ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸುರಕ್ಷಿತ ವ್ಯವಸ್ಥೆ: ಎಸ್‌. ಸುರೇಶ್‌ ಕುಮಾರ್‌

ಯಾರೂ ಆತಂಕಕ್ಕೆ ಒಳಗಾಗಬೇಕಿಲ್ಲ– ಶಿಕ್ಷಣ ಸಚಿವ ಎಸ್‌. ಸುರೇಶ್‌ಕುಮಾರ್‌
Last Updated 9 ಜೂನ್ 2021, 21:34 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಜ್ಯ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ನೀಡಲಿರುವ ಸುಧಾರಿತ ಎಸ್ಒಪಿ (ಪ್ರಮಾಣಿತ ಕಾರ್ಯಾಚರಣೆ ವಿಧಾನ) ಪ್ರಕಾರ ಸುರಕ್ಷಿತ ವ್ಯವಸ್ಥೆಯೊಳಗೆ ಈ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದೆ. ಹೀಗಾಗಿ, ಯಾರೂ ಆತಂಕಕ್ಕೆ ಒಳಗಾಗಬೇಕಿಲ್ಲ’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌. ಸುರೇಶ್‌ಕುಮಾರ್‌ ತಿಳಿಸಿದರು.

ಎಸ್ಸೆಸ್ಸೆಲ್ಸಿ ಪರೀಕ್ಷೆ ಕುರಿತು ಇಲಾಖೆಯ ಹಿರಿಯ ಅಧಿಕಾರಿಗಳು, ಎಲ್ಲ 34 ಶೈಕ್ಷಣಿಕ ಜಿಲ್ಲೆಗಳ ಉಪನಿರ್ದೇಶಕರು,
ಬಿಇಒ ಜೊತೆ ಬುಧವಾರ ವಿಡಿಯೊ ಸಂವಾದ ನಡೆಸಿದ ಅವರು, ‘ಪರೀಕ್ಷೆ ಕುರಿತು ಮಕ್ಕಳು ಮತ್ತು ಪೋಷಕರಲ್ಲಿ ಆತ್ಮ
ವಿಶ್ವಾಸ ಮೂಡಿಸುವ ಕ್ರಮಗಳನ್ನು ಕೈಗೊಳ್ಳಬೇಕು. ಈ ಬಾರಿಯ ಬದಲಾಗಿರುವ ಪರೀಕ್ಷೆ ಪದ್ಧತಿ ಬಗ್ಗೆ ತಿಳಿವಳಿಕೆ ನೀಡಲು ಕ್ರಮ ವಹಿಸಬೇಕು’ ಎಂದರು.

‘ಕೋವಿಡ್ ನಿಯಂತ್ರಣಕ್ಕೆ ಬಂದ ನಂತರ ಕೇವಲ ಎರಡು ದಿನ ಪರೀಕ್ಷೆ ನಡೆಯಲಿದೆ. ವಾರಂತ್ಯಕ್ಕೆ ಮಾದರಿ ಪ್ರಶ್ನೆಪತ್ರಿಕೆಗಳು ಶಾಲೆಗಳಿಗೆ ತಲುಪಲಿವೆ. ಮಕ್ಕಳಿಗೆ ಒಎಂಆರ್ ಶೀಟ್ ರೂಪದಲ್ಲಿರುವ ಪ್ರಶ್ನೆಪತ್ರಿಕೆಗಳಿಗೆ ಉತ್ತರಿಸುವ ಕುರಿತು ಶಿಕ್ಷಕರು ಸಲಹೆ ನೀಡಬೇಕು. ಪ್ರತಿ ವಿಷಯಕ್ಕೆ ತಲಾ 40 ಅಂಕದ ಪ್ರಶ್ನೆಪತ್ರಿಕೆಯಿದ್ದು, ನಾಲ್ಕು ಉತ್ತರಗಳಲ್ಲಿ ಒಂದನ್ನು ಗುರುತಿಸಬೇಕು. ಪ್ರಶ್ನೆಗಳು ನೇರ ಮತ್ತು ಸುಲಭವಾಗಿ ಇರಲಿವೆ’ ಎಂದರು.

‘ಪರೀಕ್ಷೆ ಯಶಸ್ಸಿಗಾಗಿ ವಾರದೊಳಗೆ ವಿವಿಧ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳು ಮತ್ತು ಆಯುಕ್ತರು, ನಿರ್ದೇಶಕರ ಸಭೆ ನಡೆಸಲಾಗುವುದು ಹಾಗೆಯೇ ಜಿಲ್ಲೆಯ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಜೊತೆ ವಿಡಿಯೊ ಸಂವಾದ ನಡೆಸಲಾಗುವುದು. ಪರೀಕ್ಷಾ ಸಿದ್ಧತೆ ಪರಿಶೀಲಿಸಲು ಎಲ್ಲ ಜಿಲ್ಲೆಗಳಿಗೆ ಭೇಟಿ ನೀಡುವ ಬಗ್ಗೆಯೂ ಚಿಂತನೆ ನಡೆಸಿದ್ದೇನೆ’ ಎಂದು ಹೇಳಿದರು.

ಎಲ್ಲ ಮಕ್ಕಳಿಗೂ ಎನ್-95 ಮಾಸ್ಕ್‌

‘ಕಳೆದ ಬಾರಿಗಿಂತ ಈ ಬಾರಿ ಪರೀಕ್ಷಾ ಕೇಂದ್ರಗಳನ್ನು ಹೆಚ್ಚಿಸಲಾಗುವುದು. ಕೋವಿಡ್ ಲಸಿಕೆ ಪಡೆದ ಶಿಕ್ಷಕರನ್ನು ಮಾತ್ರ ಮೇಲ್ವಿಚಾರಕರಾಗಿ ನೇಮಿಸಲಾಗುವುದು. ಶಿಕ್ಷಕರಿಗೆ ಲಸಿಕೆ ನೀಡುವಂತೆ ಈಗಾಗಲೇ ಆರೋಗ್ಯ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಎಲ್ಲ ಮಕ್ಕಳಿಗೂ ಎನ್-95 ಮಾಸ್ಕ್‌ ಒದಗಿಸಲಾಗುವುದು’ ಎಂದು ಸುರೇಶ್‌ಕುಮಾರ್‌ ತಿಳಿಸಿದರು.

‘ಕಳೆದ ವರ್ಷದಂತೆ ಸ್ಕೌಟ್ಸ್ ಮತ್ತು ಗೈಡ್ಸ್ ಪ್ರತಿನಿಧಿಗಳು ಸಮವಸ್ತ್ರದಲ್ಲಿ ಪರೀಕ್ಷಾ ಕೇಂದ್ರದಲ್ಲಿ ಹಾಜರಿದ್ದು, ಮಕ್ಕಳಿಗೆ ಮಾರ್ಗದರ್ಶನ ನೀಡಲಿದ್ದಾರೆ. ವಾಸಸ್ಥಳದ ಸಮೀಪದ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಈ ಬಾರಿಯೂ ಅವಕಾಶ ನೀಡಲಾಗುವುದು. ಕಳೆದ ಬಾರಿಗಿಂತ 30 ಸಾವಿರಕ್ಕೂ ಹೆಚ್ಚು ಮಕ್ಕಳು ಈ ಬಾರಿ ನೋಂದಾಯಿಸಿಕೊಂಡಿದ್ದಾರೆ’ ಎಂದರು.

ಎಸ್ಸೆಸ್ಸೆಲ್ಸಿ ಫಲಿತಾಂಶದ ಬಳಿಕ ಪ್ರಥಮ ಪಿಯುಸಿ ದಾಖಲಾತಿ

ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟಗೊಂಡ ಬಳಿಕ ಮತ್ತು ‘ದಾಖಲಾತಿ ಮಾರ್ಗಸೂಚಿ 2021–22’ ಬಿಡುಗಡೆ ಮಾಡಿದ ನಂತರ ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ (2021–22) ಪ್ರಥಮ ಪಿಯುಸಿ ತರಗತಿಗೆ ವಿದ್ಯಾರ್ಥಿಗಳ ದಾಖಲಾತಿ ಪ್ರಕ್ರಿಯೆ ಆರಂಭಿಸಬೇಕು’ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಅಲ್ಲಿಯವರೆಗೆ ಕಾಲೇಜುಗಳು ಯಾವುದೇ ಕಾರಣಕ್ಕೂ ಪ್ರಥಮ ಪಿಯುಸಿಗೆ ವಿದ್ಯಾರ್ಥಿಗಳನ್ನು ದಾಖಲು ಮಾಡಿಕೊಳ್ಳಬಾರದು. ಅಲ್ಲದೆ, ಆನ್‌ಲೈನ್‌ ತರಗತಿಗಳನ್ನೂ ಆರಂಭಿಸಬಾರದು ಎಂದು ಅವರು ತಿಳಿಸಿದ್ದಾರೆ.

ಈ ಸೂಚನೆಯನ್ನು ಉಲ್ಲಂಘಿಸಿದ ಕಾಲೇಜುಗಳ ಮೇಲೆ ಕಠಿಣ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು. ಅಲ್ಲದೆ, ಕಾಲೇಜುಗಳ ಮಾನ್ಯತೆಯನ್ನೇ ರದ್ದುಪಡಿಸಲಾಗುವುದು ಎಂದೂ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ತಮ್ಮ ವ್ಯಾಪ್ತಿಯ ಕಾಲೇಜುಗಳ ಪ್ರಾಂಶುಪಾಲರಿಗೆ ಮಾಹಿತಿ ನೀಡಬೇಕು. ಅಲ್ಲದೆ, ನಿಗಾವಹಿಸಿ, ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಎಲ್ಲ ಜಿಲ್ಲೆಗಳ ಉಪ ನಿರ್ದೇಶಕರಿಗೆ ಅವರು ಸುತ್ತೋಲೆ ಹೊರಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT