ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿ.ಪಂ, ತಾ.ಪಂ. ಚುನಾವಣೆ ಮುಂದೂಡಲು ಚಿಂತನೆ: ಕೆ.ಎಸ್‌. ಈಶ್ವರಪ್ಪ

Last Updated 19 ಏಪ್ರಿಲ್ 2021, 8:20 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಜ್ಯದಲ್ಲಿ ಕೋವಿಡ್‌ ಹೆಚ್ಚುತ್ತಿರುವ ಕಾರಣ ಜಿಲ್ಲಾ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ ಚುನಾವಣೆ ಮುಂದೂಡಲು ಚಿಂತನೆ ನಡೆದಿದೆ. ಸಂಪುಟ ಸಭೆಯಲ್ಲಿ ಚರ್ಚಿಸಿ, ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ ಕೆ.ಎಸ್‌. ಈಶ್ವರಪ್ಪ ಹೇಳಿದರು.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು, ‘ಚುನಾವಣೆ ಮುಂದೂಡಿದರೆ, ಅವಧಿ ಮುಗಿದ ಕಡೆಗಳಲ್ಲಿ ಆಡಳಿತಾಧಿಕಾರಿಯನ್ನು ನೇಮಿಸಬೇಕಾಗುತ್ತದೆ. ಈ ವಿಚಾರದ ಬಗ್ಗೆಯೂ ಚರ್ಚೆ ನಡೆದಿದೆ’ ಎಂದರು.

‘ರಾಜ್ಯದಲ್ಲಿ ಕೋವಿಡ್ ದಿನೇ ದಿನೇ ಉಲ್ಬಣವಾಗುತ್ತಿದೆ. ಈ ಚುನಾವಣೆಯಲ್ಲಿ ಸುಮಾರು ಮೂರೂವರೆ ಕೋಟಿ ಜನ ಭಾಗಿಯಾಗಬೇಕು, ಹೀಗಾಗಿ ಮುಂದೂಡುವುದು ಸೂಕ್ತ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಸಂಪುಟ ಸಭೆಯಲ್ಲಿ ಚರ್ಚಿಸಿ, ವಿಷಯವನ್ನು ರಾಜ್ಯ ಚುನಾವಣಾ ಆಯೋಗಕ್ಕೆ ಕಳುಸುತ್ತೇವೆ’ ಎಂದರು.

‘ಚುನಾವಣೆ ಮುಂದೂಡುವ ಬಗ್ಗೆ ನಮ್ಮ ಅಧಿಕಾರಿಗಳ ಜೊತೆ ಚರ್ಚಿಸಿದ್ದೇವೆ. ಅವರು ಮುಂದೂಡಿಕೆ ಬಗ್ಗೆ ಸಲಹೆ ಕೊಟ್ಟಿದ್ದಾರೆ. ಹೀಗಾಗಿ, ಸದ್ಯಕ್ಕೆ ಮುಂದೂಡುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡುತ್ತೇವೆ’ ಎಂದರು.

‘ಕೆರೆ, ಕಟ್ಟೆಗಳ, ನಾಲೆ, ಕಲ್ಯಾಣಿ, ಗೋಕಟ್ಟೆ ಅಭಿವೃದ್ಧಿಗೆ ನಿರ್ಧರಿಸಲಾಗಿದೆ. ಉದ್ಯೋಗ ಖಾತ್ರಿ ಯೋಜನೆಯಡಿ (ನರೇಗಾ) ಈ ಯೋಜನೆಯನ್ನು ಕೈಗೆತ್ತಿಕೊಳ್ಳುತ್ತೇವೆ. ಮಳೆ ನೀರು ಭೂಮಿಯಲ್ಲಿ ಇಂಗಿಸುವ ಕೆಲಸ ಮಾಡುತ್ತೇವೆ. ಇದಕ್ಕೆ ಗುರಿ ಕೂಡ ನಿಗದಿ‍ಪಡಿಸಿದ್ದೇವೆ. ಕೆರೆ ಅಭಿವೃದ್ಧಿಯನ್ನು ಗ್ರಾಮ ಪಂಚಾಯಿತಿಗೆ ವಹಿಸಲಾಗಿದೆ’ ಎಂದು ಈಶ್ವರಪ್ಪ ಹೇಳಿದರು.

‘ಕೋವಿಡ್ ಕಾರಣಕ್ಕೆ ಈ ಹಿಂದೆ ಗ್ರಾಮಮಟ್ಟದಲ್ಲಿ ಕಾರ್ಯಪಡೆ ರಚಿಸಿದ್ದೆವು. ಈ ಕಾರ್ಯಕ್ರಮ ಯಶಸ್ವಿಯಾಗಿತ್ತು. ಈಗಲೂ ಅದನ್ನು ಮುಂದುವರಿಸುತ್ತೇವೆ. ಕೇವಲ 2 ಸಾವಿರ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಆರೂವರೆ ಲಕ್ಷ ಕೋವಿಡ್ ಲಸಿಕೆ ಹಾಕಲಾಗಿದೆ’ ಎಂದು ಮಾಹಿತಿ ನೀಡಿದರು.

ದೆಹಲಿಯಲ್ಲಿ ಲಾಕ್ ಡೌನ್ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ‘ಅಲ್ಲಿ ಅತಿ‌ ಹೆಚ್ಚಿನ ಪ್ರಕರಣಗಳು ಪತ್ತೆ ಆಗುತ್ತಿವೆ. ಪರಿಸ್ಥಿತಿ ತೀವ್ರ ಗಂಭೀರ ಆಗಿರುವುದರಿಂದ ಅಲ್ಲಿ ಒಂದು ವಾರ ಲಾಕ್ ಡೌನ್ ಮಾಡಿದ್ದಾರೆ. ನಮ್ಮಲ್ಲಿ ಅಂಥ ಪರಿಸ್ಥಿತಿ ಇಲ್ಲ. ಹೀಗಾಗಿ, ಬೆಂಗಳೂರಿಗೆ ಲಾಕ್ ಡೌನ್ ಬೇಕಾಗಿಲ್ಲ’ ಎಂದು ಅವರು ಅಭಿಪ್ರಾಯಪಟ್ಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT