ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೀಸಲಾತಿ ಕುರಿತು ಸಚಿವ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ಇಂದು

ವಿವಿಧ ಸಮುದಾಯಗಳಿಂದ ಮೀಸಲಾತಿ ಪ್ರಮಾಣ ಹೆಚ್ಚಳ, ಪ್ರವರ್ಗಗಳಲ್ಲಿ ಬದಲಾವಣೆಗೆ ಪಟ್ಟು
Last Updated 13 ಮಾರ್ಚ್ 2021, 9:35 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿರುವ ವಿವಿಧ ಸಮುದಾಯಗಳು ಮೀಸಲಾತಿ ಪ್ರಮಾಣ ಹೆಚ್ಚಿಸುವಂತೆ, ಪ್ರವರ್ಗಗಳಲ್ಲಿ ಬದಲಾವಣೆ ಮಾಡುವಂತೆ ಇಟ್ಟಿರುವ ಬೇಡಿಕೆಗಳ ಕುರಿತು ಚರ್ಚಿಸಲು ಕುಮಾರಕೃಪ ಅತಿಥಿ ಗೃಹದಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ಶನಿವಾರ (ಮಾರ್ಚ್‌13) ಸಂಜೆ ನಡೆಯಲಿದೆ.

ಸಭೆಯಲ್ಲಿ ಹಿಂದುಳಿದ ವರ್ಗಗಳ ಶಾಶ್ವತ ಅಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್‌ ಹೆಗ್ಡೆ, ಸರ್ಕಾರದ ಅಡ್ವೋಕೇಟ್ ಜನರಲ್ ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ, ಮಾಜಿ ಅಡ್ವೋಕೇಟ್ ಜನರಲ್‌ಗಳು ಹಾಗೂ ಕಾನೂನು ಇಲಾಖೆಯ ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಪರಿಶಿಷ್ಟ ಪಂಗಡಗಳ ಪಟ್ಟಿಗೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವಂತೆ ಕುರುಬ ಸಮುದಾಯ ಪಟ್ಟು ಹಿಡಿದಿದೆ. ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ ‘2ಎ’ ಅಡಿಯಲ್ಲಿ ಮೀಸಲಾತಿ ನೀಡುವಂತೆ ಆಗ್ರಹಿಸಿ ಕೂಡಲ ಸಂಗಮದ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಎಸ್‌.ಟಿ ಸಮುದಾಯಗಳಿಗೆ ನೀಡಿರುವ ಮೀಸಲಾತಿ ಪ್ರಮಾಣ ಶೇ 7ಕ್ಕೆ ಹೆಚ್ಚಿಸುವಂತೆ ವಾಲ್ಮೀಕಿ ಸಮುದಾಯ ಹೋರಾಟ ನಡೆಸುತ್ತಿದೆ. ವೀರಶೈವ ಮತ್ತು ಲಿಂಗಾಯತ ಸಮುದಾಯಗಳ ಹಲವು ಉಪ ಪಂಗಡಗಳು ತಮ್ಮನ್ನು ಕೇಂದ್ರದ ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸುವಂತೆ ಬೇಡಿಕೆ ಇಟ್ಟಿವೆ. ಒಕ್ಕಲಿಗ ಸಮುದಾಯ ಕೂಡ ಮೀಸಲಾತಿ ಹೆಚ್ಚಿಸುವಂತೆ ಬೇಟಿಕೆ ಇಟ್ಟಿದೆ.

ಮೀಸಲಾತಿ ಪ್ರಮಾಣ ಶೇ 50 ಮೀರಬಾರದೆಂದು ಸುಪ್ರೀಂ ಕೋರ್ಟ್‌ ಈ ಹಿಂದೆಯೇ ಹೇಳಿದೆ. ಇದೀಗ ಈ ಪ್ರಮಾಣವನ್ನು ಪರಿಷ್ಕರಿಸುವ ಸಂಬಂಧ ಅಭಿಪ್ರಾಯ ನೀಡುವಂತೆ ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ತಿಳಿಸಿದೆ. ಅಲ್ಲದೆ, ಹಿಂದುಳಿದ ವರ್ಗಗಳ ಮೀಸಲಾತಿಯಲ್ಲಿ ಒಳ ಮೀಸಲಾತಿಯ ಪರಿಶೀಲನೆಗೆ ಕೇಂದ್ರ ಸರ್ಕಾರ ರಚಿಸಿರುವ ನ್ಯಾಯಮೂರ್ತಿ ರೋಹಿಣಿ ಆಯೋಗ ಕೂಡಾ ಕೆಲವು ಸ್ಪಷ್ಟೀಕರಣವನ್ನು ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಕೇಳಿದೆ. ಎಲ್ಲ ವಿಷಯಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ.

ಮೀಸಲಾತಿ ಬೇಡಿಕೆಗಳ ವಿಚಾರದಲ್ಲಿ ಸಂವಿಧಾನ ಮತ್ತು ಕಾನೂನಿಗೆ ಸಂಬಂಧಿಸಿದ ಪ್ರಶ್ನೆಗಳು ಅಡಕವಾಗಿವೆ. ಈ ಎಲ್ಲ ಅಂಶಗಳನ್ನೂ ಪರಿಶೀಲಿಸಲು ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಸುಭಾಷ್‌ ಅಡಿ ನೇತೃತ್ವದಲ್ಲಿ ಸರ್ಕಾರ ತ್ರಿಸದಸ್ಯ ಸಮಿತಿಯನ್ನು ಈಗಾಗಲೇ ರಚಿಸಿದೆ. ಈ ಎಲ್ಲ ವಿಚಾರಗಳು ಸಭೆಯಲ್ಲಿ ಪ್ರಸ್ತಾವ ಆಗಲಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT