ಚಿತ್ರದುರ್ಗ: ಮುರುಘಾ ಮಠದ ಶಿವಮೂರ್ತಿ ಶರಣರು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಎರಡನೇ ಪ್ರಕರಣದ ತನಿಖೆ ನಡೆಸಿದ ಪೊಲೀಸರು, 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ 761 ಪುಟಗಳ ದೋಷಾರೋಪಪಟ್ಟಿ ಸಲ್ಲಿಸಿದ್ದಾರೆ.
ತನಿಖಾಧಿಕಾರಿ ಜ.10ರಂದು ಸಲ್ಲಿಸಿದ ದೋಷಾರೋಪ ಪಟ್ಟಿಯನ್ನು ನ್ಯಾಯಾಲಯ ಫೆ.10ರಂದು ಸ್ವೀಕರಿಸಿದೆ. ‘ಎ’ ಮತ್ತು ‘ಬಿ’ ಎಂಬ ಎರಡು ದೋಷಾರೋಪ ಪಟ್ಟಿಯನ್ನು ತನಿಖಾಧಿಕಾರಿ ನೀಡಿದ್ದಾರೆ. ‘ಎ’ 366 ಹಾಗೂ ‘ಬಿ’ 395 ಪುಟಗಳ ದೋಷಾರೋಪಪಟ್ಟಿ ಇದೆ. 73 ಸಾಕ್ಷ್ಯಗಳನ್ನು ಪೊಲೀಸರು ಉಲ್ಲೇಖಿಸಿದ್ದಾರೆ. ನಾಲ್ವರು ಸಂತ್ರಸ್ತ ವಿದ್ಯಾರ್ಥಿನಿಯರ ಪೈಕಿ ಇಬ್ಬರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿಲ್ಲ ಎಂದು ಹೇಳಿದ್ದಾರೆ.
ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಪೋಕ್ಸೊ ಕಾಯ್ದೆಯಡಿ ಅ.13ರಂದು ಪ್ರಕರಣ ದಾಖಲಾಗಿತ್ತು. ಮುರುಘಾಮಠದ ಶಿವಮೂರ್ತಿ ಶರಣರು, ಹಾಸ್ಟೆಲ್ ವಾರ್ಡನ್, ಮಠದ ಉತ್ತರಾಧಿಕಾರಿ ಬಾಲಕ, ಮಾಜಿ ವ್ಯವಸ್ಥಾಪಕ ಪರಮಶಿವಯ್ಯ, ವಕೀಲ ಗಂಗಾಧರ, ಶರಣರ ಸಹಾಯಕ ಮಹಾಲಿಂಗ, ಅಡುಗೆಭಟ್ಟ ಕರಿಬಸಪ್ಪ ವಿರುದ್ಧ ದೂರು ದಾಖಲಾಗಿತ್ತು. ಶಿವಮೂರ್ತಿ ಶರಣರು ಹಾಗೂ ಹಾಸ್ಟೆಲ್ ವಾರ್ಡನ್ ಹೊರತುಪಡಿಸಿ ಉಳಿದವರ ಮೇಲೆ ಆರೋಪ ಸಾಬೀತುಪಡಿಸುವ ಸಾಕ್ಷ್ಯಗಳು ಲಭ್ಯವಾಗಿಲ್ಲ ಎಂದು ತನಿಖಾಧಿಕಾರಿ ಅಭಿಪ್ರಾಯಪಟ್ಟಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.