ಮಂಗಳವಾರ, ಆಗಸ್ಟ್ 16, 2022
29 °C

ದಲಿತರು ಸಿಎಂ ಆಗಲು ಕಾಂಗ್ರೆಸ್‌ನಲ್ಲಿ ಅವಕಾಶವಿದೆ: ಶಾಸಕ ಡಾ.ಜಿ. ಪರಮೇಶ್ವರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

 ಬೆಂಗಳೂರು:‘ ಕಾಂಗ್ರೆಸ್‌ನಲ್ಲಿ ದಲಿತರು ಮುಖ್ಯಮಂತ್ರಿಯಾಗಲು ಅವಕಾಶವಿದೆ ಎಂಬ ನಂಬಿಕೆ ನನಗಿದೆ’ ಎಂದು ಕಾಂಗ್ರೆಸ್‌ ಶಾಸಕ ಡಾ.ಜಿ. ಪರಮೇಶ್ವರ ಹೇಳಿದರು.

ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಅಧಿಕೃತ ನಿವಾಸಕ್ಕೆ ಭಾನುವಾರ ಭೇಟಿ ನೀಡಿದ ಅವರು ಕೆಲಕಾಲ ಚರ್ಚೆ ನಡೆಸಿದರು. ಬಳಿಕ ಸುದ್ದಿಗಾರರ ಜತೆ ಮಾತನಾಡುವಾಗ, ‘ಮುಖ್ಯಮಂತ್ರಿ ಹುದ್ದೆಯ ಕನಸು ಕಾಣುವ ದಲಿತರು ಹುಚ್ಚರು’ ಎಂಬ ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದರು.

‘ದಲಿತರನ್ನು ಮುಖ್ಯಮಂತ್ರಿ ಮಾಡುವುದಿಲ್ಲ ಎಂದು ಬಿಜೆಪಿ ನಾಯಕರು ಸ್ಪಷ್ಟಪಡಿಸಿರಬಹುದು. ನಮ್ಮ ಪಕ್ಷದ ಬಗ್ಗೆ ಅವರಿಗೆ ಏನು ಗೊತ್ತು? ಬಿಜೆಪಿಯ ಕುರಿತು ಮಾತ್ರ ಅವರಿಗೆ ತಿಳಿದಿದೆ. ಕಾಂಗ್ರೆಸ್‌ನಲ್ಲಿ ಎಲ್ಲರಿಗೂ ಅವಕಾಶಗಳಿವೆ’ ಎಂದರು.

ಇತಿಹಾಸ ತಿರುಚಬಾರದು: ‘ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರು ಯಾರು ಎಂಬುದು ಎಲ್ಲರಿಗೂ ಗೊತ್ತು. ಹೆಡಗೇವಾರ್‌ ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡಿದ್ದ ಕುರಿತು ನಾನು ಯಾವತ್ತೂ ಓದಿಲ್ಲ. ಈಗ ಇತಿಹಾಸವನ್ನು ತಿರುಚುವ ಕೆಲಸ ಮಾಡಬಾರದು’ ಎಂದು ಹೇಳಿದರು.

‘ಪಕ್ಷದ ಕುರಿತು ನನಗೆ ಯಾವುದೇ ಅಸಮಾಧಾನ ಇಲ್ಲ. ನಾಯಕರ ಮೇಲೂ ಸಿಟ್ಟು ಇಲ್ಲ. ವೈಯಕ್ತಿಕ ಕಾರಣಗಳಿಂದಾಗಿ ಇತ್ತೀಚೆಗೆ ಕೆಲವು ಸಭೆಗಳಲ್ಲಿ ಭಾಗವಹಿಸಲು ಸಾಧ್ಯವಾಗಿರಲಿಲ್ಲ. ಕ್ಷೇತ್ರ ಮತ್ತು ಜಿಲ್ಲೆಯಲ್ಲೇ ಹೆಚ್ಚು ಕೆಲಸ ಮಾಡುತ್ತಿದ್ದೇನೆ. ವಿಧಾನ ಪರಿಷತ್‌ ಚುನಾವಣೆಯಲ್ಲಿ ಎಲ್ಲರೂ ಒಗ್ಗೂಡಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿದ್ದೇವೆ’ ಎಂದರು.

ಸಿದ್ದರಾಮಯ್ಯ ಮತ್ತು ತಮ್ಮ ಸಂಬಂಧ ತುಂಬಾ ಹಳೆಯದು. ಇಬ್ಬರ ನಡುವೆ ಯಾವುದೇ ರೀತಿಯ ವೈಮನಸ್ಸಿಲ್ಲ. ಅವರ ಭೇಟಿಯಲ್ಲೂ ವಿಶೇಷತೆ ಇಲ್ಲ. ಇತ್ತೀಚಿನ ಕೆಲವು ವಿಚಾರಗಳ ಕುರಿತು ಚರ್ಚೆ ನಡೆಸಲಾಗಿದೆ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು