ಬೆಂಗಳೂರು: ಒಳ ಮೀಸಲಾತಿ ಜಾರಿಗಾಗಿ ಬೆಂಗಳೂರಿನಲ್ಲಿ ಹೋರಾಟ ನಡೆಸುತ್ತಿದ್ದ ದಲಿತ ಸಮುದಾಯದ ನೂರಾರು ಮಂದಿಯನ್ನು ವಶಕ್ಕೆ ಪಡೆದಿರುವ ಪೊಲೀಸರ ಕ್ರಮವನ್ನು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಖಂಡಿಸಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಹೋರಾಟಗಾರರನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
‘ಬೆಂಗಳೂರಿನಲ್ಲಿ ಒಳ ಮೀಸಲಾತಿಗಾಗಿ ಒತ್ತಾಯಿಸಿ ಹೋರಾಟ ನಡೆಸುತ್ತಿರುವವರನ್ನು ರಾಜ್ಯ ಸರ್ಕಾರ ಬಂಧಿಸಿರುವುದು ಅತ್ಯಂತ ಖಂಡನೀಯ. ತಕ್ಷಣ ಅವರನ್ನು ಬಿಡುಗಡೆಗೊಳಿಸಬೇಕೆಂದು ಮುಖ್ಯಮಂತ್ರಿ ಅವರನ್ನು ಒತ್ತಾಯಿಸುತ್ತೇನೆ. ರಾಜ್ಯ ಸರ್ಕಾರ ಒಂದೋ ಹೋರಾಟಗಾರರ ನ್ಯಾಯಬದ್ಧ ಬೇಡಿಕೆಯನ್ನು ಈಡೇರಿಸಬೇಕು, ಇಲ್ಲವಾದರೆ ಕನಿಷ್ಠ ಅವರನ್ನು ಮಾತುಕತೆಗಾದರೂ ಆಹ್ವಾನಿಸಬೇಕಾಗಿತ್ತು. ಇದ್ಯಾವುದನ್ನು ಮಾಡದೆ ಹೋರಾಟಗಾರರನ್ನು ಪೊಲೀಸರ ಮೂಲಕ ಹಣಿಯಲು ನಡೆಸಿದ ಪ್ರಯತ್ನ ಪ್ರಜಾಪ್ರಭುತ್ವ ವಿರೋಧಿಯಾದುದು’ ಎಂದು ಹೇಳಿದ್ದಾರೆ.
‘ಒಳಮೀಸಲಾತಿ ಜಾರಿಗೆ ಶಿಫಾರಸು ಮಾಡಿರುವ ನ್ಯಾ.ಎ.ಜೆ. ಸದಾಶಿವ ಆಯೋಗದ ವರದಿಯನ್ನು ಜಾರಿಗೆ ತರುತ್ತೇವೆ ಎಂದು ಅಧಿಕಾರಕ್ಕೆ ಬಂದಿರುವ ರಾಜ್ಯ ಸರ್ಕಾರ ಈಗ ಹೋರಾಟಗಾರರನ್ನೇ ಬಂಧಿಸಲು ಹೊರಟಿರುವುದು ವಿಷಾದನೀಯ. ನ್ಯಾ. ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗೆ ಕಾಂಗ್ರೆಸ್ ಬದ್ಧವಾಗಿದೆ. ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಈ ವರದಿಯನ್ನು ಒಪ್ಪಿಕೊಂಡು ಅದನ್ನು ಜಾರಿಗೊಳಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು’ ಎಂದು ಘೋಷಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.