ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಫ್‌ಡಿಎ ಪ್ರಶ್ನೆ ಪತ್ರಿಕೆ ಸೋರಿಕೆ: ಆರು ಮಂದಿ ಬಂಧನ, ಪರೀಕ್ಷೆ ಮುಂದೂಡಿಕೆ

Last Updated 23 ಜನವರಿ 2021, 15:14 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಾದ್ಯಂತ ನಾಳೆ (ಜ. 24) ನಡಯಬೇಕಿದ್ದ ಎಫ್‌ಡಿಎ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಸಂಗತಿಯನ್ನು ಸಿಸಿಬಿ ಪೊಲೀಸರು ಪತ್ತೆ ಮಾಡಿದ್ದು, ಈ ಸಂಬಂಧ ಆರು ಮಂದಿಯನ್ನು ಬಂಧಿಸಿದ್ದಾರೆ.

ರಾಚಪ್ಪ, ಚಂದ್ರ ಬಂಧಿತರು. ಉಳಿದ ನಾಲ್ವರ ಹೆಸರು ಗೊತ್ತಾಗಿಲ್ಲ. ಬಂಧಿತರಿಂದ ಪ್ರಶ್ನೆಪತ್ರಿಕೆಗಳು ಹಾಗೂ ₹24 ಲಕ್ಷ ನಗದು ಜಪ್ತಿ ಮಾಡಲಾಗಿದೆ.

‘ಕರ್ನಾಟಕ ಲೋಕಸೇವಾ ಆಯೋಗದಿಂದ (ಕೆಪಿಎಸ್‌ಸಿ) ನಡೆಯಬೇಕಿದ್ದ ಎಫ್‌ಡಿಎ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾದ ಬಗ್ಗೆ ಮಾಹಿತಿ ಬಂದಿತ್ತು. ವಿಶೇಷ ತಂಡವೊಂದನ್ನು ರಚಿಸಿ ಕಾರ್ಯಾಚರಣೆ ನಡೆಸಿ, ಆರೋಪಿಗಳನ್ನು ಬಂಧಿಸಲಾಗಿದೆ’ ಎಂದು ಸಿಸಿಬಿಯ ಜಂಟಿ ಕಮಿಷನರ್ ಸಂದೀಪ್ ಪಾಟೀಲ ಹೇಳಿದರು.

‘ಪ್ರಶ್ನೆಪತ್ರಿಕೆ ಹಂಚಲು ಬಳಕೆ ಮಾಡುತ್ತಿದ್ದ ಮೂರು ವಾಹನಗಳನ್ನೂ ಜಪ್ತಿ ಮಾಡಲಾಗಿದೆ. ಸೋರಿಕೆ ಸಂಗತಿಯನ್ನು ಕೆಪಿಎಸ್‌ಸಿ ಅಧಿಕಾರಿಗಳಿಗೂ ತಿಳಿಸಲಾಗಿದೆ. ಆರೋಪಿಗಳನ್ನು ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲಾಗುವುದು. ಸೋರಿಕೆ ಎಲ್ಲಿಂದ ಆಯಿತು ಎಂಬುದು ಇನ್ನಷ್ಟೇ ತಿಳಿಯಬೇಕಿದೆ’ ಎಂದೂ ತಿಳಿಸಿದರು.

ಎಫ್‌ಡಿಎ ಪರೀಕ್ಷೆ ಮುಂದೂಡಿಕೆ
ಬೆಂಗಳೂರು: ಪ್ರಶ್ನೆಪತ್ರಿಕೆ ಸೋರಿಕೆ ಸಂಬಂಧ ಆರು ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿರುವ ಬೆನ್ನಲ್ಲೇ, ನಾಳೆ (.ಜ. 24) ನಡೆಯಬೇಕಿದ್ದ ಎಫ್‌ಡಿಎ ಪರೀಕ್ಷೆಯನ್ನು ಮುಂದೂಡಲಾಗಿದೆ.

‘2019ನೇ ಸಾಲಿನ ಪ್ರಥಮ ದರ್ಜೆ ಸಹಾಯಕ (ಎಫ್‌ಡಿಎ) ಹುದ್ದೆಗಳ ನೇಮಕಾತಿಗಾಗಿ ಜ. 24 ಹಾಗೂ ಜ. 25ರಂದು ಪರೀಕ್ಷೆ ನಡೆಯಬೇಕಿತ್ತು. ಆದರೆ, ಪರೀಕ್ಷೆಯ ಪ್ರಶ್ನೆಪತ್ರಿಕೆಗಳು ದುಷ್ಕರ್ಮಿಗಳ ಕೈಗೆ ಸಿಕ್ಕಿರುವುದು ಮೂಲಗಳಿಂದ ಗೊತ್ತಾಗಿದೆ. ಅದೇ ಕಾರಣಕ್ಕೆ ಪರೀಕ್ಷೆಯನ್ನು ಮುಂದೂಡಲಾಗಿದೆ’ ಎಂದುಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಕಾರ್ಯದರ್ಶಿ ಜಿ. ಸತ್ಯವತಿ ತಿಳಿಸಿದ್ದಾರೆ.

‘ಸ್ಪರ್ಧಾತ್ಮಕ ಪರೀಕ್ಷೆಗಳ ದಿನಾಂಕವನ್ನು ಮರು ನಿಗದಿಪಡಿಸಲಾಗುವುದು. ಆ ಬಗ್ಗೆ ಮುಂದಿನ ದಿನಗಳಲ್ಲಿ ಮಾಹಿತಿ ನೀಡಲಾಗುವುದು’ ಎಂದೂ ಹೇಳಿದ್ದಾರೆ.

ಕನ್ನಡ ಪ್ರಶ್ನೆಪತ್ರಿಕೆ ಸೋರಿಕೆ
‘ಬೆಂಗಳೂರಿನ ಕೆಲವು ಕಡೆ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಮಾಹಿತಿ ಸಿಸಿಬಿ ಮೂಲಕ ನಮಗೆ ಸಿಕ್ಕಿದೆ. ಭಾನುವಾರ ಬೆಳಿಗ್ಗೆ ಮತ್ತು ಮಧ್ಯಾಹ್ನ ಎರಡು ಪರೀಕ್ಷೆ ನಡೆಯಬೇಕಿತ್ತು. ಆದರೆ, ಬೆಳಿಗ್ಗೆ ನಡೆಯಬೇಕಿದ್ದ ಕನ್ನಡ ಪತ್ರಿಕೆ ಸೋರಿಕೆಯಾಗಿದೆ ಎಂದು ಗೊತ್ತಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಸುವಂತೆ ನಾವು ಕೂಡಾ ದೂರು ಕೊಟ್ಟಿದ್ದೇವೆ’ ಎಂದು ಪರೀಕ್ಷಾ ನಿಯಂತ್ರಕರಾದ ದಿವ್ಯಾಪ್ರಭು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT