ಭಾನುವಾರ, 28 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೀಸಲು ಹೆಚ್ಚಳ ವಿಚಾರದಲ್ಲಿ ಕೇಂದ್ರದಿಂದಲೇ ಬಿಜೆಪಿ ಬಣ್ಣ ಬಯಲು: ಸಿದ್ದರಾಮಯ್ಯ 

Last Updated 10 ಡಿಸೆಂಬರ್ 2022, 10:01 IST
ಅಕ್ಷರ ಗಾತ್ರ

ಬೆಂಗಳೂರು: ಹಾಲಿ ಮೀಸಲಾತಿ ಪ್ರಮಾಣದಲ್ಲಿ ಯಾವುದೇ ಬದಲಾವಣೆ ಮಾಡುವುದಿಲ್ಲ ಎಂದು ಹೇಳುವ ಮೂಲಕ ಕೇಂದ್ರ ಸರ್ಕಾರವು, ಎಸ್‌ಸಿ–ಎಸ್‌ಟಿ ಮೀಸಲಾತಿ ವಿಚಾರದಲ್ಲಿ ರಾಜ್ಯ ಬಿಜೆಪಿ ಸರ್ಕಾರದ ಬಣ್ಣ ಬಯಲು ಮಾಡಿದೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಈಗಿರುವ ಶೇಕಡ 50ರ ಮೀಸಲಾತಿ ಮಿತಿಯನ್ನು ಸಡಿಲಗೊಳಿಸುವ ಪ್ರಸ್ತಾವ ಕೇಂದ್ರ ಸರ್ಕಾರದ ಎದುರು ಇದೆಯೇ ಎಂದು ತಮಿಳುನಾಡಿನ ಪಿಎಂಕೆ ಪಕ್ಷದ ಅನ್ಬುಮಣಿ ರಾಮದಾಸ್‌ ಅವರು ರಾಜ್ಯಸಭೆಯಲ್ಲಿ ಕೇಳಲಾದ ಪ್ರಶ್ನೆಗೆ ಉತ್ತರಿಸಿರುವ ಕೇಂದ್ರ ಸರ್ಕಾರ, ಅಂಥ ಯಾವುದೆ ಪ್ರಸ್ತಾವ ಕೇಂದ್ರದ ಎದುರಿಲ್ಲ. ಈಗಿರುವ ಮೀಸಲಾತಿ ಪ್ರಮಾಣದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದೆ.

ಕೇಂದ್ರ ಸರ್ಕಾರ ನೀಡಿರುವ ಉತ್ತರವನ್ನೇ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿರುವ ಸಿದ್ದರಾಮಯ್ಯ, ಹಾಲಿ ಮೀಸಲಾತಿ ಮಿತಿಯನ್ನು ಹೆಚ್ಚಿಸದೇ, ಎಸ್‌ಸಿ–ಎಸ್‌ಟಿ ಮೀಸಲಾತಿ ಹೆಚ್ಚಿಸಲು ಹೇಗೆ ಸಾಧ್ಯ ಎಂದು ಪ್ರಶ್ನೆ ಮಾಡಿದ್ದಾರೆ. ಅಲ್ಲದೇ, ಈ ವಿಚಾರದಲ್ಲಿ ಬಿಜೆಪಿ ಪ್ರಚಾರ ಪಡೆಯುವ ಪ್ರಯತ್ನ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

‘ಮೀಸಲಾತಿ ಪ್ರಮಾಣವನ್ನು ಶೇ. 50ಕ್ಕಿಂತ ಹೆಚ್ಚು ಮಾಡುವ ಪ್ರಸ್ತಾಪ ಇಲ್ಲವೆಂದು ಲೋಕಸಭೆಯಲ್ಲಿ ಕೇಂದ್ರ ಸಚಿವರೇ ಹೇಳುವ ಮೂಲಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳದ ರಾಜ್ಯ ಬಿಜೆಪಿ ನಾಯಕರ ಪ್ರಚಾರದ ಬಲೂನ್‌ಗೆ ಕೇಂದ್ರ ಸರ್ಕಾರವೇ ಸೂಜಿ ಚುಚ್ಚಿದೆ. ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳದ ನಿರ್ಧಾರ ಹಿಂದೆ ಇದ್ದದ್ದು ಆ ಸಮುದಾಯದ ಬಗೆಗಿನ ಕಾಳಜಿ ಅಲ್ಲ, ಅದು ರಾಜಕೀಯ ಲಾಭದ ದುರುದ್ದೇಶ ಮಾತ್ರ ಎನ್ನುವುದನ್ನು ನಾವು ಹೇಳುತ್ತಲೇ ಬಂದಿದ್ದೇವೆ. ಈಗ ಕೇಂದ್ರ ಸರ್ಕಾರವೇ ರಾಜ್ಯ ಬಿಜೆಪಿಯ ಬಣ್ಣ ಬಯಲು ಮಾಡಿದೆ’ ಎಂದು ಆರೋಪಿಸಿದ್ದಾರೆ.

‘ಶೇಕಡಾ 50ರ ಒಟ್ಟು ಮೀಸಲಾತಿ ಪ್ರಮಾಣದ ಮಿತಿಯನ್ನು ಕಿತ್ತುಹಾಕದೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಪ್ರಮಾಣವನ್ನು ಹೇಗೆ ಹೆಚ್ಚಿಸಲು ಸಾಧ್ಯ? ಕೆಲವರನ್ನು ಕೆಲವು ಕಾಲ ಮರುಳು ಮಾಡಬಹುದು, ಎಲ್ಲರನ್ನೂ ಎಲ್ಲ ಕಾಲದಲ್ಲಿಯೂ ಮರುಳು ಮಾಡಲು ಸಾಧ್ಯವಿಲ್ಲ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಹೆಚ್ಚಿಸುವ ಮತ್ತು ಕಡಿಮೆ ಮಾಡುವ ಅಧಿಕಾರ ಕೇಂದ್ರ ಸರ್ಕಾರಕ್ಕೆ ಮಾತ್ರ ಇರುವುದರಿಂದ ರಾಜ್ಯದ ಸರ್ಕಾರ ಮೊದಲು ಇದನ್ನು ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಕೊಟ್ಟು ಒಪ್ಪಿಸಬೇಕಿತ್ತು. ಈ ಕರ್ತವ್ಯದಲ್ಲಿ ರಾಜ್ಯ ಸರ್ಕಾರ ಸೋತಿದೆ’ ಎಂದು ಹೇಳಿದ್ದಾರೆ.

‘ಪರಿಶಿಷ್ಟ ಜಾತಿ ಮತ್ತು ಪಂಗಡದ ಬಗ್ಗೆ ರಾಜ್ಯ ಸರ್ಕಾರಕ್ಕೆ ಪ್ರಾಮಾಣಿಕವಾದ ಕಾಳಜಿ ಇದ್ದಿದ್ದರೆ ತಕ್ಷಣ ಪ್ರಧಾನಮಂತ್ರಿಗಳನ್ನು ಭೇಟಿ ಮಾಡಿ ಮೀಸಲಾತಿ ಹೆಚ್ಚಳಕ್ಕೆ ಕೈಗೊಳ್ಳಬೇಕಾಗಿರುವ ಉಪಕ್ರಮಗಳ ಪ್ರಕ್ರಿಯೆಯನ್ನು ಕೇಂದ್ರ ಸರ್ಕಾರ ಶುರುಮಾಡುವಂತೆ ಮನವರಿಕೆ ಮಾಡಿಕೊಡಬೇಕು. ಮತ್ತೆ ಯಾವ ಕರ್ಮಕ್ಕೆ ಡಬಲ್ ಎಂಜಿನ್ ಸರ್ಕಾರ? ಪ್ರಧಾನ ಮಂತ್ರಿಯವರ ಜೊತೆ ಮಾತನಾಡುವ ಧೈರ್ಯ ಇಲ್ಲದೆ ಇದ್ದರೆ ಸರ್ವಪಕ್ಷಗಳ ನಿಯೋಗವನ್ನು ಕರೆದೊಯ್ಯಲಿ, ಮೀಸಲಾತಿ ಹೆಚ್ಚಳದ ಅವಶ್ಯಕತೆ ಬಗ್ಗೆ ನಾವು ಪ್ರಧಾನಿಯವರಿಗೆ ಮನವರಿಕೆ ಮಾಡಿಕೊಡುತ್ತೇವೆ. ಇದನ್ನು ಬಿಟ್ಟು ಕೇವಲ ಸುಳ್ಳು ಭರವಸೆಗಳನ್ನು ನೀಡುತ್ತಾ ಬಣ್ಣ ಬಯಲು ಮಾಡಿಕೊಳ್ಳಬೇಡಿ’ ಎಂದು ಅವರು ಸಲಹೆ ನೀಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT