ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉದ್ಯೋಗ ಕಳೆದುಕೊಂಡವರಿಗೆ ನೆರವಾಗಬೇಕು: ಸಿಎಂ ಯಡಿಯೂರಪ್ಪಗೆ ಸಿದ್ದರಾಮಯ್ಯ ಪತ್ರ 

Last Updated 9 ಮೇ 2021, 5:23 IST
ಅಕ್ಷರ ಗಾತ್ರ

ಬೆಂಗಳೂರು: ಕೋವಿಡ್ ನಿಯಂತ್ರಣಕ್ಕೆ ಸೋಮವಾರದಿಂದ (ಮೇ 10) ಕಠಿಣ ಕ್ರಮಗಳನ್ನು ಜಾರಿಗೆ ತರುವುದಾಗಿ ರಾಜ್ಯ ಸರ್ಕಾರಘೋಷಿಸಿರುವುದರಿಂದ, ಈಗಾಗಲೇ ಉದ್ಯೋಗ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿರುವ ದುಡಿಯುವ ವರ್ಗಕ್ಕೆ ನೆರವಾಗಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

ಪ್ರತಿ ಬಿಪಿಎಲ್ ಕುಟುಂಬಕ್ಕೆ ಮೊದಲಿಗೆ ₹ 10 ಸಾವಿರ ನೀಡಬೇಕು. ನಂತರ ತಿಂಗಳಿಗೆ₹ 6 ಸಾವಿರ ನೀಡಬೇಕು. ರಾಜ್ಯದ ರೈತರಿಗೆ, ಕುಶಲಕರ್ಮಿ ಸಮುದಾಯಗಳಿಗೆ, ಕಾರ್ಮಿಕರಿಗೆ, ಡ್ರೈವರ್ ಮತ್ತಿತರ ಎಲ್ಲ ದುಡಿಯುವ ವರ್ಗಗಳಿಗೆ ₹ 10 ಸಾವಿರ ನೀಡಬೇಕು. ಸಣ್ಣ, ಅತಿ ಸಣ್ಣ, ಸೂಕ್ಷ್ಮ, ಗೃಹ ಕೈಗಾರಿಕೆಗಳಿಗೆ, ವಾಹನಗಳ ಮಾಲೀಕರ ಸಭೆಗಳನ್ನು ನಡೆಸಿಸೂಕ್ತ ಪ್ಯಾಕೇಜ್ ನೀಡಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ರಾಜ್ಯದಲ್ಲಿ ಸದ್ಯ ಬೇಡಿಕೆ ಇರುವುದಕ್ಕಿಂತ ಹೆಚ್ಚಿನ ಆಮ್ಲಜನಕ ಉತ್ಪಾದನೆಯಾಗುತ್ತಿದೆ. ನಮ್ಮಲ್ಲಿ ಉತ್ಪಾದನೆಯಾಗುವ ಆಮ್ಲಜನಕವನ್ನು ಇಲ್ಲಿಯೇ ಉಳಿಸಿಕೊಳ್ಳಬೇಕು. ಜಿಲ್ಲಾವಾರು ಆಕ್ಸಿಜನ್ ಘಟಕಗಳನ್ನು ಸ್ಥಾಪಿಸಬೇಕು. ಆಮ್ಲಜನಕ ಸಿಲಿಂಡರ್‌ಗಳು ಕಾಳಸಂತೆಯಲ್ಲಿ ಮಾರಾಟ ಮಾಡುವ ದಂಧೆ ನಿಲ್ಲಿಸಿ ಮನೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೂ ಸುಲಭವಾಗಿ ಆಮ್ಲಜನಕ ಸಿಗುವಂತೆ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಆಮ್ಲಜನಕ ಉತ್ಪಾದನೆ ಆಗುತ್ತಿರುವ ಪ್ರದೇಶಗಳಲ್ಲೇ ಆಮ್ಲಜನಕ ಲಭ್ಯತೆಯ ಆಧಾರದ ಮೇಲೆ ತಾತ್ಕಾಲಿಕ ಕೋವಿಡ್ ಆಸ್ಪತ್ರೆ ಸ್ಥಾಪಿಸಬೇಕು.ಜಿಲ್ಲಾವಾರು ಚಿಕಿತ್ಸೆ ಎಂಬ ಅವೈಜ್ಞಾನಿಕ ವಿಧಾನವನ್ನು ಕೈಬಿಟ್ಟು ಸುತ್ತಮುತ್ತಲ ಏಳೆಂಟು ಜಿಲ್ಲೆಗಳ ರೋಗಿಗಳನ್ನು ಒಂದು ಕಡೆ ತಂದು ಆಮ್ಲಜನಕ ನೀಡಿ ರಕ್ಷಿಸಬೇಕು. ಇದರಿಂದ ಒತ್ತಡ ಕಡಿಮೆಯಾಗುತ್ತದೆ.

ಖಾಸಗಿ ಆಸ್ಪತ್ರೆಯವರುರೆಮ್‍ಡಿಸಿವಿರ್ ಔಷಧಿ ತರುವಂತೆ ರೋಗಿಗಳಿಗೆ ಹೇಳುತ್ತಿದ್ದಾರೆ.ಈ ಜೀವರಕ್ಷಕ ಔಷಧಿಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿರುವವರ ಕುರಿತು ಕಠಿಣ ಕ್ರಮ ಕೈಗೊಳ್ಳಬೇಕು ಎಂದೂ ಒತ್ತಾಯಿಸಿದ್ದಾರೆ.

ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲು ಪ್ರತಿ ರೋಗಿಗೆ ಕನಿಷ್ಟ ಮಟ್ಟದ ಮೊತ್ತವನ್ನು ನಿಗದಿಪಡಿಸಲಾಗಿದೆ. ಅದರಿಂದ ಸಮರ್ಪಕವಾಗಿ ರೆಮ್‍ಡಿಸಿವಿರ್ ನಂಥ ಔಷಧಗಳನ್ನೂ ನೀಡಲಾಗುತ್ತಿಲ್ಲ ಎಂಬ ಮಾಹಿತಿ ಇದೆ. ಈ ಅವ್ಯವಸ್ಥೆಯನ್ನು ಸರಿ ಮಾಡಬೇಕು.ಅಸಹಾಯಕ ರೋಗಿಗಳಿಗೆ ಸಾಮಾನ್ಯ, ಐಸಿಯು, ವೆಂಟಿಲೇಟರ್, ಆಮ್ಲಜನಕ ವ್ಯವಸ್ಥೆ ಇರುವ ಸಾಕಷ್ಟು ಹಾಸಿಗೆಗಳನ್ನು ಸ್ಥಾಪಿಸಲು ಯಾವ ಸಮಸ್ಯೆ ಇದೆ? ಹಾಸಿಗೆಗಳು ಎಷ್ಟು ಬೇಕಾಗಬಹುದು ಎಂಬುದನ್ನು ಮೊದಲೇ ಅಂದಾಜಿಸಿ ಕಾರ್ಯೋನ್ಮಖರಾಗಬೇಕು. ವೈದ್ಯರುಗಳಿಗೆ ಸಂಬಂಧಿಸಿದಂತೆ, ಖಾಸಗಿ, ನಿವೃತ್ತರಾದವರನ್ನು ಅಗತ್ಯ ಬಿದ್ದರೆ ನೇಮಿಸಿಕೊಳ್ಳಬೇಕು. ದಾದಿಯರ ವಿಷಯದಲ್ಲೂ ಹಾಗೆ ಮಾಡಬೇಕು. ಈಗಾಗಲೇ ಕೋವಿಡ್ ನಿರೋಧಕ ಲಸಿಕೆ ಹಾಕಿಸಿಕೊಂಡಿರುವ ಅಂತಿಮ ವರ್ಷಗಳಲ್ಲಿರುವ ವಿದ್ಯಾರ್ಥಿಗಳನ್ನುಚಿಕಿತ್ಸೆಗೆ ನಿಯೋಜಿಸಬೇಕು ಎಂದು ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.

ಲಸಿಕೆ ಹಾಕಿಸಿಕೊಳ್ಳದವರಿಗೆ ಆದ್ಯತೆಯ ಮೇಲೆ ಲಸಿಕೆ ಹಾಕಬೇಕು. ಕಳೆದ ವರ್ಷ ತರಿಸಿದ ಸಾವಿರಗಟ್ಟಲೆ ವೆಂಟಿಲೇಟರ್‌ಗಳನ್ನು ಬಳಸದೆ ಗೋದಾಮುಗಳಲ್ಲಿ ಧೂಳು ತಿನ್ನಲು ಬಿಡಲಾಗಿದೆಯೆಂಬ ಮಾಹಿತಿ ಇದೆ. ಇದನ್ನು ಕ್ರಿಮಿನಲ್ ವರ್ತನೆ ಎನ್ನಬೇಕಾಗುತ್ತದೆ ಎಂದಿದ್ದಾರೆ.

ಅಗತ್ಯ ಬಿದ್ದರೆ ಕಲ್ಯಾಣ ಮಂಟಪ, ಕ್ರೀಡಾಂಗಣ, ಹಾಸ್ಟೆಲ್‌ಗಳು ಮುಂತಾದವುಗಳನ್ನು ತಾತ್ಕಾಲಿಕ ಆಸ್ಪತ್ರೆ ಮಾಡಿ ಚಿಕಿತ್ಸೆ ನೀಡಬೇಕು ಎಂದು ಸಲಹೆ ನೀಡಿದ್ದಾರೆ.

ಬೆಂಗಳೂರಿನ ನಾಲ್ಕು ದಿಕ್ಕುಗಳಲ್ಲೂ ಖಾಲಿ ಜಾಗವನ್ನು ಹುಡುಕಿ ವ್ಯವಸ್ಥಿತವಾಗಿ ಶವ ಸಂಸ್ಕಾರ ನಡೆಸಬೇಕು. ಸಂಕಷ್ಟದಲ್ಲಿರುವ ಜನರಿಗೆ ನೆರವಾಗಬೇಕು. ಜನ ಉದ್ಯೋಗಗಳನ್ನು ಕಳೆದುಕೊಂಡು ನಿರ್ಗತಿಕರಾಗಿದ್ದಾರೆ. ಸರ್ಕಾರ ಪ್ರತಿಯೊಬ್ಬರಿಗೂತಿಂಗಳಿಗೆ ತಲಾ 10 ಕೆ.ಜಿ. ಅಕ್ಕಿ ನೀಡಬೇಕು. ಜೊತೆಗೆ ಬೇಳೆ, ಅಡುಗೆ ಎಣ್ಣೆಮುಂತಾದ ದಿನಸಿಪದಾರ್ಥಗಳಿರುವ ಕಿಟ್‍ಗಳನ್ನು ನೀಡಬೇಕು ಎಂದು ಆಗ್ರಹಿಸಿದ್ದಾರೆ.

ನಗರಗಳಿಂದ ಹಳ್ಳಿಗಳಿಗೆ ದುಡಿಯುವ ಜನ ವಾಪಸಾಗಿದ್ದಾರೆ. ಈ ಸಂದರ್ಭದಲ್ಲಿ ಉದ್ಯೋಗ ಖಾತ್ರಿ ಯೋಜನೆಯನ್ನು ಅತ್ಯಂತ ಸಮರ್ಪಕವಾಗಿ ಬಳಸಬೇಕು. ಕನಿಷ್ಟ 200 ಮಾನವ ದಿನಗಳ ಯೋಜನೆಯನ್ನು ಜಾರಿಗೊಳಿಸಬೇಕು. ಅಗತ್ಯ ಇರುವ ಕಡೆ ಬೇಡಿಕೆಯನ್ನು ಆಧರಿಸಿ ಉದ್ಯೋಗ ನೀಡಬೇಕು.

ಪ್ರಸ್ತುತ ಇರುವ ಹಣದುಬ್ಬರವನ್ನು ಆಧರಿಸಿ ನರೇಗಾ ಕೂಲಿ ಮೊತ್ತವನ್ನು ಪರಿಷ್ಕರಿಸಬೇಕು ಮತ್ತು ಹೆಚ್ಚಿಸಬೇಕು. ಈ ಯೋಜನೆಯಡಿ ಕೆಲಸ ಮಾಡಿದವರಿಗೆ 4 ತಿಂಗಳಿಂದ ಹಣ ಬಿಡುಗಡೆ ಮಾಡಿಲ್ಲ. ಈ ಬಾಕಿ ಉಳಿಸಿಕೊಂಡಿರುವ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದೂ ಸಿದ್ದರಾಮಯ್ಯಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT