ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದಲ್ಲಿ 1ನೇ ತರಗತಿಯಿಂದಲೇ ಶಾಲೆ ಆರಂಭಿಸಬೇಕಿತ್ತು: ಸಚಿವ ಡಾ.ಕೆ.ಸುಧಾಕರ್‌

Last Updated 3 ಅಕ್ಟೋಬರ್ 2021, 11:33 IST
ಅಕ್ಷರ ಗಾತ್ರ

ನವದೆಹಲಿ: 12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿನ ಪ್ರಮಾಣದಲ್ಲೇ ಇರುವುದರಿಂದ ರಾಜ್ಯದಲ್ಲಿ 1ನೇ ತರಗತಿಯಿಂದಲೇ ಶಾಲೆ ಆರಂಭಿಸಬೇಕಿತ್ತು. ಈ ಕುರಿತು ಸರ್ಕಾರ ಹಾಗೂ ಶಿಕ್ಷಣ ಇಲಾಖೆ ಚಿಂತನೆ ನಡೆಸಬೇಕಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಅಭಿಪ್ರಾಯಪಟ್ಟರು.

ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೊದಲು 9ನೇ ತರಗತಿ ನಂತರ 6ನೇ ತರಗತಿಗಿಂತ ಮೇಲಿನ ವಿದ್ಯಾರ್ಥಿಗಳಿಗೆ ಶಾಲೆ ಆರಂಭಿಸಲಾಯಿತು. ರೋಗ ನಿರೋಧಕ ಶಕ್ತಿ ಜಾಸ್ತಿ ಇರುವವರನ್ನು ಮನೆಯಲ್ಲಿ ಕೂರಿಸಲಾಯಿತು. ಪಾಲಕರ ಒಪ್ಪಿಗೆ ಪಡೆಯುವುದು ದುಸ್ತರ ಎಂಬ ಕಾರಣಕ್ಕೆ ಸರ್ಕಾರ ಚಿಕ್ಕ ಮಕ್ಕಳಿಗೆ ಶಾಲೆ‌ ತೆರೆಯಲು ಮುಂದಾಗಲಿಲ್ಲ ಎಂದರು.

2 ವರ್ಷಕ್ಕಿಂತ ಮೇಲ್ಪಟ್ಟವರಿಗಾಗಿ ಮೂಗಿನಲ್ಲಿ ಹನಿಯ ರೂಪದಲ್ಲಿ ಹಾಕುವ (ನೇಸಲ್ ಡ್ರಾಪ್) ಲಸಿಕೆ ಕಂಡು ಹಿಡಿಯಲಾಗುತ್ತಿದೆ. ಭಾರತ್ ಬಯೋಟೆಕ್ ಕಂಪೆನಿಯು ಈ ಸಂಬಂಧ ನಡೆಸಿರುವ ಸಂಶೋಧನೆ ಅಂತಿಮ ಹಂತ ತಲುಪಿದ್ದು, ಮೂರನೇ ಹಂತದ ಕ್ಲಿನಿಕಲ್ ಟ್ರಯಲ್ ನಡೆದಿದೆ. ಇದಕ್ಕೆ ಮಾನ್ಯತೆ ದೊರೆತಲ್ಲಿ, ಲಸಿಕೆಯನ್ನು ಇಂಜಕ್ಷನ್‌ ಮೂಲಕ ಪಡೆಯಲು ಆತಂಕ ಪಡುತ್ತಿರುವವರನ್ನು ನೇಸಲ್‌ ಡ್ರಾಪ್‌ ಮೂಲಕ ಆಕರ್ಷಿಸಲು ಅನುಕೂಲವಾಗಲಿದೆ ಎಂದು ಅವರು ಹೇಳಿದರು.

ಸೆಪ್ಟೆಂಬರ್ ತಿಂಗಳಲ್ಲಿ ರಾಜ್ಯದಾದ್ಯಂತ 1.48 ಕೋಟಿ ಡೋಸ್‌ ಲಸಿಕೆ ಹಾಕಲಾಗಿದೆ. 18ಕ್ಕಿಂತ ಕಡಿಮೆ ವರ್ಷ ವಯಸ್ಸಿನವರಿಗೆ ಕೊರೊನಾ ಲಸಿಕೆ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸಲಾಗುತ್ತಿದೆ. ಶೀಘ್ರವೇ ಅದಕ್ಕೆ ಅನುಮತಿ ದೊರೆಯುವ ಸಾಧ್ಯತೆ ಇದೆ ಎಂದು ಅವರು ಹೇಳಿದರು.

ಕೆಲವು ನಿರ್ದಿಷ್ಟ ಸಮುದಾಯದವರು, ಮದ್ಯಪಾನ ಪ್ರಿಯರು ಸೇರಿದಂತೆ ರಾಜ್ಯದ ಶೇ 15ರಷ್ಟು ಜನ ಲಸಿಕೆ ಪಡೆಯಲು ಹಿಂದೇಟು ಹಾಕುತ್ತಿದ್ದಾರೆ. ಅಂಥವರನ್ನು ಆಕರ್ಷಿಸಲು ವಿಶೇಷ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಆಯಾ ಸಮುದಾಯಗಳ, ಧಾರ್ಮಿಕ ಮುಖಂಡರ ಮೂಲಕ ಅರಿವು ಮೂಡಿಸಲಾಗುತ್ತಿದೆ ಎಂದು ಸಚಿವರು ವಿವರಿಸಿದರು.

ರಾಜ್ಯದಲ್ಲೂ ಕೋವಿಡ್‌ನ 3ನೇ ಅಲೆಯ ಆತಂಕ ಇದೆ. ನವೆಂಬರ್‌ ಅಥವಾ ಡಿಸೆಂಬರ್‌ನಲ್ಲಿ ಮೂರನೇ ಅಲೆ ಅಪ್ಪಳಿಸಬಹುದು ಎಂಬ ಶಂಕೆ ಇದೆ. ಹಾಗಾಗಿ, ಮುನ್ನೆಚ್ಚರಿಕೆ ಕ್ರಮವಾಗಿ ಜಾತ್ರೆ, ಹಬ್ಬ ಹಾಗೂ ಉತ್ಸವಗಳಲ್ಲಿ ಜನಸಮೂಹ ಸೇರದಂತೆ ಕಡಿವಾಣ ಹಾಕುವುದನ್ನು ಮುಂದುವರಿಸಿ ಆದೇಶ ಹೊರಡಿಸಲಾಗಿದೆ ಎಂದು ಅವರು ತಿಳಿಸಿದರು.

ಆಸ್ಪತ್ರೆಗಳ ಮೇಲ್ದರ್ಜೆಗೆ ಕ್ರಮ: ರಾಜ್ಯದಲ್ಲಿನ 250ಕ್ಕೂ ಅಧಿಕ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೆ ಏರಿಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ. ಪ್ರತಿ ಆಸ್ಪತ್ರೆಗೆ ಮೂವರು ತಜ್ಞ ವೈದ್ಯರನ್ನು ನೇಮಿಸುವುದಲ್ಲದೆ, ಇತರ ಸಿಬ್ಬಂದಿಯ ಸಂಖ್ಯೆಯನ್ನೂ ಹೆಚ್ಚಿಸಲಾಗುತ್ತದೆ ಎಂದು ಡಾ.ಕೆ.ಸುಧಾಕರ್‌ ಹೇಳಿದರು.

ಮೇಲ್ದರ್ಜೆಗೆ ಏರಿದ ಆಸ್ಪತ್ರೆ ಆವರಣದಲ್ಲೇ ವೈದ್ಯರು, ದಾದಿಯರು ಮತ್ತಿತರ ಸಿಬ್ಬಂದಿಯ ವಸತಿಗೃಹ ನಿರ್ಮಿಸಲಾಗುತ್ತಿದೆ. ಸಾರ್ವಜನಿಕರಿಗೆ 24 ಗಂಟೆ ಆರೋಗ್ಯ ಸೇವೆ ದೊರಕಿಸಲು ಈ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ತಿಳಿಸಿದರು.

ಪಟ್ಟಣ ಮತ್ತು ಗ್ರಾಮಗಳಲ್ಲಿನ ಜನಸಂಖ್ಯೆಗೆ ಅನುಗುಣವಾಗಿ ಪ್ರಾಥಮಿಕ ಆರೋಗ್ಯ ಕೇಂದ್ರ ಸ್ಥಾಪಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕೇಂದ್ರದ ಆರೋಗ್ಯ ಸಚಿವ ಮನಸುಖ್‌ ಮಾಂಡವಿಯಾ ಅವರಿಗೆ ಮನವಿ ಸಲ್ಲಿಸಲಾಗಿದೆ ಎಂದು ಅವರು ಹೇಳಿದರು.

ಹಳೆ ಮೈಸೂರು ಭಾಗಕ್ಕೆ ಹೋಲಿಸಿದರೆ, ಉತ್ತರ ಕರ್ನಾಟಕದಲ್ಲಿ ಸರ್ಕಾರಿ ಆಸ್ಪತ್ರೆಗಳ ಸಂಖ್ಯೆ ಕಡಿಮೆ ಇದೆ. ಅಲ್ಲಿ ರಾಷ್ಟ್ರೀಯ ಆರೋಗ್ಯ ಮಿಷನ್ ಅಡಿ ಪ್ರಾಥಮಿಕ ಆರೋಗ್ಯ ಕೇಂದ್ರ ಸ್ಥಾಪನೆಗೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಅವರಿಗೆ ಕೋರಲಾಗಿದೆ ಎಂದು ಅವರು ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT