ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಳೆ ಹಾನಿ: ತಕ್ಷಣ ಬೆಳೆ ಸಮೀಕ್ಷೆ ಮಾಡಿಸಿ ಪರಿಹಾರ ನೀಡಿ –ಸಿದ್ದರಾಮಯ್ಯ ಆಗ್ರಹ

Last Updated 11 ನವೆಂಬರ್ 2021, 7:20 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಮಳೆಯಿಂದ ತೊಂದರೆಗೆ ಒಳಗಾಗಿರುವ ರೈತರ ಬೆಳೆಗಳನ್ನು ತಕ್ಷಣ ಸಮರ್ಪಕವಾಗಿ ಸಮೀಕ್ಷೆ ಮಾಡಿಸಿ, ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

‘ಕೃಷಿ ಇಲಾಖೆಯ ಮಾಹಿತಿಯ ಪ್ರಕಾರ, ವ್ಯಾಪಕ ಮಳೆಯಿಂದಾಗಿ ಅಕ್ಟೋಬರ್ ಅಂತ್ಯದ ವೇಳೆಗೆ 11.22 ಲಕ್ಷ ಹೆಕ್ಟೇರ್‌ಗೂ ಹೆಚ್ಚು ಪ್ರದೇಶದಲ್ಲಿ ಬೆಳೆದ ಬೆಳೆ ನಷ್ಟವಾಗಿದೆ. ಆದರೆ, ಸರ್ಕಾರ ಕೈ ಕಟ್ಟಿ ಕುಳಿತಿದೆ. ನಷ್ಟವಾಗಿರುವ ಬೆಳೆಗಳನ್ನು ಸಮರ್ಪಕವಾಗಿ ಸಮೀಕ್ಷೆ ಮಾಡುವುದಾಗಲಿ, ಪರಿಹಾರ ನೀಡುವುದನ್ನಾಗಲಿ ಮಾಡುತ್ತಿಲ್ಲ’ ಎಂದು ಪತ್ರದಲ್ಲಿ ಅವರು ದೂರಿದ್ದಾರೆ.

ಮಳೆಯಿಂದಾಗಿ ಕೊಯಿಲಿಗೆ ಬಂದ ಬೆಳೆಗಳು ಹೊಲ ಗದ್ದೆಗಳಲ್ಲೆ ಕೊಳೆತು ಹೋಗುವಂತಾಗಿದೆ. ವಾಡಿಕೆಯಂತೆ ರಾಜ್ಯದಲ್ಲಿ 69.79 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗುತ್ತದೆ. ಕಳೆದ ವರ್ಷ ಮುಂಗಾರಿನಲ್ಲಿ ವಾಡಿಕೆಗಿಂತ ಸುಮಾರು 8 ಲಕ್ಷಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿತ್ತು. ಅಂದರೆ, 77.65 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿತ್ತು. ಕಳೆದ ಬಾರಿಗಿಂತ ಈ ಬಾರಿ 1.07 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಹೆಚ್ಚಾಗಿ ಬಿತ್ತನೆಯಾಗಿದೆ.

ರಾಗಿ, ಭತ್ತ, ಮುಸುಕಿನ ಜೋಳ, ತೊಗರಿ, ಹತ್ತಿ, ಮೆಣಸಿನ ಕಾಯಿ, ಶೇಂಗಾ, ಹೆಸರು, ಉದ್ದು ಮುಂತಾದವುಗಳ ಕೊಯಿಲಿನ ಕೆಲಸ ನಡೆಯುತ್ತಿದೆ. ಆದರೆ ಸೆಪ್ಟೆಂಬರ್ ತಿಂಗಳಲ್ಲಿ ಆರಂಭವಾದ ಮಳೆ ಇನ್ನೂ ನಿಂತಿಲ್ಲ. ಆರಂಭದಲ್ಲಿ ಬಿತ್ತನೆ ಮಾಡುವಾಗ ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಮಳೆ ಕೈಕೊಟ್ಟ ಕಾರಣ ದಕ್ಷಿಣ ಒಳನಾಡು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಬಿತ್ತನೆ ಬೀಜಗಳು ಸರಿಯಾಗಿ ಹುಟ್ಟಲಿಲ್ಲ. ಆನಂತರ ಸರಿಯಾದ ಸಮಯಕ್ಕೆ ರಸಗೊಬ್ಬರ ಸಿಗಲಿಲ್ಲ. ಇಷ್ಟರ ನಡುವೆಯೂ ರೈತರು ಕಷ್ಟ ಪಟ್ಟು ಬೆಳೆಗಳನ್ನು ಬೆಳೆದಿದ್ದಾರೆ. ಆದರೆ ವ್ಯಾಪಕವಾಗಿ ಸುರಿಯುತ್ತಿರುವ ಮಳೆ ಕಾರಣದಿಂದ ರೈತ ಸಮುದಾಯ ಸಂಕಷ್ಟಕ್ಕೆ ಸಿಲುಕಿದೆ ಎಂದೂ ಅವರು ಹೇಳಿದ್ದಾರೆ.

ಮಲೆನಾಡು, ಕರಾವಳಿ ಪ್ರದೇಶಗಳಲ್ಲಿ ಸುರಿಯುತ್ತಿರುವ ವ್ಯಾಪಕ ಮಳೆಯಿಂದಾಗಿ ಅಡಿಕೆ, ಕಾಫಿ, ಮೆಣಸು ಮುಂತಾದ ವಾಣಿಜ್ಯ ಬೆಳೆಗಳು ಹಲವು ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿವೆ. ಕೊಳೆ ರೋಗದ ಜೊತೆಗೆ ಅಡಿಕೆಗೆ ಹಳದಿ ಎಲೆ ರೋಗ ಬಂದಿದೆ. ಮೆಣಸಿನ ಬಳ್ಳಿಗಳು ಕೊಳೆತು ಹೋಗುತ್ತಿವೆ. ಕಾಫಿಯೂ ಕೊಳೆ ರೋಗದ ಸಮಸ್ಯೆ ಎದುರಿಸುತ್ತಿದೆ. ಆದರೆ, ಕೃಷಿ ಇಲಾಖೆಯ ಮಾಹಿತಿಗಳಲ್ಲಿ ಕಳೆದ ಒಂದೂವರೆ ತಿಂಗಳಿಂದ ಅತಿ ಹೆಚ್ಚು ಮಳೆ ಬಿದ್ದು ಹಾನಿಯಾಗಿರುವ ಜಿಲ್ಲೆಗಳ ಮಾಹಿತಿ ಇಲ್ಲ. ಮಲೆನಾಡು, ಕರಾವಳಿ ಜಿಲ್ಲೆಗಳ ಅಡಿಕೆ, ಮೆಣಸು, ಕಾಫಿಗೆ ಆಗಿರುವ ನಷ್ಟದ ಮಾಹಿತಿಯೂ ಇಲ್ಲ.

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ರಾಮನಗರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಮೈಸೂರು, ಮಂಡ್ಯ, ಚಾಮರಾಜನಗರ ಮುಂತಾದ ಜಿಲ್ಲೆಗಳಲ್ಲಿ ಬೆಳೆದ ರಾಗಿ, ಭತ್ತ, ಮುಸುಕಿನ ಜೋಳದ ಬೆಳೆಗಳಿಗೆ ಆಗಿರುವ ನಷ್ಟದ ಕುರಿತು ಸಮೀಕ್ಷೆಯೆ ನಡೆಸಿಲ್ಲ. ಕಲ್ಯಾಣ ಕರ್ನಾಟಕ ಮತ್ತು ಕಿತ್ತೂರು ಕರ್ನಾಟಕದ ಜಿಲ್ಲೆಗಳ ಬೆಳೆಗಳಲ್ಲಿ ಜುಲೈ ತಿಂಗಳಿಂದ ಸುರಿಯುತ್ತಿರುವ ಮಳೆಯಿಂದ ರೈತರು ಭಾರಿ ಸಮಸ್ಯೆ ಎದುರಿಸುತ್ತಿದ್ದಾರೆ. ಅನೇಕ ಕಡೆ ಬರದ ಸಮಸ್ಯೆಯೂ ಇದೆ.

ಕೇಂದ್ರ ಸರ್ಕಾರವೂ ಕೂಡ ಸಮರ್ಪಕ ಪರಿಹಾರ ನೀಡುತ್ತಿಲ್ಲ. 2019–20, 2020–21ರ ವರ್ಷಗಳಲ್ಲಿ ಸುಮಾರು ₹ 1.5 ಲಕ್ಷದಿಂದ ₹ 2 ಲಕ್ಷ ಕೋಟಿ ನಷ್ಟವಾಗಿತ್ತು. ಕೇಂದ್ರ 2019–20ರಲ್ಲಿ ₹ 1,652.85, 2020–21ರಲ್ಲಿ ₹ 1,328.30 ಕೋಟಿ ಮಾತ್ರ ಬಿಡುಗಡೆ ಮಾಡಿದೆ. ಅಂದರೆ, ಕೇವಲ ₹ 2981.15 ಕೋಟಿ ಬಿಡುಗಡೆ ಮಾಡಿದೆ. 2021–22ರ ನಷ್ಟಕ್ಕೆ ನಯಾ ಪೈಸೆ ನೀಡಿಲ್ಲ. ಕೇಂದ್ರ ಮತ್ತು ರಾಜ್ಯಗಳೆರಡೂ ಈ ರೀತಿ ನಿರ್ಲಕ್ಷ್ಯ ತೋರಿಸುವುದು ಅತ್ಯಂತ ಅಮಾನವೀಯ ನಡವಳಿಕೆ’ ಎಂದೂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT