ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಭಿವೃದ್ಧಿ ಕೆಲಸ ಚುರುಕು: ಶೋಭಾ ಸೂಚನೆ

ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಾಸಿಕ ಕೆಡಿಪಿ ಸಭೆ
Last Updated 2 ನವೆಂಬರ್ 2020, 13:38 IST
ಅಕ್ಷರ ಗಾತ್ರ

ಮಡಿಕೇರಿ: ‘ಸರ್ಕಾರದಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ನೀಡಲಾಗಿರುವ ಅನುದಾನವನ್ನು ಸೂಕ್ತ ರೀತಿಯಲ್ಲಿ ಬಳಸಿಕೊಂಡು ಅಭಿವೃದ್ಧಿ ಕಾರ್ಯ ಕೈಗೊಳ್ಳಬೇಕು’ ಎಂದು ತಾ.ಪಂ ಅಧ್ಯಕ್ಷೆ ತೆಕ್ಕಡೆ ಶೋಭಾ ಮೋಹನ್ ಕುಮಾರ್ ಅವರು ಸೂಚನೆ ನೀಡಿದರು.

ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಮಳೆಗಾಲ ಮುಗಿಯುತ್ತ ಬಂದಿರುವುದರಿಂದ ಅಭಿವೃದ್ಧಿ ಕಾಮಗಾರಿಗಳು ಚುರುಕುಗೊಳ್ಳಬೇಕು. ಸರ್ಕಾರದಿಂದ ವಿವಿಧ ಇಲಾಖೆಗಳಿಗೆ ಬಿಡುಗಡೆಯಾಗಿರುವ ಅನುದಾನದ ಸದ್ಬಳಕೆಯಾಗಬೇಕು. ಸಾರ್ವಜನಿಕರ ಕುಂದುಕೊರತೆಯನ್ನು ಅರಿತು ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು’ ಎಂದು ಅವರು ನಿರ್ದೇಶನ ನೀಡಿದರು.

ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿಯ ಅಧ್ಯಕ್ಷ ಶ್ರೀಧರ್ ಅವರು ಮಾತನಾಡಿ, ಮಳೆ ಹಾನಿಯಿಂದ ಜಿಲ್ಲೆಯಲ್ಲಿ ಹಲವಾರು ಕಡೆ ಬರೆಗಳು ಕುಸಿದಿದ್ದು ತಾತ್ಕಾಲಿಕವಾಗಿ ತೆರವುಗೊಳಿಸಿದ್ದಾರೆ. ಆದರೆ, ಆ ಕಾರ್ಯವು ಪೂರ್ಣಗೊಂಡಿಲ್ಲ, ರಸ್ತೆಗಳು ಹಾಳಾಗಿದ್ದು ಅದನ್ನು ಕೂಡಲೇ ಸರಿಪಡಿಸಿ ಎಂದರು.

ಜಿ.ಪಂ ಎಇಇ ಶ್ರೀಕಂಠಯ್ಯ ಅವರು, ಮಳೆಯ ಕಾರಣ ದುರಸ್ತಿಗೊಂಡ ರಸ್ತೆಗಳ ಕಾಮಗಾರಿಯನ್ನು ಸರಿಪಡಿಸಲು ಸಾಧ್ಯವಾಗಲಿಲ್ಲ. ಮಳೆಯು ಇದೀಗ ಬಿಡುವು ಕೊಟ್ಟಿದೆ ಕಾಮಗಾರಿಯನ್ನು ಶೀಘ್ರವಾಗಿಯೇ ಪೂರ್ಣಗೊಳಿಸಲಾಗುತ್ತದೆ ಎಂದು ಅವರು ತಿಳಿಸಿದರು.

ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕ ದಯಾನಂದ ಅವರು ಮಾತನಾಡಿ, ಜಿಲ್ಲೆಯಲ್ಲಿ ಜಾನುವಾರುಗಳಿಗೆ ಕಾಲುಬಾಯಿ ಜ್ವರದ ಲಸಿಕೆ ಹಾಕಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಕೃಷಿ ಇಲಾಖೆಯ ಅಧಿಕಾರಿ ಗಿರೀಶ್ ಮಾತನಾಡಿ, ಜಿಲ್ಲೆಯಲ್ಲಿ ಶೇ 97.5ರಷ್ಟು ಬೆಳೆ ಸಮೀಕ್ಷೆ ಪೂರ್ಣಗೊಂಡಿದೆ ಎಂದು ಅವರು ಸಭೆಗೆ ಮಾಹಿತಿ ನೀಡಿದರು.

ತಾ.ಪಂ ಇಒ ಲಕ್ಷ್ಮಿ ಮಾತನಾಡಿ ಜಿಲ್ಲೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ 10 ಉದ್ಯಾನ ನಿರ್ಮಾಣಗೊಂಡಿದೆ. ತಾಲ್ಲೂಕು ಪಂಚಾಯಿತಿ ಕಟ್ಟಡವು ಹಳೆಯದಾಗಿರುವುದರಿಂದ ಹೊಸ ಕಟ್ಟಡದ ನಿರ್ಮಾಣವು ಶೀಘ್ರದಲ್ಲಿ ಪ್ರಾರಂಭವಾಗುವುದು ಎಂದು ಅವರು ಮಾಹಿತಿ ನೀಡಿದರು.

ತಾಲ್ಲೂಕು ಹಾಗೂ ಗ್ರಾಮ ಮಟ್ಟದಲ್ಲಿ ನಡೆಯುತ್ತಿರುವ ವಿವಿಧ ಯೋಜನೆಗಳ ಕುರಿತು ಚರ್ಚಿಸಲಾಯಿತು. ತಾ.ಪಂ ಉಪಾಧ್ಯಕ್ಷ ಬೊಳಿಯಾಡಿರ ಸಂತು ಸುಬ್ರಮಣಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಅರುಂಧತಿ, ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ಶೇಖರ್, ಮೀನುಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕರಾದ ಸ್ನೇಹಾ, ವೈದ್ಯಾಧಿಕಾರಿ ಡಾ.ಚೇತನ್, ಸಹಕಾರ ಇಲಾಖೆಯ ಸಂದೀಪ್ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT