ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂವರಿಗೆ ಸಚಿವ ಸ್ಥಾನ ನೀಡಲು ಆಗ್ರಹ

ಕುರುಬ ಸಮುದಾಯದ ಮಠಾಧೀಶರು, ಶಾಸಕರಿಂದ ಮುಖ್ಯಮಂತ್ರಿ ಭೇಟಿ
Last Updated 28 ನವೆಂಬರ್ 2020, 6:13 IST
ಅಕ್ಷರ ಗಾತ್ರ

ಬೆಂಗಳೂರು: ಕುರುಬ ಸಮುದಾಯದ ಮೂವರಿಗೆ ಸಚಿವ ಸ್ಥಾನ ನೀಡುವಂತೆ ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ ನೇತೃತ್ವದ ಕುರುಬ ಮಠಾಧೀಶರು, ಚುನಾಯಿತ ಪ್ರತಿನಿಧಿಗಳು ಮತ್ತು ಮುಖಂಡರ ನಿಯೋಗ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರನ್ನು ಶುಕ್ರವಾರ ಆಗ್ರಹಿಸಿದೆ.

ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾದಲ್ಲಿ ಯಡಿಯೂರಪ್ಪ ಅವರನ್ನು ಭೇಟಿಮಾಡಿದ ನಿಯೋಗ, ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಗಳ ಪಟ್ಟಿಗೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವಂತೆ ಒತ್ತಾಯಿಸಿ ಮನವಿ ಸಲ್ಲಿಸಿತು. ಇದೇ ಸಂದರ್ಭದಲ್ಲಿ ಸಂಪುಟ ವಿಸ್ತರಣೆ ಬಗ್ಗೆಯೂ ಚರ್ಚಿಸಿದ್ದು, ನಾಲ್ವರು ಕುರುಬ ಶಾಸಕರಲ್ಲಿ ಮೂವರಿಗೆ ಸಚಿವ ಸ್ಥಾನ ನೀಡಬೇಕೆಂಬ ಬೇಡಿಕೆಯನ್ನು ಮುಂದಿಡಲಾಗಿದೆ.

ಮುಖ್ಯಮಂತ್ರಿ ಭೇಟಿ ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ವಿಧಾನ ಪರಿಷತ್‌ ಸದಸ್ಯ ಎಚ್‌. ವಿಶ್ವನಾಥ್‌, ‘ಮೂವರಿಗೆ ಸಚಿವ ಸ್ಥಾನ ನೀಡುವುದೂ ಸೇರಿದಂತೆ ಮೂರು ಪ್ರಮುಖ ಬೇಡಿಕೆಗಳನ್ನು ಮುಖ್ಯಮಂತ್ರಿಯವರ ಮುಂದಿಡಲಾಗಿದೆ. ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಗಳ ಪಟ್ಟಿಗೆ ಸೇರಿಸಲು ಶಿಫಾರಸು ಮಾಡಬೇಕು ಮತ್ತು ನಮ್ಮ ಸಮುದಾಯಕ್ಕೆ ಪ್ರತ್ಯೇಕ ನಿಗಮ ಸ್ಥಾಪಿಸಿ, ₹ 500 ಕೋಟಿ ಅನುದಾನ ಒದಗಿಸುವಂತೆ ಒತ್ತಾಯಿಸಲಾಗಿದೆ’ ಎಂದರು.

ನಿರಂಜನಾನಂದಪುರಿ ಸ್ವಾಮೀಜಿ ಮಾತನಾಡಿ, ‘ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಗಳ ಪಟ್ಟಿಗೆ ಸೇರಿಸುವಂತೆ 1976ರಲ್ಲಿ ಆಗಿನ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರು ಶಿಫಾರಸು ಮಾಡಿದ್ದರು. ಈವರೆಗೂ ಅದು ಅನುಷ್ಠಾನಕ್ಕೆ ಬಂದಿಲ್ಲ. ಈ ಸಂಬಂಧ ದೆಹಲಿಗೆ ತೆರಳಿ ಕೇಂದ್ರದ ಸಚಿವರಿಗೆ ಮನವಿ ಸಲ್ಲಿಸಿ ಬಂದಿದ್ದೇವೆ. ರಾಜ್ಯ ಸರ್ಕಾರದಿಂದ ಮತ್ತೆ ಶಿಫಾರಸು ಕಳುಹಿಸುವಂತೆ ಮುಖ್ಯಮಂತ್ರಿಯವರಿಗೆ ಮನವಿ ಮಾಡಿದ್ದೇವೆ. ಅವರಿಂದ ಸಕಾರಾತ್ಮಕ ಸ್ಪಂದನೆ ದೊರಕಿದೆ’ ಎಂದರು.

ನಿಯೋಗವು ಮುಖ್ಯಮಂತ್ರಿಯವರನ್ನು ಭೇಟಿಮಾಡಿದ ಸಂದರ್ಭದಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಮತ್ತು ವಸತಿ ಸಚಿವ ವಿ. ಸೋಮಣ್ಣ ಉಪಸ್ಥಿತರಿದ್ದರು. ಕಾಗಿನೆಲೆ ಕನಕ ಗುರುಪೀಠದ ಹೊಸದುರ್ಗ ಶಾಖಾ ಮಠದ ಈಶ್ವರಾನಂದಪುರಿ ಸ್ವಾಮೀಜಿ, ವಿಧಾನ ಪರಿಷತ್‌ ಸದಸ್ಯರಾದ ಎಂ.ಟಿ.ಬಿ. ನಾಗರಾಜ್‌, ಆರ್‌. ಶಂಕರ್‌, ಕುರುಬರ ಎಸ್‌.ಟಿ. ಹೋರಾಟ ಸಮಿತಿ ಅಧ್ಯಕ್ಷ ಕೆ. ವಿರೂಪಾಕ್ಷಪ್ಪ, ಕಾರ್ಯಾಧ್ಯಕ್ಷ ಕೆ. ಮುಕುಡಪ್ಪ, ಕರ್ನಾಟಕ ಪ್ರದೇಶ ಕುರುಬರ ಸಂಘದ ಕಾರ್ಯಾಧ್ಯಕ್ಷ ಸುಬ್ರಹ್ಮಣ್ಯ, ಪ್ರಧಾನ ಕಾರ್ಯದರ್ಶಿ ಡಿ. ವೆಂಕಟೇಶ್‌ ಮೂರ್ತಿ ನಿಯೋಗದಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT