್ಕಳನ್ನು ವಿಚಾರಣೆ ನಡೆಸಿದ ಪೊಲೀಸ್ ಅಧಿಕಾರಿಗಳ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗಿದೆ ಎಂಬುದರ ಕುರಿತ ವಿವರ ಸಲ್ಲಿಸಬೇಕು’ ಎಂದು ಪೀಠ ನಿರ್ದೇಶನ ನೀಡಿತು.

ಮಕ್ಕಳ ಹಕ್ಕುಗಳ ಉಲ್ಲಂಘನೆಗಳು ಮರುಕಳಿಸದಂತೆ ನೋಡಿಕೊಳ್ಳಲು ರಾಜ್ಯದಾದ್ಯಂತ ಪೊಲೀಸರಿಗೆ ಸರ್ಕಾರ ನಿರ್ದೇಶನ ನೀಡಬೇಕು. ಈ ಸಂಬಂಧ ಅಫಿಡವಿಟ್ ಸಲ್ಲಿಸಲು ಡಿಸಿಪಿ ಶ್ರೇಣಿಗಿಂತ ಹಿರಿಯ ಅಧಿಕಾರಿಯನ್ನು ನೇಮಿಸುವಂತೆ ಪೀಠ ತಿಳಿಸಿತು.

2020 ಜ.21ರಂದು ಶಾಲಾ ಆವರಣದಲ್ಲಿ ನಾಟಕ ಪ್ರದರ್ಶನ ಮಾಡಲಾಗಿತ್ತು. ಈ ಸಂಬಂಧ ಸಲ್ಲಿಕೆಯಾದ ದೂರು ಆಧರಿಸಿ ಆಡಳಿತ ಮಂಡಳಿ ವಿರುದ್ಧ ಎಫ್‌ಐಆರ್ ದಾಖಲಾದ ಬಳಿಕ ಪೊಲೀಸರು ವಿದ್ಯಾರ್ಥಿಗಳನ್ನು ವಿಚಾರಣೆಗೆ ಒಳಪಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT