ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿಯಲ್ಲಿ ಪಾಳೆಗಾರ, ರಾಜ್ಯದಲ್ಲಿ ಮಾಂಡಲಿಕ: ಸಿದ್ದರಾಮಯ್ಯ ವ್ಯಂಗ್ಯ

Last Updated 10 ಏಪ್ರಿಲ್ 2021, 21:05 IST
ಅಕ್ಷರ ಗಾತ್ರ

ಬೆಂಗಳೂರು: ‘ನಗರಗಳಲ್ಲಿ ರಾತ್ರಿ ಕರ್ಫ್ಯೂ ಹೇರಿರುವ ರಾಜ್ಯ ಬಿಜೆಪಿ ಸರ್ಕಾರದ ತೀರ್ಮಾನ, ಕೊರೊನಾ ಓಡಿಸಲು ತಟ್ಟೆ ಬಡಿಯಲು ಪ್ರಧಾನಿ ನರೇಂದ್ರ ಮೋದಿ ನೀಡಿದ್ದ ಕರೆಯಷ್ಟೇ ಬಾಲಿಶ. ದೆಹಲಿಯಲ್ಲೊಬ್ಬರು ಪಾಳೆಗಾರ, ಕರ್ನಾಟಕದಲ್ಲೊಬ್ಬರು ಮಾಂಡಲಿಕ, ಭಲೇ ಜೋಡಿ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

‘ರಾತ್ರಿ ತೆರೆದಿರುವ ಹೊಟೇಲ್, ಚಿತ್ರಮಂದಿರ ಮತ್ತು ಅಂಗಡಿಮುಂಗಟ್ಟುಗಳನ್ನು ಮುಚ್ಚಿದರೆ ಸಾಲದೇ. ಕೊರೊನಾ ನಿಯಂತ್ರಣಕ್ಕೆ ಯಾವ ರೀತಿಯಲ್ಲಿಯೂ ಉಪಯೋಗವಾಗದ ಆಯ್ದ ನಗರಗಳಲ್ಲಿ ರಾತ್ರಿ ಕರ್ಫ್ಯೂ ನಾಟಕ ಯಾಕೆ’ ಎಂದು ಪ್ರಶ್ನಿಸಿದ್ದಾರೆ.

‘ಕೊರೊನಾ ನಿಯಂತ್ರಿಸುವ ಪ್ರಾಮಾಣಿಕ ಇಚ್ಚೆಯನ್ನು ಮುಖ್ಯಮಂತ್ರಿ ಹೊಂದಿದ್ದರೆ, ಮೊದಲು ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು, ಕೋವಿಡ್ ಪರೀಕ್ಷೆ ಹೆಚ್ಚಿಸಬೇಕು. ಸೋಂಕಿತರಿಗೆ ತಕ್ಷಣ ಚಿಕಿತ್ಸೆ ಲಭ್ಯವಿರುವಂತೆ ನೋಡಿಕೊಳ್ಳಬೇಕು’ ಎಂದು ಅವರು ಆಗ್ರಹಿಸಿದ್ದಾರೆ.

‘ಕೋವಿಡ್ ಲಸಿಕೆ ಆರಂಭಿಸಿ 80 ದಿನಗಳು ಕಳೆದರೂ ಕೇವಲ ಶೇ 1ರಷ್ಟು ಜನರಿಗೆ ನೀಡಲು ಸಾಧ್ಯವಾಗಿದೆ. ರಾಜ್ಯದಲ್ಲಿ ಈಗಾಗಲೇ ಲಸಿಕೆ ಕೊರತೆಯ ದೂರು ಕೇಳಿಬರುತ್ತಿದೆ. ಗಿಮಿಕ್‌ಗಳನ್ನು ಬಿಟ್ಟು ಈ ಕಡೆ ಗಮನಹರಿಸಿ’ ಎಂದೂ ಸಲಹೆ ನೀಡಿದ್ದಾರೆ

‘ಪ್ರಧಾನಿಯ ಅಂಧಾ ದರ್ಬಾರ್‌ನಿಂದ ರಾಜ್ಯದ ಮುಖ್ಯಮಂತ್ರಿ ಸ್ಫೂರ್ತಿ ಪಡೆದರೆ, ಮುಖ್ಯಮಂತ್ರಿಯಿಂದ ಪ್ರೇರಣೆ ಪಡೆದು ಕೆಲವು ಜಿಲ್ಲಾಧಿಕಾರಿಗಳು ಕೊರೊನಾ ನಿಯಂತ್ರಣದ ಹೆಸರಲ್ಲಿ ತುಘಲಕ್ ದರ್ಬಾರ್ ನಡೆಸುತ್ತಿದ್ದಾರೆ. ನೀವು ಸ್ವಲ್ಪ ಬುದ್ದಿ ಕಲಿಯಿರಿ, ಅವರಿಗೂ ಸ್ವಲ್ಪ‌ ಬುದ್ದಿ ಹೇಳಿ’ ಎಂದೂ ಮುಖ್ಯಮಂತ್ರಿ ಅವರಿಗೆ ಸಿದ್ದರಾಮಯ್ಯ ಕುಟುಕಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT