ಬುಧವಾರ, ಜುಲೈ 6, 2022
21 °C

ಶುಚಿ ಯೋಜನೆ: ಸರ್ಕಾರಿ ಶಾಲಾ-ಕಾಲೇಜುಗಳ ಹೆಣ್ಣು ಮಕ್ಕಳಿಗೆ ನ್ಯಾಪ್‌ಕಿನ್‌ ಪ್ಯಾಡ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Gatty images

ಬೆಂಗಳೂರು: ‘ಶುಚಿ’ ಕಾರ್ಯಕ್ರಮದಡಿ 2021– 22ನೇ ಸಾಲಿಗೆ ಸರ್ಕಾರಿ ಮತ್ತು ಅನುದಾನಿತ ಶಾಲಾ ಕಾಲೇಜುಗಳ ಹದಿ ಹರೆಯದ ಹೆಣ್ಣು ಮಕ್ಕಳಿಗೆ ಸ್ಯಾನಿಟರಿ ನ್ಯಾಪ್‌ಕಿನ್‌ ಪ್ಯಾಡ್‌ಗಳನ್ನು ವಿತರಿಸಲು ತೀರ್ಮಾನಿಸಲಾಗಿದೆ.

ಪ್ರತಿ ಹೆಣ್ಣುಮಕ್ಕಳಿಗೆ 10 ನ್ಯಾಪ್‌ಕಿನ್‌ ಪ್ಯಾಡ್‌ ನೀಡಲಾಗುವುದು. ಇದಕ್ಕಾಗಿ ₹47 ಕೋಟಿ ವೆಚ್ಚದಲ್ಲಿ ಸ್ಯಾನಿಟರಿ ನ್ಯಾಪ್‌ಕಿನ್‌ ಪ್ಯಾಡ್‌ಗಳನ್ನು ಖರೀದಿಸಲಾಗುವುದು. ಆರೋಗ್ಯ ಇಲಾಖೆಯಿಂದ ಈ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಸಂಪುಟ ಸಭೆಯ ಬಳಿಕ ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.

ರಾಜ್ಯದ 2859 ಆರೋಗ್ಯ ಉಪಕೇಂದ್ರಗಳನ್ನು ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳನ್ನಾಗಿ ₹478.91 ಕೋಟಿ ಅಂದಾಜು ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದರು.

ಎಲ್ಲ ಸಂಪುಟ ಉಪಸಮಿತಿಗಳನ್ನು ಪುನರ್‌ ರಚನೆ ಮಾಡುವ ಅಧಿಕಾರವನ್ನು ಮುಖ್ಯಮಂತ್ರಿಯವರಿಗೆ ನೀಡಲಾಗಿದೆ. ಯಡಿಯೂರಪ್ಪ ಅವರು ರಾಜೀನಾಮೆ ನೀಡಿದ ಬಳಿಕ ಉಪಸಮಿತಿಗಳು ರದ್ದಾಗಿದ್ದವು. 14 ಸಂಪುಟ ಉಪಸಮಿತಿಗಳನ್ನು ಪುನರ್‌ ರಚಿಸಲಾಗುವುದು.

ಕರ್ನಾಟಕ ರಾಜ್ಯ ಮಾನಸಿಕ ಆರೋಗ್ಯ ಆರೈಕೆ ನಿಯಮಗಳಿಗೆ 2021 ಕ್ಕೆ ಅನುಮೋದನೆ ನೀಡಲಾಗಿದೆ. ಮಾನಸಿಕ ಆರೋಗ್ಯ ಆರೈಕೆ ಕಾಯ್ದೆ 2017 ರ ಅನ್ವಯ ಮಾನಸಿಕ ಅಸ್ವಸ್ಥತೆ ಹೊಂದಿರುವ ವ್ಯಕ್ತಿಗಳಿಗೆ ಮಾನಸಿಕ ಆರೋಗ್ಯ ಆರೈಕೆ ಮತ್ತು ಸೇವೆಗಳ ವಿತರಣೆ ಸಮಯದಲ್ಲಿ ಅಂತಹ ವ್ಯಕ್ತಿಗಳ ಹಕ್ಕುಗಳನ್ನು ರಕ್ಷಿಸುವುದು, ಉತ್ತೇಜಿಸುವುದು ಮತ್ತು ಪೂರೈಸುವ ಉದ್ದೇಶಕ್ಕಾಗಿ ಕರಡು ನಿಯಮಗಳನ್ನು ರೂಪಿಸಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗಿತ್ತು. ಅದಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಇದೀಗ ಅಂತಿಮ ಕರಡನ್ನು ಸಂಪುಟ ಸಭೆ ಒಪ್ಪಿಗೆ ನೀಡಿದೆ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು