ಮಂಗಳವಾರ, ಡಿಸೆಂಬರ್ 7, 2021
24 °C

ಹಂಪಿ ಕನ್ನಡ ವಿವಿ ಹಗರಣ: ತನಿಖೆಗೆ ಸಮಿತಿ ರಚಿಸುವಂತೆ ಸಿಎಂಗೆ ಸಿದ್ದರಾಮಯ್ಯ ಪತ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಹಂಪಿ ಕನ್ನಡ ವಿಶ್ವವಿದ್ಯಾಲಯದ ಹಗರಣಗಳ ಕುರಿತ ಆರೋಪಗಳ ಬಗ್ಗೆ ತನಿಖೆ ನಡೆಸಲು ತಜ್ಞರು ಮತ್ತು ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಸಮಿತಿಯೊಂದನ್ನು ತಕ್ಷಣ ರಚಿಸಬೇಕು. ತಪ್ಪಿತಸ್ಥರ ವಿರುದ್ಧ ‌ಕ್ರಮ ತೆಗೆದುಕೊಳ್ಳಬೇಕು’ ಎಂದು ಆಗ್ರಹಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

ಹಂಪಿ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಹಗರಣಗಳ ಕುರಿತಂತೆ ಇತ್ತೀಚೆಗೆ ‘ಪ್ರಜಾವಾಣಿ’ಯಲ್ಲಿ ವಿಶೇಷ ವರದಿಗಳು ಪ್ರಕಟವಾಗಿದ್ದವು.

‘ಈ ವಿಶ್ವವಿದ್ಯಾಲಯದಲ್ಲಿ ನೇಮಕಾತಿ ಮಾಡಿಕೊಳ್ಳಲು ಹೊರಟಿರುವ ಹುದ್ದೆಗಳ ವಿಚಾರದಲ್ಲಿ ಮೀಸಲಾತಿ ಉಲ್ಲಂಘನೆ  ಆರೋಪವಿದೆ. ಈ ವಿಚಾರದಲ್ಲಿ ಸಮಾಜ ಕಲ್ಯಾಣ ಇಲಾಖೆ ಮತ್ತು ಕಲ್ಯಾಣ ಕರ್ನಾಟಕ ಅಭಿವೃದ್ಧಿ ಕೋಶಗಳು ತನಿಖೆ ನಡೆಸಿ ವರದಿ ನೀಡಬೇಕು. ಅಲ್ಲಿಯವರೆಗೆ ನೇಮಕಾತಿ ಪ್ರಕ್ರಿಯೆ ಸ್ಥಗಿತಗೊಳಿಸಬೇಕು’ ಎಂದೂ ಪತ್ರದಲ್ಲಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

‘ಈ ವಿಶ್ವವಿದ್ಯಾಲಯಕ್ಕೆ ಅಗತ್ಯವಾಗಿರುವ ಅನುದಾನವನ್ನು ತಕ್ಷಣ ಒದಗಿಸಿ, ಸಂಬಳ, ಪಿಂಚಣಿ, ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನ ಮತ್ತಿತರ ಸೌಲಭ್ಯಗಳಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಬೇಕು. ವಿಶ್ವವಿದ್ಯಾಲಯದ ಆಡಳಿತವನ್ನು ಪಾರದರ್ಶಕವಾಗಿ ನಡೆಯುವಂತೆ ನೋಡಿಕೊಳ್ಳಬೇಕು’ ಎಂದೂ ಆಗ್ರಹಿಸಿದ್ದಾರೆ.

‘ಇತ್ತೀಚೆಗೆ ವಿಶ್ವವಿದ್ಯಾಲಯದಲ್ಲಿ ಕೆಲವು ಬೋಧಕ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ. ಮಾಧ್ಯಮ ವರದಿಗಳ ಪ್ರಕಾರ ಪ್ರತಿ ಹುದ್ದೆಗೆ ₹ 50 ಲಕ್ಷ ನಿಗದಿಪಡಿಸಿ ಹರಾಜು ಮಾಡಲಾಗುತ್ತಿದೆ ಎನ್ನಲಾಗುತ್ತಿದೆ. ಹಣ ಕೊಟ್ಟವರಿಗೆ ಪರೀಕ್ಷೆಗೆ ಮೊದಲೇ ಪ್ರಶ್ನೆಪತ್ರಿಕೆ ನೀಡಲಾಗುತ್ತಿದೆಯೆಂಬ ಗಂಭೀರ ಆರೋಪಗಳಿವೆ ಎಂದೂ ಪತ್ರಿಕೆ ವರದಿ ಮಾಡಿದೆ. ವಿಶ್ವವಿದ್ಯಾಲಯಗಳು ಹುದ್ದೆಗಳನ್ನು ಹರಾಜಿಗಿಟ್ಟರೆ ಬಡ ಪ್ರತಿಭಾವಂತರು ಆಯ್ಕೆಯಾಗಲು ಸಾಧ್ಯವೆ’ ಎಂದೂ ಅವರು ಪ್ರಶ್ನಿಸಿದ್ದಾರೆ.

‘ಕನ್ನಡ ವಿಶ್ವವಿದ್ಯಾಲಯದ ವಿವಿಧ ಹುದ್ದೆಗಳ ಭರ್ತಿಗೆ ಹೊರಡಿಸಿರುವ ಅಧಿಸೂಚನೆಯಲ್ಲಿ ಮೀಸಲಾತಿ ನಿಯಮಗಳನ್ನು ಸಂಪೂರ್ಣ ಉಲ್ಲಂಘಿಸಲಾಗಿದೆ ಎಂಬ ಆರೋಪವಿದೆ. ಜೊತೆಗೆ, ಈ ಹಿಂದೆ ನೇಮಕಗೊಂಡ ಬೋಧಕ, ಬೋಧಕೇತರ ಸಿಬ್ಬಂದಿಯ ಪ್ರೊಬೇಷನರಿ ಅವಧಿಯನ್ನು ಘೋಷಿಸಲು ಕೂಡಾ ಕಮಿಷನ್ ನಿಗದಿಗೊಳಿಸಲಾಗಿದೆ ಮತ್ತು ವಿನಾಕಾರಣ ವಿಳಂಬ ಮಾಡಲಾಗುತ್ತಿದೆ ಎಂಬ ಆರೋಪಗಳಿವೆ. ಆದ್ದರಿಂದ ನೇಮಕಾತಿ ಪ್ರಕ್ರಿಯೆಯನ್ನು ತಕ್ಷಣ ನಿಲ್ಲಿಸಿ ಈ ಕುರಿತು ತನಿಖೆ ನಡೆಸಿ‌ ತಪ್ಪಿತಸ್ಥರ ವಿರುದ್ಧ ತೆಗೆದುಕೊಳ್ಳಬೇಕು’ ಎಂದಿರುವ ಸಿದ್ದರಾಮಯ್ಯ, ‘ರಾಜ್ಯದಲ್ಲಿರುವ ಪ್ರತಿಭಾವಂತರ ಪಟ್ಟಿಯನ್ನು ವಿಷಯವಾರು ತಯಾರಿಸಿ ಯುಜಿಸಿ ನಿಯಮಾವಳಿಗಳಂತೆ ಅವರನ್ನು ವಿಶ್ವವಿದ್ಯಾಲಯಗಳಿಗೆ ನೇಮಿಸಿಕೊಳ್ಳುವ ಕೆಲಸ ಮಾಡಬೇಕು’ ಎಂದು ಸಲಹೆ ನೀಡಿದ್ದಾರೆ.

‘ಕನ್ನಡ ವಿಶ್ವವಿದ್ಯಾಲಯದಲ್ಲಿ ಸಂಬಳ ನೀಡಲು, ಪಿಂಚಣಿ ನಿಗದಿಪಡಿಸಲು ಮತ್ತು ಪಿಂಚಣಿ ಬಿಡುಗಡೆ ಮಾಡಲು ಕಮಿಷನ್ ನಿಗದಿಗೊಳಿಸಲಾಗಿದೆ. ಕಮಿಷನ್ ನೀಡದೆ ಯಾವ ಕಡತಗಳಿಗೂ ಜೀವ ಬರುವುದಿಲ್ಲವೆಂದೂ ವರದಿಯಾಗಿದೆ. ಈ ಕುರಿತಂತೆ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕರು ವಿಶ್ವವಿದ್ಯಾಲಯದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕೆಲವು ನಿವೃತ್ತ ಪ್ರಾಧ್ಯಾಪಕರ ಪಿಂಚಣಿ ನಿಗದಿಪಡಿಸದೆ ಏಳೆಂಟು ತಿಂಗಳಿಂದ ಅವರು ಜೀವನ ನಿರ್ವಹಿಸಲಾರದೆ ಒದ್ದಾಡುತ್ತಿದ್ದಾರೆ ಎಂಬ ದೂರುಗಳೂ ಇವೆ. ವಿಶ್ವವಿದ್ಯಾಲಯದಲ್ಲಿರುವ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳೂ ನೀಡುತ್ತಿದ್ದ ಪ್ರೋತ್ಸಾಹ ಧನ, ವಿದ್ಯಾರ್ಥಿ ವೇತನವನ್ನು 2–3 ವರ್ಷಗಳಿಂದ ನಿಲ್ಲಿಸಲಾಗಿದೆ. ಇದರಿಂದ ವಿದ್ಯಾರ್ಥಿಗಳು ಸಂಶೋಧನೆ, ಕಲಿಕೆ ಮಾಡಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ ಎಂಬ ದೂರುಗಳೂ ಕೇಳಿಬಂದಿವೆ’ ಎಂದೂ ಪತ್ರದಲ್ಲಿ ಅವರು ಉಲ್ಲೇಖಿಸಿದ್ದಾರೆ.

‘ಹಂಪಿಯಲ್ಲಿ ‘ಕನ್ನಡ ವಿಶ್ವವಿದ್ಯಾಲಯ’ವನ್ನು ವಿಶೇಷ ನಿಯಮಗಳನ್ನು ರೂಪಿಸಿ, ‘ಜ್ಞಾನ ಸೃಷ್ಟಿಯ’ ಕೆಲಸ ಮಾಡುವ ವಿಶಿಷ್ಟ ಉದ್ದೇಶದಿಂದ 1991ರಲ್ಲಿ ಸ್ಥಾಪಿಸಲಾಗಿದೆ. ಈ ವಿಶ್ವವಿದ್ಯಾಲಯದಲ್ಲಿ ನಾಡಿನ ಅನೇಕ ಧೀಮಂತ ವಿದ್ವಾಂಸರು ಕೆಲಸ ಮಾಡಿದ್ದಾರೆ. ಹೀಗಾಗಿ, ಇಲ್ಲಿ ಅತ್ಯುತ್ತಮ ಕೆಲಸವೂ ಆಗಿದೆ. ವಿಜ್ಞಾನ, ತಾಂತ್ರಿಕ ಶಿಕ್ಷಣವೂ ಸೇರಿದಂತೆ ಅನೇಕ ವಿಷಯಗಳಿಗೆ ಕನ್ನಡದಲ್ಲಿ ಪಠ್ಯಪುಸ್ತಕಗಳನ್ನು ರೂಪಿಸುವ ಕೆಲಸವನ್ನೂ ಈ ವಿಶ್ವವಿದ್ಯಾಲಯ ಮಾಡಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಕನ್ನಡ ವಿಶ್ವವಿದ್ಯಾಲಯ ಭ್ರಷ್ಟಾಚಾರ, ಕಮಿಷನ್ ವ್ಯವಹಾರ ಮುಂತಾದ ಕೆಟ್ಟ ಕಾರಣಗಳಿಂದ ಸುದ್ಧಿಯಲ್ಲಿದೆ. ತೀವ್ರ ಸ್ವರೂಪದ ಹಗರಣಗಳ ಆರೋಪಗಳು ವಿಶ್ವವಿದ್ಯಾಲಯದ ಘನತೆಯನ್ನು ಗುಡಿಸಿ ಹಾಕುತ್ತಿವೆ’ ಎಂದೂ ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು