ಭಾನುವಾರ, ಸೆಪ್ಟೆಂಬರ್ 26, 2021
21 °C
ಸಾಮೂಹಿಕ ಹೋರಾಟಕ್ಕೂ ಸಿದ್ಧ: ಶಿವಮೂರ್ತಿ ಮುರುಘಾ ಶರಣರು

ಚಿತ್ರದುರ್ಗ: ಯಡಿಯೂರಪ್ಪ ಬೆಂಬಲಕ್ಕೆ ನಿಂತ ಮಠಾಧೀಶರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿತ್ರದುರ್ಗ: ಬಿ.ಎಸ್‌.ಯಡಿಯೂರಪ್ಪ ಅವರನ್ನು ಯಾವ ಕಾರಣಕ್ಕೂ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಬಾರದು. ಅವಧಿ ಪೂರ್ಣಗೊಳ್ಳುವವರೆಗೂ ಅವರನ್ನೇ ಮುಂದುವರಿಸಬೇಕು. ಒಂದು ವೇಳೆ ನಾಯಕತ್ವ ಬದಲಿಸಿದರೆ ಸಾಮೂಹಿಕ ಹೋರಾಟಕ್ಕೂ ಸಿದ್ಧರಿದ್ದೇವೆ ಎಂದು ಮಠಾಧೀಶರು ಬಿಜೆಪಿ ಹೈಕಮಾಂಡ್‌ಗೆ ಎಚ್ಚರಿಕೆ ನೀಡಿದರು.

ಮುರುಘಾಠದಲ್ಲಿ ಶಿವಮೂರ್ತಿ ಮುರುಘಾ ಶರಣರ ನೇತೃತ್ವದಲ್ಲಿ ಹಲವು ಮಠಾಧೀಶರು ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿ ಒಮ್ಮತದ ನಿಲುವು ಪ್ರದರ್ಶಿಸಿದರು. ರಾಜ್ಯ ರಾಜಕೀಯ ಬೆಳವಣಿಗೆಯ ನಡುವೆ ಮಠಾಧೀಶರು ದಿಢೀರ್‌ ಪತ್ರಿಕಾಗೋಷ್ಠಿ ನಡೆಸಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಬಹಿರಂಗ ಬೆಂಬಲ ಸೂಚಿಸಿದರು.

‘ಮುಖ್ಯಮಂತ್ರಿ ಬದಲಾವಣೆ ಮಾಡಿದರೆ ಯಡಿಯೂರಪ್ಪ ಅವರಿಗೇನು ನಷ್ಟ ಆಗುವುದಿಲ್ಲ. ಆದರೆ, ಪಕ್ಷಕ್ಕೆ ದೊಡ್ಡ ತೊಂದರೆ ಉಂಟಾಗಬಹುದು. ರಾಜ್ಯದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದವರನ್ನು ನಿರ್ಲಕ್ಷಿಸುವುದರಿಂದ ಮುಂದೆ ಭಾರಿ ಬೆಲೆ ತೆರಬೇಕಾಗುತ್ತದೆ. ಅವಧಿಗೂ ಮುನ್ನವೇ ಮುಖ್ಯಮಂತ್ರಿ ಬದಲಾವಣೆ ಮಾಡಿದರೆ ಪಕ್ಷಕ್ಕೆ ತೊಂದರೆ ಆಗುವುದು ಖಚಿತ’ ಎಂದು ಶಿವಮೂರ್ತಿ ಮುರುಘಾ ಶರಣರು ಅಭಿಪ್ರಾಯಪಟ್ಟರು.

‘ಯಡಿಯೂರಪ್ಪ ಅವರೊಬ್ಬ ಜನನಾಯಕ. ರಾಜಕೀಯ ಜೀವನವನ್ನು ಏಕವ್ಯಕ್ತಿಯಿಂದ ಆರಂಭಿಸಿ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಿದ್ದಾರೆ. ದಕ್ಷಿಣ ಭಾರತದಲ್ಲಿ ಬಿಜೆಪಿ ಸರ್ಕಾರವನ್ನು ರಚಿಸಿದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇಂಥ ಮೇಧಾವಿ ಹಾಗೂ ಮುತ್ಸದ್ಧಿಯನ್ನು ಅಲಕ್ಷ್ಯ ಮಾಡುವುದು ಸರಿಯಲ್ಲ. ಅವರ ಗೌರವಕ್ಕೆ ಧಕ್ಕೆ ಉಂಟಾಗುವಂತಹ ನಡೆಯನ್ನು ಸಹಿಸುವುದಿಲ್ಲ’ ಎಂದು ಹೇಳಿದರು.

‘ಬಿ.ಎಸ್. ಯಡಿಯೂರಪ್ಪ ಅವರ ಕಾರ್ಯವೈಖರಿ ಯುವಕರನ್ನೇ ನಾಚಿಸುವಂತಿದೆ. ಇಳಿ ವಯಸ್ಸಿನಲ್ಲೂ ಸದಾ ಕ್ರಿಯಾಶೀಲರಾಗಿ ರಾಜ್ಯದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಕೋವಿಡ್ ಸಂಕಷ್ಟವನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಆ ಪಕ್ಷದ ಹೈಕಮಾಂಡ್‌ಗೆ ಬಿಟ್ಟ ವಿಚಾರ. ನಿರ್ಣಯ ತೆಗೆದುಕೊಳ್ಳುವ ಅವಕಾಶ ಪಕ್ಷದ ವರಿಷ್ಠರಿಗೆ ಇದೆ. ತಕ್ಷಣ ಪರ್ಯಾಯ ನಾಯಕ ಹುಟ್ಟಿಕೊಳ್ಳುವುದಿಲ್ಲ. ಆದ್ದರಿಂದ ಯಡಿಯೂರಪ್ಪ ಅವರನ್ನೇ ಮುಂದುವರೆಸಬೇಕು’ ಎಂದು ಒತ್ತಾಯಿಸಿದರು.

ಕುಂಚಿಟಿಗ ಗುರುಪೀಠದ ಶಾಂತವೀರ ಸ್ವಾಮೀಜಿ, ‘ಯಡಿಯೂರಪ್ಪ ಕೇವಲ ವೀರಶೈವ–ಲಿಂಗಾಯತ ಸಮುದಾಯಕ್ಕೆ ಮಾತ್ರವಲ್ಲ. ಎಲ್ಲ ಸಮುದಾಯದ ನಾಯಕರು. ಸರ್ವರನ್ನು ಸಮಾನವಾಗಿ ಕೊಂಡೊಯ್ಯುವ ಮೂಲಕ ನಾಡಿನಾದ್ಯಂತ ಹೆಸರು ಗಳಿಸಿದ್ದಾರೆ. ಬಸವಣ್ಣ ಅವರ ಕಾಯಕ ಪ್ರಜ್ಞೆಗೆ ಸಾಕ್ಷಿಯಾಗಿ ಕೆಲಸ ಮಾಡುತ್ತಿದ್ದಾರೆ. ಅವರ ಸೇವಾ ಅವಧಿಯನ್ನು ಪೂರ್ಣಗೊಳಿಸಲು ಅವಕಾಶ ಮಾಡಿಕೊಡಬೇಕು. ಪರ್ಯಾಯ ನಾಯಕರನ್ನು ಬೆಳೆಸುವ ನಿಟ್ಟಿನಲ್ಲಿ ಯಾವ ವಿರೋಧವೂ ಇಲ್ಲ. ಆದರೆ, ಯಡಿಯೂರಪ್ಪ ಬದಲಾವಣೆ ಸಲ್ಲದು’ ಎಂದರು.

‘ಶೋಷಿತ ಸಮುದಾಯ ಮೇಲೆತ್ತಿದರು’
ದಕ್ಷಿಣ ಭಾರತದಲ್ಲಿ ಪ್ರಥಮವಾಗಿ ಪಕ್ಷವನ್ನು ಅಧಿಕಾರಕ್ಕೆ ತಂದವರು ಯಡಿಯೂರಪ್ಪನವರು. ಅವರು ಅಧಿಕಾರಕ್ಕೆ ಬಂದ ನಂತರ ಎಲ್ಲ ಶೋಷಿತ ಸಮುದಾಯದ ಮಠಗಳನ್ನು ಮೇಲೆತ್ತಿದರು. ಅವರು ಮುಖ್ಯಮಂತ್ರಿಯಾದಾಗಲೆಲ್ಲಾ ಸುಗಮ ಆಡಳಿತ ನಡೆಸಲು ಬಿಡುತ್ತಿಲ್ಲ ಎಂಬ ಚರ್ಚೆ ಸಾರ್ವಜನಿಕ ವಲಯದಲ್ಲಿ ನಡೆಯುತ್ತಿದೆ. ಇದು ಪುನರಾವರ್ತನೆ ಆಗುತ್ತಿರುವುದು ಸರಿಯಲ್ಲ ಎಂದು ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಅಭಿಪ್ರಾಯಪಟ್ಟರು.

‘ಅತಿವೃಷ್ಟಿ, ಅನಾವೃಷ್ಟಿ ಜತೆಯಲ್ಲೇ ಬಂದ ಕೋವಿಡ್ ಸಂಕಷ್ಟವನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ. ರಾಜ್ಯದ ಅಭಿವೃದ್ಧಿಗೂ ಶ್ರಮಿಸುತ್ತಿದ್ದಾರೆ. ಈ ಅವಧಿ ಮುಗಿಯುವವರೆಗೂ ಅವರಿಗೆ ಅವಕಾಶ ನೀಡಬೇಕು’ ಎಂದು ಆಗ್ರಹಿಸಿದರು.

ಇಳಕಲ್‌ನ ಗುರುಮಹಾಂತೇಶ್ವರ ಮಠದ ಗುರುಮಹಾಂತ ಸ್ವಾಮೀಜಿ, ಅಥಣಿ ಗಚ್ಚಿನಮಠದ ಶಿವಬಸವ ಸ್ವಾಮೀಜಿ, ಶಿರಸಿ ರುದ್ರದೇವರ ಮಠದ ಮಲ್ಲಿಕಾರ್ಜುನ ಸ್ವಾಮೀಜಿ, ಸತ್ತಿಮಠದ ಸ್ವಾಮೀಜಿ, ಚಳ್ಳಕೆರೆಯ ಬಸವಕಿರಣ ಸ್ವಾಮೀಜಿ, ಎಸ್‌ಜೆಎಂ ವಿದ್ಯಾಪೀಠದ ಕಾರ್ಯದರ್ಶಿ ಎ.ಜೆ. ಪರಮಶಿವಯ್ಯ ಇದ್ದರು.

***

ಮೇಲ್ವರ್ಗದವರ ಪಕ್ಷ ಎಂಬ ಮಾತನ್ನು ದಕ್ಷಿಣ ಭಾರತದಲ್ಲಿ ಹುಸಿಯಾಗಿಸಿ, ಸರ್ವ ಧರ್ಮೀಯರನ್ನು ಒಟ್ಟಿಗೆ ಕೊಂಡೊಯ್ಯುವ ನಿಟ್ಟಿನಲ್ಲಿ ಶ್ರಮಿಸುತ್ತಿದ್ದಾರೆ. ಪಕ್ಷಕ್ಕಾಗಿ ನಾಲ್ಕು ದಶಕ ಹೋರಾಟ ಮಾಡಿದ್ದಾರೆ.
-ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ಭೋವಿ ಗುರುಪೀಠ 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು