ಶುಕ್ರವಾರ, ಅಕ್ಟೋಬರ್ 7, 2022
24 °C

ರಾಜ್ಯದಲ್ಲಿ 15 ಸಾವಿರ ಶಿಕ್ಷಕರ ನೇಮಕ: ವಯೋಮಿತಿ ಸಡಿಲಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಲ್ಲಿ 15 ಸಾವಿರ ಪದವೀಧರ ಪ್ರಾಥಮಿಕ ಶಿಕ್ಷಕರ (6ರಿಂದ 8ನೇ ತರಗತಿ) ನೇಮಕಾತಿಯಲ್ಲಿ ಎಲ್ಲ ವರ್ಗದ ಅಭ್ಯರ್ಥಿಗಳಿಗೂ ಎರಡು ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದ್ದು, ಇದಕ್ಕೆ ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಘಟನೋತ್ತರ ಅನುಮೋದನೆ ನೀಡಲಾಯಿತು.

ಎಸ್‌ಸಿ, ಎಸ್‌ಟಿ, ಪ್ರವರ್ಗ–1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 47, ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಪ್ರವರ್ಗದ ಅಭ್ಯರ್ಥಿಗಳಿಗೆ 45, ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 42 ವರ್ಷ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ. ಈ ಸಡಿಲಿಕೆ ಒಂದು ಬಾರಿಗೆ ಮಾತ್ರ ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಅಲ್ಲದೆ, ಪ್ರತಿ ಪ್ರವರ್ಗಗಳಲ್ಲಿ ಶೇ 50 ರಷ್ಟು ಹುದ್ದೆಗಳನ್ನು ಮಹಿಳೆಯರಿಗೆ, ಶೇ 1ರಷ್ಟು ಹುದ್ದೆಗಳನ್ನು ಲೈಂಗಿಕ ಅಲ್ಪಸಂಖ್ಯಾತ ಅಭ್ಯರ್ಥಿಗಳಿಗೆ ಮೀಸಲಿಡಲಾಗಿದೆ. ನೇಮಕಾತಿ ಪ್ರಕ್ರಿಯೆಗೆ ಪೂರಕವಾಗಿ, ಕರ್ನಾಟಕ ಶಿಕ್ಷಣ ಇಲಾಖೆ ಸೇವೆಗಳು (ಸಾರ್ವಜನಿಕ ಶಿಕ್ಷಣ ಇಲಾಖೆ) ನೇಮಕಾತಿ ವಿಶೇಷ ನಿಯಮಗಳು–2022’ ಅನ್ನು ಅಂತಿಮಗೊಳಿಸಿ ರಾಜ್ಯ ಸರ್ಕಾರ ಇತ್ತೀಚೆಗೆ ಅಧಿಸೂಚನೆ ಹೊರಡಿಸಿತ್ತು.

ಕೋವಿಡ್‌–19 ಪಿಡುಗಿನ ಹಿನ್ನೆಲೆಯಲ್ಲಿ ದೇಶಾದ್ಯಂತ ವಿಧಿಸಲಾದ ಲಾಕ್‌ಡೌನ್‌ನಿಂದಾಗಿ ರಾಜ್ಯದಲ್ಲಿ ಯಾವುದೇ ನೇಮಕಾತಿ ಪ್ರಕ್ರಿಯೆ ನಡೆಯದೇ ಇದ್ದ ಕಾರಣ ಹಲವರ ವಯೋಮಿತಿ ಮೀರಿತ್ತು. 15 ಸಾವಿರ ಹುದ್ದೆಗಳಿಗೆ ಸಾಕಷ್ಟು ಅರ್ಜಿಗಳೂ ಬಂದಿರಲಿಲ್ಲ. ಇದರಿಂದಾಗಿ ವಯೋಮಿತಿ ಮೀರಿದ ಅಭ್ಯರ್ಥಿಗಳಿಗೆ ಒಂದು ಅವಕಾಶ ನೀಡಲು ಈ ಕ್ರಮ ತೆಗೆದುಕೊಳ್ಳಲಾಯಿತು ಎಂದು ಮಾಧುಸ್ವಾಮಿ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು