ಮಂಗಳವಾರ, 5 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳು: 24 ಗಂಟೆಯೊಳಗೆ ಸುತ್ತೋಲೆ ವಾಪಸ್‌

ಸುತ್ತೋಲೆ ವಾಪಸಿಗೆ ಜಿಲ್ಲಾಧಿಕಾರಿ ಸೂಚನೆ
Last Updated 8 ನವೆಂಬರ್ 2022, 19:38 IST
ಅಕ್ಷರ ಗಾತ್ರ

ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ನಾಡಪ್ರಭು ಕೆಂಪೇಗೌಡರ ಪ್ರಗತಿ ಪ್ರತಿಮೆಯನ್ನು ಇದೇ 11 ರಂದು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆಗೆ ಮಾಡುವ ಕಾರ್ಯಕ್ರಮಕ್ಕೆ ಜಿಲ್ಲೆಯ ಪದವಿಪೂರ್ವ ಕಾಲೇಜುಗಳಿಂದ ವಿದ್ಯಾರ್ಥಿಗಳನ್ನು ಕರೆತರುವಂತೆ ಹೊರಡಿಸಿದ್ದ ಸುತ್ತೋಲೆಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು 24 ಗಂಟೆ ಒಳಗಾಗಿ ವಾಪಸ್‌ ಪಡೆದಿದ್ದಾರೆ.

ಮಂಗಳವಾರ ಬೆಳಿಗ್ಗೆ ಹೊರಡಿಸಿದ ಸುತ್ತೋಲೆ ಮಾಧ್ಯಮಗಳಿಗೆ ಸೋರಿಕೆಯಾಗಿರುವ ವಿಷಯ ಗೊತ್ತಾಗುತ್ತಿದ್ದಂತೆ ಎಚ್ಚೆತ್ತುಕೊಂಡ ಜಿಲ್ಲಾಧಿಕಾರಿ ಆರ್‌. ಲತಾ, ಸುತ್ತೋಲೆ ವಾಪಸು ಪಡೆಯುವಂತೆ ಸೂಚಿಸಿದ್ದರು. ಅದರ ಬೆನ್ನಲೇಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ರಾತ್ರಿ ಮತ್ತೊಂದು ಸುತ್ತೋಲೆ ಹೊರಡಿಸಿ, ‘ಈ ಮೊದಲಿನ ಸುತ್ತೋಲೆ ವಾಪಸ್‌ ಪಡೆದಿರುವುದಾಗಿ’ ಹೇಳಿದರು.

ಈ ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ, ‘ಅಂಥ ಯಾವುದೇ ಸೂಚನೆ ಅಥವಾ ಚರ್ಚೆ ನಮ್ಮ ಕಡೆಯಿಂದ ಆಗಿಲ್ಲ. ನಾನು ಯಾವುದೇ ಕಾಲೇಜಿನ ಉಪನ್ಯಾಸಕರು ಮತ್ತು ಪ್ರಾಂಶುಪಾಲರನ್ನು ಭೇಟಿ ಮಾಡಿಲ್ಲ. ಈ ಬಗ್ಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜೊತೆ ಚರ್ಚಿಸುತ್ತೇನೆ’ ಎಂದಿದ್ದಾರೆ.

ಸುತ್ತೋಲೆಯಲ್ಲಿ ಏನಿತ್ತು?: ‘ಪ್ರಧಾನಿ ಬರುತ್ತಿರುವ ಪ್ರಯುಕ್ತ, ನ. 2ರಂದು ನಡೆದ ಪ್ರಾಂಶುಪಾಲರ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಿದಂತೆ, ಎಲ್ಲ ಸರ್ಕಾರಿ, ಅನುದಾನಿತ, ಅನುದಾನರಹಿತ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರು ನಿಗದಿಪಡಿಸಿದಷ್ಟು ವಿದ್ಯಾರ್ಥಿಗಳನ್ನು ನೋಡಲ್‌ ಅಧಿಕಾರಿಗಳ ಮೂಲಕ ಕಾಲೇಜಿನಿಂದ ಹೊರಡುವ ಬಸ್ಸಿನಲ್ಲಿ ಕರೆದುಕೊಂಡು ಬರ ಬೇಕು. ತಪ್ಪಿದರೆ ಮುಂದಿನ ಆಗು ಹೋಗುಗಳಿಗೆ ಸಂಬಂಧಪಟ್ಟ ಕಾಲೇಜಿನ ಪ್ರಾಂಶುಪಾಲರೇ ಜವಾಬ್ದಾರರಾಗಿರುತ್ತಾರೆ’ ಎಂದು ಎಚ್ಚರಿಕೆ ನೀಡಲಾಗಿತ್ತು.

ಪದವಿಪೂರ್ವ ಶಿಕ್ಷಣ ಇಲಾಖೆ ಹೊರಡಿಸಿರುವ ಸುತ್ತೋಲೆ
ಪದವಿಪೂರ್ವ ಶಿಕ್ಷಣ ಇಲಾಖೆ ಹೊರಡಿಸಿರುವ ಸುತ್ತೋಲೆ

ಕೆಂಪೇಗೌಡ ಪ್ರತಿಮೆ ಅನಾವರಣಕ್ಕೆ 3,430 ಕೆಎಸ್‌ಆರ್‌ಟಿಸಿ ಬಸ್
ರಾಮನಗರ:
ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ‘ಪ್ರಗತಿ ಪ್ರತಿಮೆ’ಯನ್ನು ಪ್ರಧಾನಿ ನರೇಂದ್ರ ಮೋದಿ ಇದೇ 11ರಂದು ಉದ್ಘಾಟಿಸಲಿದ್ದು, ಕಾರ್ಯಕ್ರಮಕ್ಕೆ ಬರುವವರಿಗಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ( ಕೆಎಸ್‌ಆರ್‌ಟಿಸಿ) 3,420 ಬಸ್‌ಗಳನ್ನು ಬಳಸಿಕೊಳ್ಳಲಾಗುತ್ತಿದೆ.

ಈ ಕುರಿತು ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣದ ಅಭಿವೃದ್ಧಿ ಪ್ರಾಧಿಕಾರವು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆದಿದ್ದು,ಈ ಕಾರ್ಯಕ್ರಮಕ್ಕೆ ಅಗತ್ಯ ಪ್ರಮಾಣದಲ್ಲಿ ಬಸ್‌ ಸೇವೆ ಒದಗಿಸುವಂತೆ ಮನವಿ ಮಾಡಿದೆ. ಇದರಿಂದಾಗಿ ಇದೇ 10 ಹಾಗೂ 11ರಂದು ರಾಜ್ಯದಾದ್ಯಂತ ಕೆಎಸ್‌ಆರ್‌ಟಿಸಿ ಬಸ್‌ಗಳ ಸೇವೆಯಲ್ಲಿ ವ್ಯತ್ಯಯ ಆಗುವ ಸಾಧ್ಯತೆ ಇದೆ.

ಎಲ್ಲಿ ಎಷ್ಟೆಷ್ಟು ಬಸ್‌: ಬೆಂಗಳೂರು ನಗರ ವ್ಯಾಪ್ತಿಯಲ್ಲಿ 1,200 ಬಸ್‌, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಜಿಲ್ಲೆಗಳಿಂದ ತಲಾ 400 ಕೆಎಸ್‌ಆರ್‌ಟಿಸಿ ಬಸ್‌ ಸಂಚರಿಸಲಿವೆ. ಅಂತೆಯೇ ಮಂಡ್ಯದಿಂದ 200, ತುಮಕೂರಿನಿಂದ 160, ಮೈಸೂರು ಹಾಗೂ ಹಾಸನದಿಂದ ತಲಾ 100 ಬಸ್‌ ಸೇವೆ ಇರಲಿದೆ.

ಉಳಿದಂತೆ ಶಿವಮೊಗ್ಗದಿಂದ 20 ಹಾಗೂ ಚಿಕ್ಕಮಗಳೂರು, ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಾಮರಾಜನಗರದಿಂದ ತಲಾ 10 ಬಸ್‌ ಮೀಸಲಿಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT