ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾವೇರಿ ನೀರು ನಮ್ಮ ಹಕ್ಕು, ಈ ವಿಷಯದಲ್ಲಿ ರಾಜಿಯಿಲ್ಲ: ಸಿದ್ದರಾಮಯ್ಯ

Last Updated 22 ಮಾರ್ಚ್ 2022, 9:58 IST
ಅಕ್ಷರ ಗಾತ್ರ

ಬೆಂಗಳೂರು: ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರವು ಕೂಡಲೇ ಪರಿಸರ ಅನುಮತಿ ಕೊಡಬೇಕು. ವಿಸ್ತೃತ ಯೋಜನಾ ವರದಿಯನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಅಂಗೀಕರಿಸಬೇಕು ಎಂದು ಸದನದಲ್ಲಿ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ವಿಧಾನಸಭೆಯಲ್ಲಿ ಮಂಗಳವಾರ ಮೇಕೆದಾಟು ಯೋಜನೆ ಕುರಿತು ತಾವು ಮಾತನಾಡಿದ ಭಾಷಣವನ್ನು ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದಾರೆ.

ತಮಿಳುನಾಡಿನ ವಿಧಾನಸಭೆಯಲ್ಲಿ ಅಲ್ಲಿನ ಸರ್ಕಾರ ಮತ್ತು ಇತರೆ ರಾಜಕೀಯ ಪಕ್ಷಗಳು ಮೇಕೆದಾಟು ಯೋಜನೆ ಜಾರಿ ವಿರೋಧಿಸಿ ಕೈಗೊಂಡಿರುವ ನಿರ್ಣಯ ಸಂಪೂರ್ಣ ಕಾನೂನು ಬಾಹಿರವಾಗಿದೆ. ಈ ನಿರ್ಣಯವನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದರು.

'ಸಂವಿಧಾನಬದ್ಧವಾಗಿ ನಮ್ಮ ಪಾಲಿನ ಹೆಚ್ಚುವರಿ ನೀರನ್ನು ಬಳಕೆ ಮಾಡಿಕೊಳ್ಳಲು ಮೇಕೆದಾಟು ಯೋಜನೆ ಮಾಡುತ್ತಿದ್ದೇವೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ನಗರಗಳಿಗೆ ಕುಡಿಯುವ ನೀರು ಮತ್ತು 400 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸುವ ಯೋಜನೆ ಇದಾಗಿದೆ'

'ಸುಪ್ರೀಂ ಕೋರ್ಟ್‌ನ ಅಂತಿಮ ಆದೇಶ 2018ರ ಫೆಬ್ರುವರಿ 16ರಂದು ಬಂದಿದೆ. ಸಹಜ ಪರಿಸ್ಥಿತಿಯ ವರ್ಷದಲ್ಲಿ 177.25 ಟಿಎಂಸಿ ನೀರನ್ನು ಬಿಳಿಗೊಂಡ್ಲುವಿನಿಂದ ತಮಿಳುನಾಡಿಗೆ ಬಿಡಬೇಕು ಎಂದು ತೀರ್ಪು ಹೇಳಿದೆ. ಈ ಆದೇಶವನ್ನು ಎರಡೂ ರಾಜ್ಯಗಳು ಒಪ್ಪಿಕೊಂಡಿವೆ'

'ತನ್ನ ಪಾಲಿನ ನೀರನ್ನು ಪಡೆದುಕೊಳ್ಳುವುದು ಮಾತ್ರ ತಮಿಳುನಾಡಿಗಿರುವ ಹಕ್ಕು. ಸುಪ್ರೀಂ ಕೋರ್ಟ್ ತೀರ್ಪಿನ ನಂತರ ಈ ವರೆಗೆ ತಮಿಳುನಾಡಿಗೆ ಸುಮಾರು 582 ಟಿಎಂಸಿ ನೀರು ಹೆಚ್ಚುವರಿಯಾಗಿ ಹರಿದು ಹೋಗಿದೆ.
ಇದು ನಮ್ಮ ಪಾಲಿನ ನೀರು, ನಾವು ಬಳಸಿಕೊಳ್ಳಬೇಕು' ಎಂದರು.

'ಬೆಂಗಳೂರು ನಗರದ ಸುಮಾರು ಶೇ 30 ಜನರಿಗೆ ಇನ್ನೂ ಕೂಡ ಕಾವೇರಿ ನೀರು ಸಿಗುತ್ತಿಲ್ಲ. ಈ ಜನ ಬೋರ್‌ವೆಲ್‌, ಟ್ಯಾಂಕರ್ ನೀರಿನ ಮೇಲೆ ಅವಲಂಬಿತರಾಗಿದ್ದಾರೆ. ಅಂತರರಾಷ್ಟ್ರೀಯ ಖ್ಯಾತಿಯ ನಗರಕ್ಕೆ ಕುಡಿಯುವ ನೀರು ಕೊಡಲು ಆಗುತ್ತಿಲ್ಲ ಎಂದರೆ ಏನನ್ನಬೇಕು?' ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

'ಸುಪ್ರೀಂ ಕೋರ್ಟ್ ಬೆಂಗಳೂರು ನಗರಕ್ಕೆ 4.75 ಟಿಎಂಸಿ ಕಾವೇರಿ ನೀರನ್ನು ಹಂಚಿಕೆ ಮಾಡಿದೆ. ನಾವು ಬೆಂಗಳೂರು ನಗರಕ್ಕೆ ಕುಡಿಯುವ ನೀರು ಕೊಡಬೇಕು ಎಂದು ₹ 9,000 ಕೋಟಿ ವೆಚ್ಚದ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಿ ಕೇಂದ್ರ ಜಲ ಆಯೋಗಕ್ಕೆ ಸಲ್ಲಿಸಿದ್ದೇವೆ.

ಕಾವೇರಿ ವಿವಾದ ಸುಮಾರು ನೂರು ವರ್ಷಗಳ ಹಿಂದಿನದು. ಅಂದಿನಿಂದಲೂ ನಮಗೆ ಅನ್ಯಾಯ ಆಗುತ್ತಲೇ ಬಂದಿದೆ. 1892 ರ ಒಪ್ಪಂದ, 1924 ರ ಒಪ್ಪಂದ ಹೀಗೆ ಹಲವಾರು ಬಾರಿ ನಮಗೆ ಅನ್ಯಾಯ ಆಗಿದೆ. ಈಗಲೂ ಅನ್ಯಾಯ ಮಾಡಲು ನೋಡಿದರೆ ಅದನ್ನು ಸಹಿಸಿಕೊಂಡಿರಲು ಸಾಧ್ಯವಿಲ್ಲ' ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

'ನಾವು ನಮ್ಮ ನೆಲ, ಜಲ, ಭಾಷೆ, ಗಡಿಗೆ ಸಂಬಂಧಿಸಿದ ವಿಷಯಗಳಲ್ಲಿ ರಾಜಕಾರಣ ಮಾಡಿಲ್ಲ, ಮುಂದೆಯೂ ಮಾಡಲ್ಲ. ಮೊನ್ನೆ ಮುಖ್ಯಮಂತ್ರಿಗಳು ಕರೆದ ಸರ್ವಪಕ್ಷಗಳ ಸಭೆಯಲ್ಲಿ ನಮ್ಮ ಅಭಿಪ್ರಾಯವನ್ನು ಸ್ಪಷ್ಟವಾಗಿ ಹೇಳಿದ್ದೇವೆ. ನಮಗೆ ರಾಜಕೀಯಕ್ಕಿಂತ ನಾಡಿನ ಜನರ ಹಿತ ಮುಖ್ಯ. ತಮಿಳುನಾಡಿನ ನಿರ್ಣಯವನ್ನು ಖಂಡಿಸಿ ನಾವು ಕೂಡ ಖಂಡನಾ ನಿರ್ಣಯವನ್ನು ಮಾಡಿ, ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕುವ ಕೆಲಸ ಮಾಡೋಣ. ಸರ್ವಪಕ್ಷಗಳ ನಿಯೋಗ ತೆಗೆದುಕೊಂಡು ಹೋಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಜಲ ಸಂಪನ್ಮೂಲ ಸಚಿವರ ಮುಂದೆ ವಸ್ತುಸ್ಥಿತಿಯನ್ನು ಹೇಳೋಣ' ಎಂದು ಸಿದ್ದರಾಮಯ್ಯ ಒತ್ತಾಯಿಸಿದರು.

'ಒಕ್ಕೂಟ ವ್ಯವಸ್ಥೆಯಲ್ಲಿ ಒಕ್ಕೂಟ ಧರ್ಮ ಪಾಲನೆ ಮಾಡಬೇಕಾದುದ್ದು ಕೇಂದ್ರ ಸರ್ಕಾರದ ಕರ್ತವ್ಯ. ರಾಜ್ಯ ಅಭಿವೃದ್ಧಿ ಆದರೆ ಮಾತ್ರ ದೇಶ ಅಭಿವೃದ್ಧಿ ಆಗಲು ಸಾಧ್ಯ. ರಾಜ್ಯದ ಹಿತಾಸಕ್ತಿಗಾಗಿ ರಾಜಕೀಯ ಬದಿಗಿಟ್ಟು ಹೋರಾಟ ಮಾಡಲು ನಾವು ಸಿದ್ಧರಿದ್ದೇವೆ. ಕಾವೇರಿ ನೀರು ನಮ್ಮ ಹಕ್ಕು, ಈ ವಿಷಯದಲ್ಲಿ ರಾಜಿಯಿಲ್ಲ' ಎಂದು ಸಿದ್ದರಾಮಯ್ಯ ಒತ್ತಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT