ಶುಕ್ರವಾರ, ಮೇ 20, 2022
22 °C

ಕನ್ನಡ ರಾಜ್ಯೋತ್ಸವಕ್ಕೆ 500 ಜನರ ಮಿತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕನ್ನಡ ರಾಜ್ಯೋತ್ಸವ ಆಚರಣೆಯ ಸಮಾರಂಭಗಳಿಗೆ 500 ಜನರ ಮಿತಿಯನ್ನು ವಿಧಿಸಿ ರಾಜ್ಯ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ.

‘ಧ್ವಜಾರೋಹಣ ಸ್ಥಳದಲ್ಲಿ ಕಡ್ಡಾಯವಾಗಿ ಅಂತರ ಕಾಯ್ದುಕೊಳ್ಳಬೇಕು ಮತ್ತು ಮಾಸ್ಕ್ ಧರಿಸಿರಬೇಕು. ಕನಿಷ್ಠ ಪ್ರಮಾಣದ ಮನರಂಜನಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಕೋವಿಡ್‌ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಹೊರಡಿಸುವ ಎಲ್ಲ ಮಾರ್ಗಸೂಚಿಗಳನ್ನೂ ಪಾಲಿಸುವುದು ಕಡ್ಡಾಯ’ ಎಂದು ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್‌ ಆದೇಶದಲ್ಲಿ ತಿಳಿಸಿದ್ದಾರೆ.

ಸಂಘ, ಸಂಸ್ಥೆಗಳು ರಾಜ್ಯೋತ್ಸವ ಸಮಾರಂಭಗಳಿಗೂ ಮೊದಲು ಪೊಲೀಸ್‌ ಇಲಾಖೆ, ನಗರ ಸ್ಥಳೀಯ ಸಂಸ್ಥೆಗಳು, ವಿದ್ಯುತ್‌ ಸರಬರಾಜು ಕಂಪನಿಗಳು, ಆರೋಗ್ಯ, ಅಗ್ನಿಶಾಮಕ ಇಲಾಖೆಗಳು, ಮಾಲಿನ್ಯ ನಿಯಂತ್ರಣ ಮಂಡಳಿ ಸೇರಿದಂತೆ ಸಂಬಂಧಿಸಿದ ಇಲಾಖೆಗಳಿಂದ ಪೂರ್ವಾನುಮತಿ ಪಡೆಯಬೇಕು ಎಂದು ಸೂಚಿಸಲಾಗಿದೆ.

ಸಣ್ಣ ಮಕ್ಕಳು, ಹಿರಿಯ ನಾಗರಿಕರು, ಗಂಭೀರ ಸ್ವರೂಪದ ಅನಾರೋಗ್ಯದಿಂದ ಬಳಲುತ್ತಿರುವವರಿಗೆ ಕಾರ್ಯಕ್ರಮಗಳಲ್ಲಿ ಭಾಗವಹಿಸದಂತೆ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಲಾಗಿದೆ.

ಕೋವಿಡ್‌ ಉಸ್ತುವಾರಿಗಳಿಂದ ಧ್ವಜಾರೋಹಣ: ನವೆಂಬರ್‌ 1ರಂದು ನಡೆಯುವ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಸಮಾರಂಭಗಳಲ್ಲಿ ಕೋವಿಡ್‌ ನಿಯಂತ್ರಣಕ್ಕೆ ಉಸ್ತುವಾರಿಗಳಾಗಿ ನಿಯೋಜಿಸಿರುವ ಸಚಿವರೇ ಧ್ವಜಾರೋಹಣ ನೆರವೇರಿಸಲಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರಿನಲ್ಲಿ ನಡೆಯುವ ರಾಜ್ಯಮಟ್ಟದ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸುವರು. ಉಳಿದಂತೆ 26 ಜಿಲ್ಲೆಗಳಲ್ಲಿ ಕೋವಿಡ್‌ ಉಸ್ತುವಾರಿಗಾಗಿ ನಿಯೋಜಿಸಿರುವ ಸಚಿವರು ಧ್ವಜಾರೋಹಣ ಮಾಡುವರು. ಚಾಮರಾಜನಗರ, ರಾಯಚೂರು, ಬಳ್ಳಾರಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳೇ ಧ್ವಜಾರೋಹಣ ನೆರವೇರಿಸಬೇಕು ಎಂದು ಮುಖ್ಯ ಕಾರ್ಯದರ್ಶಿ ತಿಳಿಸಿದ್ದಾರೆ.

ಹಸಿರು ಪಟಾಕಿಗೆ ಮಾತ್ರ ಅವಕಾಶ
ದೀಪಾವಳಿ ಹಬ್ಬದಲ್ಲಿ ಸುಪ್ರೀಂಕೋರ್ಟ್‌ ಆದೇಶದಂತೆ ಹಸಿರು ಪಟಾಕಿ ಮಾತ್ರ ಬಳಕೆ ಮಾಡಬೇಕು ಎಂದು ನಿರ್ಬಂಧ ವಿಧಿಸಿ ಮುಖ್ಯ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.

ನವೆಂಬರ್‌ 1ರಿಂದ 10ರವರೆಗೆ ಹಸಿರು ಪಟಾಕಿ ಮಾರಾಟದ ಮಳಿಗೆಗಳನ್ನು ಮಾತ್ರ ತೆರೆಯಬಹುದು. ಸಕ್ಷಮ ಪ್ರಾಧಿಕಾರಗಳು ಅನುಮತಿ ನೀಡಿರುವ ಸ್ಥಳಗಳಲ್ಲಿ ಮಾತ್ರ ತಾತ್ಕಾಲಿಕ ಪಟಾಕಿ ಮಾರಾಟ ಮಳಿಗೆಗಳನ್ನು ತೆರಯಬೇಕು. ಗ್ರಾಹಕರ ದೇಹದ ತಾಪಮಾನ ಪರೀಕ್ಷೆ ಹಾಗೂ ಸ್ಯಾನಿಟೈಸರ್‌ ಒದಗಿಸುವ ವ್ಯವಸ್ಥೆ ಮಾಡಬೇಕು ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.

ಅದರ ಬೆನ್ನಲ್ಲೇ ಪತ್ರಿಕಾ ಪ್ರಕಟಣೆ ಹೊರಡಿಸಿರುವ ರಾಜ್ಯ ಪೊಲೀಸ್‌ ಮಹಾನಿರ್ದೇಶಕರು, ಪಟಾಕಿ ಹಚ್ಚುವಾಗ ಸುರಕ್ಷತಾ ಕ್ರಮಗಳನ್ನು ಅನುಸರಿಸುವಂತೆ ಸಲಹೆ ನೀಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು