ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್ಒಪಿ ಕಟ್ಟುನಿಟ್ಟಾಗಿ ಜಾರಿಗೊಳಿಸಿ: ಸರ್ಕಾರಕ್ಕೆ ಹೈಕೋರ್ಟ್ ಖಡಕ್ ನಿರ್ದೇಶನ

Last Updated 14 ಜನವರಿ 2022, 7:18 IST
ಅಕ್ಷರ ಗಾತ್ರ

ಬೆಂಗಳೂರು: ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಸಮಯದಲ್ಲಿ ಯಾವುದೇ ರ‍್ಯಾಲಿ, ಪ್ರದರ್ಶನ, ಮೆರವಣಿಗೆ, ಪಾದಯಾತ್ರೆಗಳಿಗೆ ಅವಕಾಶ ನೀಡಬಾರದು" ಎಂದು ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ‌ ಖಡಕ್ ನಿರ್ದೇಶನ ನೀಡಿದೆ.

ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಹಮ್ಮಿಕೊಂಡಿದ್ದ ಪಾದಯಾತ್ರೆಯನ್ನು ತಡೆಯಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ನಗರದ ತಿಂಡ್ಲು ನಿವಾಸಿ ಎ.ವಿ.ನಾಗೇಂದ್ರ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಋತುರಾಜ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಕೆಪಿಸಿಸಿ ಪರ ಹಾಜರಾದ ಹಿರಿಯ ವಕೀಲ ಉದಯ ಹೊಳ್ಳ ಅವರು, 'ಹೈಕೋರ್ಟ್ ಎಚ್ಚರಿಕೆಯ ಹಿನ್ನೆಲೆಯಲ್ಲಿ ಪಾದಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ' ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ಇದನ್ನು ದಾಖಲಿಸಿಕೊಂಡ ನ್ಯಾಯಪೀಠ, 'ಇದೇ 4 ರಂದು ಹೊರಡಿಸಲಾಗಿರುವ ಎಸ್ಒಪಿಯನ್ನು ರಾಜ್ಯದಾದ್ಯಂತ ಕಠಿಣವಾಗಿ ಜಾರಿಗೆ ತನ್ನಿ' ಎಂದು ಸರ್ಕಾರಕ್ಕೆ ನಿರ್ದೇಶಿಸಿ ಅರ್ಜಿ ವಿಲೇವಾರಿ ಮಾಡಿದೆ.

'ಮೇಕೆದಾಟು ಯೋಜನೆಗೆ ಆಗ್ರಹಿಸಿ ಹಮ್ಮಿಕೊಂಡಿರುವ ಪಾದಯಾತ್ರೆ ಮುಂದುವರಿಸದಂತೆ ಕೆಪಿಸಿಸಿಯನ್ನು ನಿರ್ಬಂಧಿಸಬೇಕು. ಯಾವುದೇ ರಾಜಕೀಯ ಪಕ್ಷಗಳಿಗೆ ಮೆರವಣಿಗೆ, ಧರಣಿ ಹಾಗೂ ಪ್ರತಿಭಟನೆ ನಡೆಸಲು ಅನುಮತಿ ನೀಡಬಾರದು. ಈ ನಿಟ್ಟಿನಲ್ಲಿ ಸರ್ಕಾರ ಹಾಗೂ ಸಂಬಂಧಪಟ್ಟ ಪ್ರಾಧಿಕಾರಗಳಿಗೆ ನಿರ್ದೇಶಿಬೇಕು' ಎಂದು ಕೋರಿ ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿತ್ತು.

ಅರ್ಜಿಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಕಂದಾಯ ಮತ್ತು ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳು, ರಾಮನಗರ ಜಿಲ್ಲಾಧಿಕಾರಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತರು ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಪ್ರತಿವಾದಿಯನ್ನಾಗಿ ಕಾಣಿಸಲಾಗಿತ್ತು.

'ಪಾದಯಾತ್ರೆಯಿಂದ ಕೋವಿಡ್ ಸೋಂಕು ವೇಗವಾಗಿ ಹರಡುವ ಸಾಧ್ಯತೆ ಇದೆ. ಕೆಪಿಸಿಸಿ ಸರ್ಕಾರದ ಎಲ್ಲ ನಿಯಮಗಳನ್ನೂ ಉಲ್ಲಂಘಿಸಿ ಪಾದಯಾತ್ರೆ ನಡೆಸುತ್ತಿದೆ. ತಪ್ಪಿತಸ್ಥರ ವಿರುದ್ಧ ಸರ್ಕಾರ ಈ ತನಕ ಯಾವುದೇ ಕ್ರಮ ಜರುಗಿಸಿಲ್ಲ' ಎಂದು ಅರ್ಜಿದಾರರು ಆರೋಪಿಸಿದ್ದರು.

ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಸರ್ಕಾರ ವಿಧಿಸಿರುವ ನಿರ್ಬಂಧಗಳ ನಡುವೆಯೂ ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕೆಪಿಸಿಸಿ ಇದೇ 9ರ ಭಾನುವಾರದಿಂದ 10 ದಿನಗಳ ಪಾದಯಾತ್ರೆ ಆರಂಭಿಸಿತ್ತು. ಈ ಪಾದಯಾತ್ರೆಯಲ್ಲಿ ಕಾರ್ಯಕರ್ತರು, ಮುಖಂಡರು, ಸಾಂಸ್ಕೃತಿಕ ತಂಡಗಳು ಸೇರಿದಂತೆ ಸಾವಿರಾರು ಮಂದಿ ಪಾಲ್ಗೊಂಡಿದ್ದರು. ಎರಡು ದಿನಗಳ ಹಿಂದೆ ನಡೆದ ವಿಚಾರಣೆ ವೇಳೆ ನ್ಯಾಯಪೀಠ ಪಾದಯಾತ್ರೆ ಬಗ್ಗೆ ಸರ್ಕಾರ ಮತ್ತು ಕೆಪಿಸಿಸಿಯನ್ನು ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡಿದ್ದನ್ನು ಇಲ್ಲಿ ಸ್ಮರಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT