ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದುಡಿಯುವ ವರ್ಗಕ್ಕೆ ಪ್ಯಾಕೇಜ್‌ ಘೋಷಿಸಿ: ಸಿದ್ದರಾಮಯ್ಯ ಆಗ್ರಹ

ಮುಖ್ಯಮಂತ್ರಿಗೆ ವಿರೋಧ ಪಕ್ಷದ ನಾಯಕ
Last Updated 30 ಏಪ್ರಿಲ್ 2021, 20:16 IST
ಅಕ್ಷರ ಗಾತ್ರ

ಬೆಂಗಳೂರು: ಅತಿಸಣ್ಣ, ಸಣ್ಣ ಮತ್ತು ಮಧ್ಯಮ ಪ್ರಮಾಣದ ರೈತರು ಸೇರಿದಂತೆ ಎಲ್ಲ ಬಗೆಯ ದುಡಿಯುವ ವರ್ಗಗಳಿಗೆ ಲಾಕ್‌ಡೌನ್‌ ಅವಧಿಯಲ್ಲಿ ತಿಂಗಳಿಗೆ ತಲಾ ₹ 10,000 ಮೊತ್ತದ ಪರಿಹಾರ ಪ್ಯಾಕೇಜ್‌ ಘೋಷಣೆ ಮಾಡಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರನ್ನು ಆಗ್ರಹಿಸಿದ್ದಾರೆ.

ಮುಖ್ಯಮಂತ್ರಿಗೆ ಬುಧವಾರ ಐದು ಪುಟಗಳ ಸುದೀರ್ಘ ಪತ್ರ ಬರೆದಿರುವ ಅವರು, ‘ಈಗಾಗಲೇ ಸಂಕಷ್ಟದಿಂದ ಬಸವಳಿಯುತ್ತಿದ್ದ ದುಡಿಯುವ ವರ್ಗದ ಜನರು ರಾಜ್ಯದಲ್ಲಿ ಲಾಕ್‌ಡೌನ್‌ ಜಾರಿ ಮಾಡಿರುವುದರಿಂದ ಮತ್ತಷ್ಟು ಸಮಸ್ಯೆಗೆ ಸಿಲುಕಿದ್ದಾರೆ. ಈ ಜನರನ್ನು ಆರ್ಥಿಕ ಬಿಕ್ಕಟ್ಟಿನಿಂದ ಪಾರುಮಾಡಲು ಆರ್ಥಿಕ ಪ್ಯಾಕೇಜ್‌ ಘೋಷಿಸಬೇಕು’ ಎಂದು ಒತ್ತಾಯಿಸಿದ್ದಾರೆ.

ಆಟೊ, ಟ್ಯಾಕ್ಸಿ ಚಾಲಕರಿಗೂ ತಿಂಗಳಿಗೆ ₹ 10,000 ಪರಿಹಾರ ನೀಡಬೇಕು. ಶೈಕ್ಷಣಿಕ ಶುಲ್ಕವನ್ನು ಶೇಕಡ 50ರಷ್ಟು ಕಡಿತಗೊಳಿಸಲು ಆದೇಶ ಹೊರಡಿಸಬೇಕು. ಎಲ್ಲ ರೈತರಿಗೂ ಸಹಕಾರಿ ಸಂಸ್ಥೆಗಳು ಮತ್ತು ವಾಣಿಜ್ಯ ಬ್ಯಾಂಕ್‌ಗಳ ಮೂಲಕ ₹ 5 ಲಕ್ಷದವರೆಗೆ ಬಡ್ಡಿರಹಿತ ಸಾಲ ನೀಡಬೇಕು. ಗ್ರಾಮೀಣ ಪ್ರದೇಶಗಳಲ್ಲಿ ರಸಗೊಬ್ಬರ, ಬಿತ್ತನೆ ಬೀಜ ಮತ್ತು ಔಷಧಿಗಳ ದಾಸ್ತಾನು ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು. ರಸಗೊಬ್ಬರದ ದರ ಏರಿಕೆಯನ್ನು ತಡೆ ಹಿಡಿದಿರುವ ಆದೇಶವನ್ನು ಮುಂದುವರಿಸಿ, ಹಳೆಯ ದರದಲ್ಲೇ ಮಾರಾಟ ಮಾಡಲು ಆದೇಶಿಸಬೇಕು ಎಂದು ಬೇಡಿಕೆ ಇಟ್ಟಿದ್ದಾರೆ.

ಕೂಲಿ ಕಾರ್ಮಿಕರಿಗೆ ಕೆಲಸ ನೀಡುವ ಉದ್ದೇಶದಿಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಪ್ರತಿ ವ್ಯಕ್ತಿಗೆ ನೀಡುತ್ತಿರುವ ಕೆಲಸದ ದಿನಗಳ ಸಂಖ್ಯೆಯನ್ನು ಹೆಚ್ಚಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು. ನೆರೆಯ ಕೇರಳ ರಾಜ್ಯದ ಮಾದರಿಯಲ್ಲಿ ಕರ್ನಾಟಕದ ಎಲ್ಲ ಕುಟುಂಬಗಳಿಗೂ ಪ್ರತಿ ಸದಸ್ಯನಿಗೆ ತಲಾ 10 ಕೆ.ಜಿ. ಅಕ್ಕಿ, ಗೋಧಿ, ಅಡುಗೆ ಎಣ್ಣೆ, ಬೇಳೆ ಕಾಳುಗಳನ್ನು ಒಳಗೊಂಡ ಪಡಿತರ ಕಿಟ್‌ ಉಚಿತವಾಗಿ ವಿತರಿಸಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಗೃಹ ಕೈಗಾರಿಕೆಗಳು, ಅತಿಸಣ್ಣ, ಸಣ್ಣ ಮತ್ತು ಮಧ್ಯಮ ಪ್ರಮಾಣದ ಕೈಗಾರಿಕೆಗಳ ಸಾಲದ ಮೇಲಿನ ಬಡ್ಡಿಯನ್ನು ಮನ್ನಾ ಮಾಡಬೇಕು. ಈ ಕೈಗಾರಿಕೆಗಳಿ ರಾಜ್ಯ ಸರ್ಕಾರದಿಂದ ಉಚಿತವಾಗಿ ವಿದ್ಯುತ್‌ ಪೂರೈಸಬೇಕು. ಇಂತಹ ಕೈಗಾರಿಕೆಗಳಿಗೆ ಆಮದು ಮತ್ತು ರಫ್ತು ಶುಲ್ಕಗಳಿಂದ ವಿನಾಯಿತಿ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT