ಶುಕ್ರವಾರ, ಅಕ್ಟೋಬರ್ 7, 2022
23 °C

ಸಚಿವ ಉಮೇಶ್‌ ಕತ್ತಿ ನಿಧನಕ್ಕೆ ಸಿಎಂ ಬೊಮ್ಮಾಯಿ, ಸಿದ್ದರಾಮಯ್ಯ ಸೇರಿ ಗಣ್ಯರ ಸಂತಾಪ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಬೆಂಗಳೂರು: ಅರಣ್ಯ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್‌ ವಿ. ಕತ್ತಿ (62) ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.

‘ಅರಣ್ಯ ಸಚಿವ, ನನ್ನ ಆಪ್ತ ಸಹೋದ್ಯೋಗಿ ಉಮೇಶ್ ಕತ್ತಿ ಅವರ ಅಕಾಲಿಕ ನಿಧನದಿಂದ ತೀವ್ರ ದುಃಖಿತನಾಗಿದ್ದೇನೆ. ಅವರ ನಿಧನದಿಂದ ರಾಜ್ಯ ಓರ್ವ ನುರಿತ ಮುತ್ಸದ್ದಿ, ಕ್ರಿಯಾಶೀಲ ಮುಖಂಡ ಹಾಗೂ ನಿಷ್ಠಾವಂತ ಜನಸೇವಕನನ್ನು ಕಳೆದುಕೊಂಡಿದೆ. ಅವರ ಅಗಲಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಆ ಭಗವಂತ ಅವರ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

‘ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಸಚಿವರಾದ ಉಮೇಶ್ ಕತ್ತಿ ಅವರ ನಿಧನದಿಂದ ತೀವ್ರ ದುಃಖಿತನಾಗಿದ್ದೇನೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಕುಟುಂಬವರ್ಗಕ್ಕೆ ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

‘ಪಕ್ಷದ ಹಿರಿಯ ನಾಯಕರು, ರಾಜ್ಯ ಸಚಿವರಾದ ಉಮೇಶ್ ಕತ್ತಿಯವರ ನಿಧನದ ಸುದ್ದಿ ತಿಳಿದು ದುಃಖವಾಯಿತು. ದೇವರು ಅವರ ಕುಟುಂಬ ಹಾಗೂ ಅಪಾರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ನೀಡಲೆಂದು ಪ್ರಾರ್ಥಿಸುತ್ತೇನೆ. ಸದ್ಗತಿ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಟ್ವೀಟ್ ಮಾಡಿದ್ದಾರೆ.

‘ಸಚಿವ ಉಮೇಶ ಕತ್ತಿ  ಅವರು ಹೃದಯಾಘಾತದಿಂದ ನಿಧನರಾದ ಸುದ್ದಿ ತಿಳಿದು ದುಃಖವಾಯಿತು. ಭಗವಂತ ಅವರ ಕುಟುಂಬ, ಅಪಾರ ಅಭಿಮಾನಿಗಳಿಗೆ ಅವರ ಅಗಲಿಕೆಯ ನೋವು ಭರಿಸುವ ಶಕ್ತಿ ನೀಡಲೆಂದು ದೇವರಲ್ಲಿ  ಪ್ರಾರ್ಥಿಸುತ್ತೇನೆ’ ಎಂದು ಎಎಪಿ ನಾಯಕ ಪೃಥ್ವಿ ರೆಡ್ಡಿ ಉಲ್ಲೇಖಿಸಿದ್ದಾರೆ.

ಉಮೇಶ್‌ ಕತ್ತಿ ಹೃದಯಾಘಾತದಿಂದ ಮಂಗಳವಾರ ರಾತ್ರಿ ನಿಧನರಾದರು. ರಾತ್ರಿ ಶೌಚಾಲಯಕ್ಕೆ ತೆರಳಿದ್ದ ಅವರು ಅಲ್ಲಿಯೇ ಕುಸಿದುಬಿದ್ದಿದ್ದರು. ಹತ್ತು ನಿಮಿಷಗಳಾದರೂ ಹೊರ ಬರದಿದ್ದಾಗ ಕುಟುಂಬದವರು ಬಾಗಿಲು ತೆರೆದು ಒಳ ಹೋದಾಗ ಅಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದು ಕಂಡುಬಂದಿತ್ತು. ಬಳಿಕ ಅವರನ್ನು ಎಂ.ಎಸ್‌. ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ತೀವ್ರನಿಗಾ ಘಟಕದಲ್ಲಿ ಇರಿಸಲಾಗಿತ್ತು. ತಡರಾತ್ರಿ ವೇಳೆಗೆ ಉಮೇಶ ಕತ್ತಿ ಕೊನೆಯುಸಿರೆಳೆದರು ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.

‘ಕರ್ನಾಟಕ ಸರ್ಕಾರದ ಹಿರಿಯ ಸಚಿವರು ಹಾಗು ಪಕ್ಷದ ನಾಯಕರಾದ ಉಮೇಶ್ ಕತ್ತಿಯವರ ಅಕಾಲಿಕ ಸಾವು ಅತ್ಯಂತ ದುಃಖದ ವಿಷಯ. ಅವರ ಅಗಲಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗಕ್ಕೆ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಓಂ ಶಾಂತಿ’ ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಸಾಮಾಜಿಕ ಮಾಧ್ಯಮ ‘ಕೂ’ನಲ್ಲಿ ಉಲ್ಲೇಖಿಸಿದ್ದಾರೆ.

Koo App
ಕರ್ನಾಟಕ ಸರ್ಕಾರದ ಹಿರಿಯ ಸಚಿವರು ಹಾಗು ಪಕ್ಷದ ನಾಯಕರಾದ ಶ್ರೀ ಉಮೇಶ್ ಕತ್ತಿಯವರ ಅಕಾಲಿಕ ಸಾವು ಅತ್ಯಂತ ದುಃಖದ ವಿಷಯ. ಅವರ ಅಗಲಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗಕ್ಕೆ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಓಂ ಶಾಂತಿ. 🙏🏻 Deeply saddened by the untimely demise of Sri Umesh Katti, Minister of Forest, Food and Civil Supplies, Govt of #Karnataka. My thoughts and prayers are with his family in this hour of grief. #Om Shanti 🙏

- Rajeev Chandrasekhar (@rajeev_chandrasekhar) 7 Sep 2022

‘ಪಕ್ಷದ ಹಿರಿಯ ನಾಯಕರು, ಕರ್ನಾಟಕ ರಾಜ್ಯದ ಅರಣ್ಯ, ಆಹಾರ ಮತ್ತು ನಾಗರಿಕ ಸರಬರಾಜು ಸಚಿವರೂ, ಆಪ್ತರಾದ ಉಮೇಶ್ ಕತ್ತಿ ಅವರ ಅಕಾಲಿಕ ನಿಧನ ಅತೀವ ದುಖವನ್ನುಂಟು ಮಾಡಿದೆ. ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ಕರುಣಿಸಲಿ, ಅವರ ನಿಧನದ ದುಃಖವನ್ನು ಸಹಿಸುವ ಶಕ್ತಿಯನ್ನು ಬಂಧು ಮಿತ್ರರಿಗೆ ನೀಡಲಿ ಎಂದು ಪ್ರಾರ್ಥನೆ’ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ‘ಕೂ’ ಮಾಡಿದ್ದಾರೆ.

‘ಸಚಿವರಾದ ಉಮೇಶ ಕತ್ತಿಯವರು ಹೃದಯಾಘಾತದಿಂದ ನಿಧನರಾದ ಸುದ್ದಿ ತಿಳಿದು ದುಃಖವಾಯಿತು. ದೇವರು ಅವರ ಕುಟುಂಬಸ್ಥರಿಗೆ, ಅಪಾರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ನೀಡಲೆಂದು ಪ್ರಾರ್ಥಿಸುತ್ತೇನೆ. ಸದ್ಗತಿ’ ಎಂದು ಸಚಿವ ಎಸ್‌ಟಿ ಸೋಮಶೇಖರ್ ಉಲ್ಲೇಖಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು