ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಮಾಜದ ಸ್ವಾಸ್ಥ್ಯ ಹದಗೆಡಿಸುತ್ತಿರುವ ಸ್ವಾಮೀಜಿಗಳು: ಡಿ.ಜಿ.ಸಾಗರ್‌ ಆಕ್ರೋಶ

ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಡಿ.ಜಿ.ಸಾಗರ್‌ ಆಕ್ರೋಶ
Last Updated 21 ಫೆಬ್ರುವರಿ 2021, 10:58 IST
ಅಕ್ಷರ ಗಾತ್ರ

ವಿಜಯಪುರ: 2 ‘ಎ’, ಎಸ್.ಸಿ, ಎಸ್‌ಟಿ ಮೀಸಲಾತಿ ಹೆಸರಲ್ಲಿ ತಮ್ಮ ತಮ್ಮ ಸಮಾಜದ ಪರವಾಗಿ ಪಾದಯಾತ್ರೆ, ಹೋರಾಟ ನಡೆಸುವ ಮೂಲಕ ಬಲಾಢ್ಯ ಸಮಾಜಕ್ಕೆ ಸೇರಿದ ಕೆಲ ಸ್ವಾಮೀಜಿಗಳುಸಮಾಜದ ಸ್ವಾಸ್ಥ್ಯ ಹದಗೆಡಿಸುತ್ತಿದ್ದಾರೆ ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಡಿ.ಜಿ.ಸಾಗರ್‌ ಆಕ್ರೋಶ ವ್ಯಕ್ತಪಡಿಸಿದರು.

ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೀಸಲಾತಿ ನೀಡುವ ವಿಷಯದಲ್ಲಿ ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಆತುರದ ನಿರ್ಧಾರ ತೆಗೆದುಕೊಳ್ಳಬಾರದು. ವಿವೇಚನಾಪೂರ್ವಕವಾಗಿ ವೈಜ್ಞಾನಿಕ ತಳಹದಿ ಮೇಲೆ ತೀರ್ಮಾನ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಸಮಾಜದಲ್ಲಿ ಅವಮಾನ, ಶೋಷಣೆ, ತುಳಿತಕ್ಕೆ ಒಳಗಾದವರಿಗೆ ಮೀಸಲಾತಿ ನೀಡುವುದಕ್ಕೆ ನಮ್ಮ ವಿರೋಧವಿಲ್ಲ. ಆದರೆ, ಹಿಂದುಳಿದ, ತುಳಿತಕ್ಕೆ ಒಳಗಾದ ಸಣ್ಣಪುಟ್ಟ ಜಾತಿಗಳಿರುವ ಗುಂಪಿಗೆ ದೊಡ್ಡ ಜಾತಿಗಳನ್ನು ಯಾವುದೇ ಕಾರಣಕ್ಕೂ ಸೇರಿಸಬಾರದು ಎಂದು ಒತ್ತಾಯಿಸಿದರು.

ಹಿಂದುಳಿದ ವರ್ಗಗಳ ಆಯೋಗದ ಈ ಹಿಂದಿನ ಅಧ್ಯಕ್ಷ ಕಾಂತರಾಜು ಅವರು ನೀಡಿರುವ ಜಾತಿಗಣತಿ ವರದಿಯನ್ನು ರಾಜ್ಯ ಸರ್ಕಾರ ತಕ್ಷಣ ಬಹಿರಂಗಪಡಿಸಬೇಕು. ಆಯಾ ಸಮುದಾಯದ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿದರು.

ವೀರಶೈವ ಜಂಗಮರು ತಾವು ಬೇಡ ಜಂಗಮ ಎಂದು ಹೇಳಿಕೊಂಡು ಪರಿಶಿಷ್ಟ ಜಾತಿ ಮೀಸಲಾತಿ ಸೌಲಭ್ಯ ಪಡೆದುಕೊಳ್ಳುತ್ತಿದ್ದಾರೆ. ಕೊಟ್ಟಿ ಜಾತಿ ಪ್ರಮಾಣ ಪತ್ರ ಪಡೆಯುತ್ತಿದ್ದಾರೆ. ಇದರ ಬಗ್ಗೆ ಸರ್ಕಾರ ಗಮನಹರಿಸಬೇಕು ಎಂದು ಒತ್ತಾಯಿಸಿದರು.

ಒಳಮೀಸಲಾತಿಗೆ ಆಗ್ರಹ

ಒಳಮೀಸಲಾತಿಗೆ ಆಗ್ರಹಿಸಿ ಮಾದಿಗ ದಂಡೋರ ಸಂಘಟನೆ ರಾಜ್ಯದಲ್ಲಿ ನಡೆಸುತ್ತಿರುವ ಜಾಥಾಕ್ಕೆ ದಲಿತ ಸಂಘರ್ಷ ಸಮಿತಿ ಸಂಪೂರ್ಣ ಬೆಂಬಲವಿದೆ. ರಾಜ್ಯ ಸರ್ಕಾರ ಒಳಮೀಸಲಾತಿಗೆ ಸಂಬಂಧಿಸಿದ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯನ್ನು ವಿಧಾನಸಭೆಯಲ್ಲಿ ಮಂಡಿಸಿ, ಸಾರ್ವಜನಿಕ ಚರ್ಚೆಗೆ ಮುಂದಾಗಬೇಕು. ಒಳಮೀಸಲಾತಿ ಜಾರಿ ಸಂಬಂಧ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಆಗ್ರಹಿಸಿದರು.

ಸದಾಶಿವ ಆಯೋಗದ ವರದಿ ಜಾರಿಗೆ ಇದುವರೆಗೆ ಆಡಳಿತ ನಡೆಸಿದ ಎಲ್ಲ ಸರ್ಕಾರಗಳು ನಿರ್ಲಕ್ಷ್ಯ ತಾಳಿವೆ ಎಂದು ಆರೋಪಿಸಿದರು.

ರಾಜ್ಯ ವಿಧಾನಸಭೆಗಳಿಗೆ ಎಸ್‌ಸಿ ಮೀಸಲಾತಿಯನ್ನು ಬದಲಿಸುವ ಅಧಿಕಾರವಿಲ್ಲ. ಸಂವಿಧಾನದ 341(2) ಕಲಂ ಅನ್ವಯ ಈ ಅಧಿಕಾರ ಇರುವುದು ಸಂಸತ್ತಿಗೆ ಮಾತ್ರ. ಹೀಗಾಗಿ ಸಂವಿಧಾನಕ್ಕೆ ಸೂಕ್ತ ತಿದ್ದುಪಡಿ ತಂದು ಒಳಮೀಸಲಾತಿ ತರುವಲು ಕೇಂದ್ರ ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದರು.

ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ರಮೇಶ ಆಸಂಗಿ, ಜಿಲ್ಲಾ ಸಂಚಾಲಕ ವಿನಾಯಕ ಗುಣಸಾಗರ, ವೈ.ಸಿ.ಮಯೂರ, ಶರಣು ಶಿಂಧೆ, ರಮೇಶ ದರಣಾಕರ, ಅಶೋಕ ಚಲವಾದಿ, ಸಿದ್ದು ರಾಯಣ್ಣವರ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

*****

ರಾಜ್ಯದಲ್ಲಿ 2.5 ಲಕ್ಷಕ್ಕೂ ಅಧಿಕ ಸರ್ಕಾರಿ ಹುದ್ದೆಗಳು, ಬ್ಯಾಕ್‌ಲಾಗ್‌ ಹುದ್ದೆಗಳು ಖಾಲಿ ಇವೆ. ನಿರುದ್ಯೋಗಿ ಪದವೀಧರರು ಸಂಕಷ್ಟದಲ್ಲಿದ್ದಾರೆ. ಸರ್ಕಾರ ಹಂತ, ಹಂತವಾಗಿ ಎಲ್ಲ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಬೇಕು

–ಡಿ.ಜಿ.ಸಾಗರ್‌,ರಾಜ್ಯ ಸಂಚಾಲಕ,ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ

****

‘ದೊಡ್ಡರಂಗೇಗೌಡ ಹೇಳಿಕೆ ಅಕ್ಷಮ್ಯ’

ವಿಜಯಪುರ: ಸಂswamijವಿಧಾನ ತಿದ್ದುಪಡಿ ಅನಿವಾರ್ಯ ಎಂದಿರುವ ಸಾಹಿತಿ ಪ್ರೊ.ದೊಡ್ಡರಂಗೇಗೌಡ ಅವರ ಹೇಳಿಕೆ ಅಕ್ಷಮ್ಯ ಅಪರಾಧ. ಅವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸುವುದಾಗಿಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಡಿ.ಜಿ.ಸಾಗರ್‌ ಹೇಳಿದರು.

ಕೇಂದ್ರ ಸರ್ಕಾರ, ಪ್ರಧಾನಿ ಮೋದಿ ಅವರನ್ನು ಮೆಚ್ಚಿಸಲು ದೊಡ್ಡರಂಗೇಗೌಡ ಇಂತಹ ಹೇಳಿಕೆಯನ್ನು ನೀಡುತ್ತಿದ್ದಾರೆ. ಸಂವಿಧಾನ ಬದಲಾವಣೆ ಮುಂದಾದರೆ ದೇಶದಲ್ಲಿ ರಕ್ತಕ್ರಾಂತಿಯಾಗಲಿದೆ ಎಂದು ಎಚ್ಚರಿಕೆ ನೀಡಿದರು.

ದೊಡ್ಡರಂಗೇಗೌಡ ಅವರು ಸಂವಿಧಾನವನ್ನು ಓದಿಕೊಂಡಿಲ್ಲ, ಸರಿಯಾಗಿ ಅರ್ಥೈಸಿಕೊಂಡಿಲ್ಲ. ಸಂವಿಧಾನವನ್ನು ಏತಕ್ಕಾಗಿ ತಿದ್ದುಪಡಿ, ಬದಲಾವಣೆಯಾಗಬೇಕು ಎಂದು ಪ್ರಶ್ನಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT