ಶುಕ್ರವಾರ, ಜುಲೈ 30, 2021
24 °C
ನೀರು, ನೈರ್ಮಲ್ಯ ನಿರ್ವಹಣೆಗೆ 15 ಹಣಕಾಸು ಅನುದಾನ

ದಿನಕ್ಕೆ ಎರಡು ಪಾಳಿಗಳಲ್ಲಿ ಉದ್ಯೋಗ ಖಾತ್ರಿ ಮುಂದುವರಿಕೆಗೆ ಅವಕಾಶ: ಈಶ್ವರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಗ್ರಾಮೀಣ ಪ್ರದೇಶಗಳ ಕುಡಿಯುವ ನೀರು ಮತ್ತು ನೈರ್ಮಲ್ಯದ ತುರ್ತು ಕಾಮಗಾರಿಗಳಿಗೆ 15ನೇ ಹಣಕಾಸಿನ ಅನುದಾನ ಬಳಸಿಕೊಳ್ಳಲು ಗ್ರಾಮ ಪಂಚಾಯಿತಿಗಳಿಗೆ ಅನುಮತಿ ನೀಡಲಾಗಿದೆ ಎಂದು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಅವರು ಹೇಳಿದರು.

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಣಾಮಕಾರಿಯಾಗಿ ಕೊರೊನಾ ನಿಯಂತ್ರಿಸುವ ಕುರಿತು ಬೆಳಗಾವಿ, ಕಲಬುರ್ಗಿ ವಿಭಾಗದ ವಿಭಾಗದ ಜಿಲ್ಲಾ ಪಂಚಾಯಿತಿ ಸಿಇಒಗಳು ಹಾಗೂ ಗ್ರಾಮ ಪಂಚಾಯಿತಿ ಪಿಡಿಒಗಳ ಜತೆ ಮಂಗಳವಾರ ನಡೆದ ವೀಡಿಯೊ ಸಂವಾದದ ನಂತರ ಅವರು ಸುದ್ದಿಗಾರರಿಗೆ ಮಾಹಿತಿ ನೀಡಿದರು.

ಈ ಹಿಂದೆ ಸದರಿ ಅನುದಾನವನ್ನು ಬಳಸಿಕೊಳ್ಳಲು ಕ್ರಿಯಾ ಯೋಜನೆ ಸಿದ್ಧಪಡಿಸಿ, ಜಿಲ್ಲಾ ಪಂಚಾಯಿತಿ ಸಿಇಒ ಅನುಮೋದನೆ ಪಡೆಯಬೇಕಾಗಿತ್ತು. ಪ್ರಸ್ತುತ ಈ ನಿಯಮ ಸಡಿಲಿಸಲಾಗಿದೆ. ಅಲ್ಲದೇ, ತುರ್ತು ಕಾರ್ಯಗಳಿಗೆ ಸಿಬ್ಬಂದಿ ಕೊರತೆಯಾದರೆ ಸಿಇಒ ಅವರಿಂದ ಅನುಮತಿ ಪಡೆದು ನೇಮಕಾತಿ ಮಾಡಿಕೊಳ್ಳಲು ಅನುಮತಿ ನೀಡಲಾಗಿದೆ ಎಂದರು.

ಗ್ರಾಮೀಣ ಪ್ರದೇಶದಲ್ಲಿನ ಕಂಟೋನ್ಮೆಂಟ್ ಜೋನ್‌ಗಳನ್ನು ಹೊರತುಪಡಿಸಿ, ಉಳಿದ ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕಾಮಗಾರಿ ನಡೆಸಲು ಅವಕಾಶ ಕಲ್ಪಿಸಲಾಗಿದೆ. ಬೆಳಿಗ್ಗೆ ಮತ್ತು ಮಧ್ಯಾಹ್ನ ಎರಡು ಅವಧಿಯಲ್ಲಿ ಸೀಮಿತ 40 ಜನರ ತಂಡಗಳಾಗಿ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ. ನರೇಗಾದಲ್ಲಿ ಕೆಲಸ ಮಾಡುವ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ಕೊರೋನ ಸೋಂಕಿಗೆ ಒಳಗಾಗಿ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದದೆರೆ ವೈದ್ಯಕೀಯ ವೆಚ್ಚ ಮರುಪಾವತಿಸಲು ಅವಕಾಶ ಕಲ್ಪಿಸಲಾಗಿದೆ. ದಿನಕ್ಕೆ ₹ 10 ಸಾವಿರರಿಂದ ₹ 20 ಸಾವಿರದವರೆಗೂ ನೆರವು ದೊರೆಯಲಿದೆ. ಯೋಜನೆಯ ಶೇ 6ರ ಆಡಳಿತಾತ್ಮಕ ವೆಚ್ಚದಲ್ಲಿ ಪಾವತಿಸಲು ಎಲ್ಲ ಜಿಲ್ಲಾ ಪಂಚಾಯಿತಿಗಳ ಸಿಇಒಗಳಿಗೆ ಸೂಚನೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಕುಡಿಯುವ ನೀರಿನಲ್ಲಿನ ಫಂಗಸ್ ಹರಡಿರುವ ಸಾಧ್ಯತೆ ಇದೆ ಎಂದು ತಜ್ಞರು ವರದಿ ನೀಡಿದ್ದಾರೆ. ಹಾಗಾಗಿ, ಪ್ರತಿ ಮನೆಗಳಲ್ಲೂ ನೀರನ್ನು ಕಾಯಿಸಿ, ಆರಿಸಿ ಕುಡಿಯುವಂತೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಗುತ್ತಿದೆ. ನಗರಗಳಿಂದ  ಗ್ರಾಮೀಣ ಪ್ರದೇಶಗಳಿಗೆ ಹಿಂದಿರುವ ಜನರ ಮೇಲೆ ನಿಗಾ ಇಡಲು ಸೂಚಿಸಲಾಗಿದೆ. ಸಾರ್ವಜನಿಕರು ಸರ್ಕಾರದ  ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಸಲಹೆ ನೀಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು