ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾತಿ ಗಣತಿ ವರದಿಯಿಂದ ಒಬಿಸಿ ಮೀಸಲಾತಿ ಅಡ್ಡಿ ಪರಿಹರಿಸಬಹುದು: ಸಿದ್ದರಾಮಯ್ಯ

Last Updated 13 ಫೆಬ್ರುವರಿ 2022, 6:04 IST
ಅಕ್ಷರ ಗಾತ್ರ

ಬೆಂಗಳೂರು: ‘ಸುಪ್ರೀಂ ಕೋರ್ಟ್ ಇತ್ತೀಚೆಗೆ ನೀಡಿದ ಆದೇಶದಿಂದ ಸ್ಥಳೀಯ ಸಂಸ್ಥೆಗಳಲ್ಲಿ ಇತರ ಹಿಂದುಳಿದ ಜಾತಿಯ (ಒಬಿಸಿ) ರಾಜಕೀಯ ಮೀಸಲಾತಿಗೆ ಎದುರಾಗುವ ಅಡ್ಡಿಯನ್ನು ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನಡೆಸಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ (ಜಾತಿ ಗಣತಿ) ವರದಿಯಿಂದ ಪರಿಹರಿಸಿಕೊಳ್ಳಲು ಸಾಧ್ಯವಿದೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

ಈ ಬಗ್ಗೆ ಭಾನುವಾರ ಪ್ರತಿಕ್ರಿಯಿಸಿರುವ ಅವರು, ‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಕ್ಷಣ ವಿರೋಧ ಪಕ್ಷಗಳ ನಾಯಕರು ಮತ್ತು ಕಾನೂನು ತಜ್ಞರ ಸಭೆ ಕರೆದು ಚರ್ಚೆ ನಡೆಸಿ, ಸುಪ್ರೀಂ ಕೋರ್ಟ್ ಆದೇಶದಿಂದ ಉದ್ಭವವಾಗಿರುವ ಬಿಕ್ಕಟ್ಟು ಪರಿಹಾರಕ್ಕೆ ಅಭಿಪ್ರಾಯ ಪಡೆದು ಹಿಂದುಳಿದ ಜಾತಿಗಳಿಗೆ ನ್ಯಾಯ ಒದಗಿಸಬೇಕು’ ಎಂದು ಆಗ್ರಹಿಸಿದ್ದಾರೆ.

‘ಹಿಂದುಳಿದ ಜಾತಿಗಳು ದಶಕಗಳ ಕಾಲದಿಂದ ರಾಜಕೀಯ ಮೀಸಲಾತಿ ಇಲ್ಲದ ಕಾರಣದಿಂದ ನ್ಯಾಯಬದ್ದ ರಾಜಕೀಯ ಪ್ರಾತಿನಿಧ್ಯದಿಂದ ವಂಚಿತವಾಗಿವೆ. ಸುಪ್ರೀಂ ಕೋರ್ಟ್ ಆದೇಶದಿಂದ ಅವರು ಅವಕಾಶ ಕಳೆದುಕೊಂಡರೆ ಅದು ಸಾಮಾಜಿಕ ನ್ಯಾಯದ ಉಲ್ಲಂಘನೆಯಾಗುತ್ತದೆ’ ಎಂದೂ ಹೇಳಿದ್ದಾರೆ.

ಮೂರು ಹಂತದ ಪರಿಶೀಲನೆ ನಡೆಸಿ ಹಿಂದುಳಿದ ಜಾತಿಗಳ ರಾಜಕೀಯ ಮೀಸಲಾತಿ ರೂಪಿಸಬೇಕೆಂದು ಸುಪ್ರೀಂ ಕೋರ್ಟ್ ಹೇಳಿದೆ. ದೇಶದಲ್ಲಿಯೇ ಮೊದಲ ಬಾರಿ ಮನೆ ಮನೆ ತೆರಳಿ ರಾಜ್ಯದಲ್ಲಿ ನಡೆಸಲಾಗಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಸುಪ್ರೀಂ ಕೋರ್ಟ್ ಒಪ್ಪಿಕೊಳ್ಳಬಹುದೆಂಬ ಭರವಸೆ ನನಗಿದೆಎಂದಿದ್ದಾರೆ.

ಹಿರಿಯ ವಕೀಲ ಕಾಂತರಾಜ್ ನೇತೃತ್ವದ ಹಿಂದುಳಿದ ವರ್ಗಗಳ ಆಯೋಗದ ಕಾರ್ಯವ್ಯಾಪ್ತಿಯಲ್ಲಿ ರಾಜಕೀಯ ಕ್ಷೇತ್ರ ಸೇರಿಲ್ಲದೆ ಇದ್ದರೂ ಅದು ರಾಜ್ಯದ ಎಲ್ಲ ಜಾತಿ, ಜನರ ರಾಜಕೀಯ ಪ್ರಾತಿನಿಧ್ಯದ ಮಾಹಿತಿಯನ್ನು ಕೂಡಾ ಸಂಗ್ರಹಿಸಿದೆ. ರಾಜ್ಯ ಸರ್ಕಾರ ಈ ಅಂಶವನ್ನು ಗಮನಕ್ಕೆ ತಂದರೆ ಸುಪ್ರೀಂ ಕೋರ್ಟ್ ಗಣನೆಗೆ ತೆಗೆದುಕೊಳ್ಳಬಹುದು.

ರಾಜ್ಯ ಬಿಜೆಪಿ ಸರ್ಕಾರ ಕಾಲ ವ್ಯಯ ಮಾಡದೆ ಹಿಂದುಳಿದ ವರ್ಗಗಳ ಆಯೋಗದ ಸಾಮಾಜಿಕ ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯನ್ನು ತಕ್ಷಣ ಒಪ್ಪಿಕೊಂಡು ಜಾರಿಗೆ ತರಬೇಕು. ಇದೇ ವರದಿಯನ್ನು ಮುಂದಿಟ್ಟುಕೊಂಡು ಸುಪ್ರೀಂ ಕೋರ್ಟ್ ಮುಂದೆ ವಾದ ಮಂಡಿಸಿ ಹಿಂದುಳಿದ ಜಾತಿಗಳಿಗೆ ಆಗಲಿರುವ ಅನ್ಯಾಯ ತಪ್ಪಿಸಬೇಕು ಎಂದೂ ಹೇಳಿದ್ದಾರೆ.

ನಾನು ಮುಖ್ಯಮಂತ್ರಿ ಆಗಿದ್ದಾಗಲೇ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮೂಲಕ ರಾಜ್ಯದಲ್ಲಿ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ನಡೆಸಿದ್ದೆ. ಇದರಲ್ಲಿ ಎಲ್ಲ ಜಾತಿ ಜನರ ರಾಜಕೀಯ ಪ್ರಾತಿನಿಧ್ಯದ ನಿಖರವಾದ ಮಾಹಿತಿ ಇರುವುದರಿಂದ ಬೇರೆ ರಾಜ್ಯಗಳಂತೆ ಪ್ರತ್ಯೇಕ ಸಮೀಕ್ಷೆ ನಡೆಸುವ ಅಗತ್ಯ ಇರಲಾರದು.

2010ರಲ್ಲಿಯೇ ಸುಪ್ರೀಂ ಕೋರ್ಟ್ ರಾಜಕೀಯ ಮೀಸಲಾತಿಗೆ ಪ್ರತ್ಯೇಕ ಮಾನದಂಡ ರೂಪಿಸುವಂತೆ ಆದೇಶಿಸಿತ್ತು. ಆ ಆದೇಶವನ್ನು ಪರಿಶೀಲಿಸಲು ನಾನು ಮುಖ್ಯಮಂತ್ರಿ ಆಗಿದ್ದಾಗ ಕಾನೂನು ಸಚಿವ ಟಿ.ಬಿ. ಜಯಚಂದ್ರ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿದ್ದೆ. ಅದೇ ಸಮಿತಿಯನ್ನು ಪುನರ್‌ ರಚಿಸಿ ಈಗಿನ ಬಿಕ್ಕಟ್ಟಿಗೆ ಪರಿಹಾರಕ್ಕೆ ಪ್ರಯತ್ನಿಸಬೇಕು. ಮೀಸಲಾತಿಗೆ ಸಂಬಂಧಿಸಿದ ಪ್ರಕರಣಗಳು ವಿಚಾರಣೆಗೆ ಬಂದಾಗೆಲ್ಲ ಸುಪ್ರೀಂ ಕೋರ್ಟ್ ವಿಸ್ತೃತ, ವಿಶ್ವಾಸಾರ್ಹ ಅಂಕಿ-ಅಂಶಗಳ ಆಧಾರವನ್ನು ಕೇಳುತ್ತಾ ಬಂದಿದೆ. ಇದು ಕರ್ನಾಟಕದಲ್ಲಿ ನಡೆದಂತೆ ಮನೆಮನೆಗೆ ಹೋಗಿ ಸಂಗ್ರಹಿಸಿದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯೇ ಸರಿಯಾದ ಉತ್ತರವಾಗಿದೆಎಂದೂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಸಮೀಕ್ಷೆಯ ವರದಿ ಸಿದ್ದವಿರುವುದರಿಂದ ಸುಪ್ರೀಂ ಕೋರ್ಟ್ ಆದೇಶದಿಂದ ಬೇರೆ ರಾಜ್ಯಗಳಂತೆ ಕರ್ನಾಟಕ ರಾಜ್ಯ ಆತಂಕ ಪಡಬೇಕಾಗಿಲ್ಲ. ರಾಜ್ಯ ಸರ್ಕಾರ ರಾಜಕೀಯ ಮಾಡದೆ ಈ ವರದಿಯನ್ನು ಮೊದಲು ಜಾರಿಗೆ ತರಬೇಕು. ಸುಪ್ರೀಂ ಕೋರ್ಟ್ ಆದೇಶವನ್ನು ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆಗಳನ್ನು ಮುಂದೂಡಲು ಸಿಕ್ಕಿದ ಪಿಳ್ಳೆ ನೆಪ ಎಂದು ಪರಿಗಣಿಸದೆ, ಹಿಂದುಳಿದ ಜಾತಿಗಳಿಗೆ ಆಗಲಿರುವ ರಾಜಕೀಯ ಅನ್ಯಾಯವನ್ನು ಸರಿಪಡಿಸಲು ಯುದ್ದೋಪಾದಿಯಲ್ಲಿ ತನ್ನನ್ನು ತೊಡಗಿಸಿಕೊಳ್ಳಬೇಕುಎಂದೂ ಒತ್ತಾಯಿಸಿದ್ದಾರೆ.

ಜಿಲ್ಲಾ ಪಂಚಾಯತಿ, ತಾಲ್ಲೂಕು ಪಂಚಾಯಿತಿಗಳಲ್ಲಿ ದೇಶದಲ್ಲಿಯೇ ಮೊದಲ ಬಾರಿ ಹಿಂದುಳಿದ ಜಾತಿಗಳಿಗೆ ರಾಜಕೀಯ ಮೀಸಲಾತಿ ನೀಡಿದ ರಾಜ್ಯ ಕರ್ನಾಟಕ. ಪ್ರಧಾನಿ ರಾಜೀವ್ ಗಾಂಧಿಯವರು ಸಂವಿಧಾನಕ್ಕೆ 73 ಮತ್ತು 74ನೇ ತಿದ್ದುಪಡಿ ಮಾಡಿ ಈ ಮೀಸಲಾತಿಯನ್ನು ಇಡೀ ದೇಶಕ್ಕೆ ವಿಸ್ತರಿಸಿದ್ದರುಎಂದು ಸಿದ್ದರಾಮಯ್ಯ ನೆನಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT