ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಣ್ಣ ಆಸ್ಪತ್ರೆಗಳಲ್ಲಿ ಕೋವಿಡ್‌ ಚಿಕಿತ್ಸೆ ನಿಷೇಧ: ಆರೋಗ್ಯ ಸಚಿವ ಡಾ.ಕೆ. ಸುಧಾಕರ್

ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌ ಹೇಳಿಕೆ
Last Updated 21 ಏಪ್ರಿಲ್ 2021, 17:30 IST
ಅಕ್ಷರ ಗಾತ್ರ

ಬೆಂಗಳೂರು: ಆಮ್ಲಜನಕದ ಪೂರೈಕೆ ವ್ಯವಸ್ಥೆ ಇಲ್ಲದ ಸಣ್ಣ ಆಸ್ಪತ್ರೆಗಳಲ್ಲಿ ಕೋವಿಡ್‌ ರೋಗಿಗಳಿಗೆ ಚಿಕಿತ್ಸೆ ನೀಡುವುದನ್ನು ನಿಷೇಧಿಸಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌ ತಿಳಿಸಿದರು.

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರ ಕಚೇರಿಯಲ್ಲಿ ಬುಧವಾರ ಕೋವಿಡ್‌ ನಿಯಂತ್ರಣ ಮತ್ತು ಚಿಕಿತ್ಸೆ ಕುರಿತು ಚರ್ಚಿಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘20ರಿಂದ 30 ಹಾಸಿಗೆಗಳ ಸಾಮರ್ಥ್ಯದ ಸಣ್ಣ ಆಸ್ಪತ್ರೆಗಳಲ್ಲೂ ಕೋವಿಡ್‌ ರೋಗಿಗಳನ್ನು ದಾಖಲಿಸಲಾಗುತ್ತಿದೆ. ಅಲ್ಲಿ ಆಮ್ಲಜನಕದ ಕೊರತೆಯಿಂದ ಸಾವಿನ ಸಂಖ್ಯೆ ಹೆಚ್ಚುವ ಅಪಾಯವಿದೆ’ ಎಂದರು.

ಆಮ್ಲಜನಕ ಪೂರೈಕೆ ವ್ಯವಸ್ಥೆ ಹೊಂದಿರುವ ಆಸ್ಪತ್ರೆಗಳು ಮಾತ್ರ ಕೋವಿಡ್‌ ರೋಗಿಗಳನ್ನು ದಾಖಲು ಮಾಡಿಕೊಳ್ಳಬೇಕು. ಆಮ್ಲಜನಕದ ಪೂರೈಕೆ ಇಲ್ಲದ ಆಸ್ಪತ್ರೆಗಳಲ್ಲಿ ಕೋವಿಡ್‌ ಹೊರತಾದ ರೋಗಿಗಳಿಗೆ ಚಿಕಿತ್ಸೆ ನೀಡಬೇಕು. ಈ ಸಂಬಂಧ ಸ್ಪಷ್ಟವಾಗಿ ಆದೇಶ ಹೊರಡಿಸಲಾಗುವುದು ಎಂದು ಹೇಳಿದರು.

ಆಮ್ಲಜನಕದ ಕೊರತೆ ಇಲ್ಲ: ಆಮ್ಲಜನಕದ ಕೊರತೆ ನೀಗಲು ಹಲವು ದಿನಗಳಿಂದ ಪ್ರಯತ್ನ ಆರಂಭಿಸಲಾಗಿತ್ತು. ಸಂಸದ ತೇಜಸ್ವಿ ಸೂರ್ಯ ಮತ್ತು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್‌ ಅವರೊಂದಿಗೆ ಕೈಗಾರಿಕೆಗಳ ಪ್ರತಿನಿಧಿಗಳ ಜತೆ ಸಭೆ ನಡೆಸಲಾಗಿತ್ತು. ಅದು ಫಲಪ್ರದವಾಗಿದ್ದು, ಸದ್ಯದ ಸ್ಥಿತಿಯಲ್ಲಿ ಆಸ್ಪತ್ರೆಗಳಿಗೆ ಅಗತ್ಯವಿರುವಷ್ಟು ಆಮ್ಲಜನಕ ಲಭಿಸುತ್ತಿದೆ ಎಂದರು.

ಮೇ ಅಂತ್ಯದ ವೇಳೆಗೆ ರಾಜ್ಯಕ್ಕೆ 1,500 ಟನ್‌ನಷ್ಟು ಆಮ್ಲಜನಕ ಬೇಕಾಗುತ್ತದೆ ಎಂದು ತಜ್ಞರು ಅಂದಾಜಿಸಿದ್ದಾರೆ. ಈ ಕಾರಣದಿಂದ ಆಮ್ಲಜನಕದ ಹಂಚಿಕೆ ಹೆಚ್ಚಿಸುವಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಆರೋಗ್ಯ ಸಚಿವರಿಗೆ ಪತ್ರ ಬರೆಯಲಾಗುವುದು ಎಂದರು.

ರೆಮ್‌ಡೆಸಿವಿರ್‌ ಔಷಧಿಯ ಕೊರತೆ ಪರಿಹರಿಸುವುದಕ್ಕೂ ಪ್ರಯತ್ನ ಆರಂಭವಾಗಿದೆ. ಮಂಗಳವಾರ ಒಂದೇ ದಿನ 23,000 ಡೋಸ್‌ನಷ್ಟು ರೆಮ್‌ಡೆಸಿವಿರ್‌ ಔಷಧಿ ಪೂರೈಕೆಯಾಗಿದೆ. ಈ ಪೈಕಿ 10,000 ಡೋಸ್‌ಗಳನ್ನು ಸರ್ಕಾರಿ ಆಸ್ಪತ್ರೆಗೆ ಮತ್ತು 13,000 ಡೋಸ್‌ ಔಷಧಿಯನ್ನು ಖಾಸಗಿ ಆಸ್ಪತ್ರೆಗಳಿಗೆ ಒದಗಿಸಲಾಗಿದೆ ಎಂದು ವಿವರಿಸಿದರು.

ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಇನ್ನೂ ತೀವ್ರ ನಿಗಾ ಘಟಕದ (ಐಸಿಯು) 2,000 ಹಾಸಿಗೆಗಳ ಅಗತ್ಯವಿದೆ ಎಂದು ಅಂದಾಜಿಸಲಾಗಿದೆ. ಈ ಸಂಖ್ಯೆ ಹೆಚ್ಚಿಸಲು ಈಗಾಗಲೇ ಪ್ರಯತ್ನ ಆರಂಭಿಸಲಾಗಿದೆ ಎಂದು ಸುಧಾಕರ್ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT