ಶನಿವಾರ, ಸೆಪ್ಟೆಂಬರ್ 18, 2021
21 °C

 ಸಿ.ಎಂ. ಬದಲಾವಣೆಯಿಂದ ರಾಜ್ಯಕ್ಕೆ ಪ್ರಯೋಜನವಿಲ್ಲ: ಸಿದ್ದರಾಮಯ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ:  'ಬಿ.ಎಸ್. ಯಡಿಯೂರಪ್ಪ ಭ್ರಷ್ಟ ಮುಖ್ಯಮಂತ್ರಿ. ಅವರು ಬದಲಾದರೆ ಮತ್ತೊಬ್ಬ ಭ್ರಷ್ಟರು ಮುಖ್ಯಮಂತ್ರಿ ಆಗುತ್ತಾರೆ. ಅದರಿಂದ ರಾಜ್ಯಕ್ಕೇನೂ ಪ್ರಯೋಜನವಿಲ್ಲ' ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಅತಿವೃಷ್ಟಿ ಪರಿಶೀಲನೆಗೆ ಬಾದಾಮಿಗೆ ತೆರಳಲು ಇಲ್ಲಿಯ ವಿಮಾನ ನಿಲ್ದಾಣಕ್ಕೆ ಬಂದ ಸಂದರ್ಭದಲ್ಲಿ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.

'ಮುಖ್ಯಮಂತ್ರಿ ಬದಲಾವಣೆಯಲ್ಲ, ರಾಜ್ಯವನ್ನೇ ಬಿಜೆಪಿ ಬಿಟ್ಟು ತೊಲಗಬೇಕು. ಅವರಿಂದ ರಾಜ್ಯದ ಹಿತ ಕಾಪಾಡಲು ಸಾಧ್ಯವಿಲ್ಲ. ಪ್ರತಿಯೊಂದು ಕ್ಷೇತ್ರದಲ್ಲೂ ಭ್ರಷ್ಟಾಚಾರ ತಾಂಡವವಾಡುತ್ತಿದೆ. ವರ್ಗಾವಣೆಯಲ್ಲಂತೂ ಸಾಕಷ್ಟು ಭ್ರಷ್ಟಾಚಾರ ನಡೆಯುತ್ತಿದೆ' ಎಂದ ಅವರು, 'ಹೆತ್ತವರಿಗೆ ಹೆಗ್ಗಣ ಮುದ್ದು ಅನ್ನೋ ಹಾಗೆ ಬಿಜೆಪಿ ರಾಷ್ಟೀಯ ಘಟಕದ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಯಡಿಯೂರಪ್ಪ ಅವರನ್ನು ಹೊಗಳಿದ್ದಾರೆ' ಎಂದು ವ್ಯಂಗ್ಯವಾಡಿದರು.

'ಬಿಜೆಪಿಯೇ ಭ್ರಷ್ಟ ಪಕ್ಷವಾಗಿರುವಾಗ, ಭ್ರಷ್ಟಾಚಾರದ ಆರೋಪ ಇರುವ ಸಚಿವೆ ಶಶಿಕಲಾ ಜೊಲ್ಲೆ ಅವರನ್ನು ಹೇಗೆ ಪ್ರಶ್ನಿಸುತ್ತಾರೆ. ಅವರನ್ನು ಕೂಡಲೇ ಸಂಪುಟದಿಂದ ಉಚ್ಛಾಟಿಸಬೇಕು ಎಂದು ಹೇಳಿದ್ದೇವೆ' ಎಂದು ಪ್ರತಿಕ್ರಿಯಿಸಿದರು‌.

'ಅತಿವೃಷ್ಟಿಯಿಂದ ಅನೇಕರ ಪ್ರಾಣ ಹಾನಿಯಾಗಿದೆ, ಸಾಕಷ್ಟು ಬೆಳೆ ಹಾನಿಯಾಗಿದೆ. ಯಾವ್ಯಾವ ಜಿಲ್ಲೆಯಲ್ಲಿ ಎಷ್ಟೆಷ್ಟು ಹಾನಿಯಾಗಿದೆ ಎಂದು ಮಾಹಿತಿ ಪಡೆದು ಪರಿಹಾರ ನೀಡುವುದು ಸರ್ಕಾರದ ಜವಾಬ್ದಾರಿ. 2019ರ ಅತಿವೃಷ್ಟಿಯ ಪರಿಹಾರವೇ ಇನ್ನೂ ಸಂತ್ರಸ್ತರಿಗೆ ನೀಡಿಲ್ಲ. ಪ್ರಕೃತಿ ವಿಕೋಪ ಪರಿಹಾರದ ನಿಯಮಾವಳಿ ಪ್ರಕಾರವಾದರೂ ಪರಿಹಾರ ನೀಡಲು ಮುಂದಾಗಬೇಕು. ಅದು ಬಿಟ್ಟು ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳಲು ರಾಜಕೀಯ ಮಾಡುತ್ತ ಕಾಲಹರಣ ಮಾಡುತ್ತಿರುವುದು ಸರಿಯಲ್ಲ' ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು