ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನ್ನಡ ಬಳಕೆಗೆ ಅಡ್ಡಿಯಾಗುವ ಕಾನೂನು–ನಿಯಮ ಮೊದಲು ಕಿತ್ತೆಸೆಯಿರಿ: ಸಿದ್ದರಾಮಯ್ಯ

Last Updated 31 ಜನವರಿ 2021, 9:41 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕದಲ್ಲಿ ಕನ್ನಡ ಬಳಕೆಗೆ ಕಾನೂನು–ನಿಯಮಗಳು ಅಡ್ಡಿಯಾಗುತ್ತವೆ ಎಂದಾದರೆ ಮೊದಲು ಅವುಗಳನ್ನು ಕಿತ್ತೆಸೆಯಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

‘ಕನ್ನಡ ಬಳಕೆ ಕಡ್ಡಾಯ ಅಲ್ಲ’ ಎಂಬ ಕೇಂದ್ರ ಸರ್ಕಾರದ ನಿಲುವನ್ನು ಪ್ರಶ್ನಿಸಿ ಟ್ವೀಟ್‌ ಮಾಡಿರುವ ಅವರು, ‘ರಾಜ್ಯದಲ್ಲಿ ಕನ್ನಡ ಬಳಕೆಗೆ ಕಾನೂನು-ನಿಯಮಗಳು ಅಡ್ಡಿಯಾಗುತ್ತವೆ ಎಂದಾದರೆ ಮೊದಲು ಅವುಗಳನ್ನು ಕಿತ್ತೆಸೆಯಬೇಕು. ರಾಜ್ಯದಲ್ಲಿ ನಡೆಯುವ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ಕನ್ನಡ ಕಡ್ಡಾಯವಾಗಿ ಬಳಸಬೇಕು’ ಎಂದು ಆಗ್ರಹಿಸಿದ್ದಾರೆ.

‘ಕನ್ನಡ ಬಳಕೆ ಬಗ್ಗೆ ಕೇಂದ್ರ ಸರ್ಕಾರದ ನಿಲುವು ಖಂಡನೀಯ. ಈ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಸ್ಪಷ್ಟನೆ ನೀಡಬೇಕು. ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಕ್ಷಣ ಕೇಂದ್ರಕ್ಕೆ ಪತ್ರ ಬರೆದು ಈ ಬಗ್ಗೆ ವಿವರಣೆ ಪಡೆದು ರಾಜ್ಯದ ಜನತೆಗೆ ತಿಳಿಸಬೇಕು’ ಎಂದು ಮನವಿ ಮಾಡಿದ್ದಾರೆ.

ಮುಷ್ಕರಕ್ಕೆ ಬೆಂಬಲ: ಬಿಡದಿಯ ಟೊಯೊಟಾ ಘಟಕದ ಕಾರ್ಮಿಕರು ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ನಡೆಸುತ್ತಿದ್ದು, ಸಮಸ್ಯೆ ಬಗೆಹರಿಸುವಂತೆ ಟ್ವಿಟರ್‌ನಲ್ಲಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

‘ಜಪಾನಿನ ಟೊಯೊಟಾ ಕಂಪನಿಗೆ ರಾಜ್ಯದಲ್ಲಿ ಉತ್ಪಾದನಾ ಘಟಕ ಆರಂಭಿಸಲು ಭೂಮಿ, ನೀರು, ವಿದ್ಯುತ್ ನೀಡಿರುವುದು ಇಲ್ಲಿನ ಸರ್ಕಾರ. ನಮ್ಮ ರಾಜ್ಯದ ಸೌಲಭ್ಯಗಳನ್ನು ಬಳಸಿಕೊಂಡು ಇಲ್ಲಿನ ಕಾರ್ಮಿಕರ ಮೇಲೆ ಜಪಾನಿನ ಕಾನೂನುಗಳನ್ನು ಅನ್ವಯಿಸೋಕೆ ಹೊರಟರೆ ಅದು ತಪ್ಪಾಗುತ್ತದೆ’ ಎಂದು ಹೇಳಿದ್ದಾರೆ.

ವಿದೇಶದ ಯಾವುದೇ ಕಂಪನಿಗಳು ನಮ್ಮಲ್ಲಿ ಬಂಡವಾಳ ಹೂಡಿಕೆ ಮಾಡಲು, ಉತ್ಪಾದನಾ ಘಟಕಗಳನ್ನು ಆರಂಭಿಸಲು ನಮ್ಮ ಅಭ್ಯಂತರವಿಲ್ಲ. ಆದರೆ ಅವುಗಳು ಈ ನೆಲದ ಕಾನೂನಿಗೆ ಅನ್ವಯವಾಗಿ ತನ್ನ ಕಾರ್ಮಿಕರನ್ನು ನಡೆಸಿಕೊಳ್ಳಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಸಿ.ಎನ್.ಅಶ್ವತ್ಥನಾರಾಯಣ ಅವರು ಟೊಯೊಟಾ ಕಂಪನಿಯ ಕಾರ್ಕರು ಮತ್ತು ಆಡಳಿತ ಮಂಡಳಿಗಳ ನಡುವೆ ಸಂಧಾನ ಸಭೆ ನಡೆಸಿದ್ದರು. ಕೇವಲ 20 ನಿಮಿಷ ಸಭೆ ನಡೆಸಿ ಸಮಸ್ಯೆ ಬಗೆಹರಿದಿದೆ ಅಂತ ಹೇಳಿದ್ದರು. ಸಮಸ್ಯೆ ಬಗೆಹರಿದಿದ್ರೆ ಕಾರ್ಮಿಕರೇಕೆ ಇನ್ನೂ ಮುಷ್ಕರನಿರತರಾಗಿದ್ದಾರೆ? ಎಂದು ಪ್ರಶ್ನಿಸಿದ್ದಾರೆ.

ಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆಗಳನ್ನು ವಿಧಾನಸಭಾ ಅಧಿವೇಶನದಲ್ಲಿ ಪ್ರಸ್ತಾಪಿಸಿ, ಕೂಡಲೇ ಸಮಸ್ಯೆ ಬಗೆಹರಿಸುವಂತೆ ಮುಖ್ಯಮಂತ್ರಿ ಹಾಗೂ ಕಾರ್ಮಿಕ ಸಚಿವರ ಮೇಲೆ ಒತ್ತಡ ಹೇರುತ್ತೇನೆ ಎಂದು ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT