ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಕ್ಕಲಿಗರಿಗೆ ಉನ್ನತ ಸ್ಥಾನಕ್ಕೇರುವ ಅವಕಾಶ ಒದಗಿ ಬಂದಿದೆ: ಡಿ.ಕೆ. ಶಿವಕುಮಾರ್‌

Last Updated 18 ಜುಲೈ 2022, 1:23 IST
ಅಕ್ಷರ ಗಾತ್ರ

ಬೆಂಗಳೂರು: ‘ಎಸ್‌.ಎಂ. ಕೃಷ್ಣ ಅವರ ನಂತರ ಒಕ್ಕಲಿಗ ಸಮುದಾಯದ ವ್ಯಕ್ತಿಯೊಬ್ಬರು ರಾಜ್ಯದಲ್ಲಿ ಉನ್ನತ ಸ್ಥಾನಕ್ಕೇರುವ ಅವಕಾಶ ಒದಗಿ ಬಂದಿದೆ. ಮುಂದಿನ ಚುನಾವಣೆಯಲ್ಲಿ ಸಮುದಾಯವು ಈ ಅವಕಾಶ ತಪ್ಪಿಸಿಕೊಳ್ಳಬಾರದು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿದರು.

ಕೇಂದ್ರ ಲೋಕಸೇವಾ ಆಯೋಗ ಮತ್ತು ಕರ್ನಾಟಕ ಲೋಕಸೇವಾ ಆಯೋಗಗಳು ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿ ಐಎಎಸ್‌, ಐಎಫ್‌ಎಸ್‌, ಕೆಎಎಸ್‌ ಮತ್ತಿತರ ಹುದ್ದೆಗಳಿಗೆ ಆಯ್ಕೆಯಾಗಿರುವ ಒಕ್ಕಲಿಗ ಸಮುದಾಯದ ಅಭ್ಯರ್ಥಿಗಳನ್ನು ಅಭಿನಂದಿಸಲು ಒಕ್ಕಲಿಗರ ಸಂಘದ ಕೇಂದ್ರ ಕಚೇರಿ ಆವರಣದಲ್ಲಿ ಚುಂಚಶ್ರೀ ಬಳಗವು ಭಾನುವಾರ ಆಯೋಜಿಸಿದ್ದ ಸಮಾರಂಭದಲ್ಲಿ ಅವರು ಮಾತನಾಡಿದರು.

2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನ ಮುಖ್ಯಮಂತ್ರಿ ಅಭ್ಯರ್ಥಿ ತಾವೇ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗಾಗ ಹೇಳಿಕೆ ನೀಡುತ್ತಿದ್ದಾರೆ. ಅವರನ್ನೇ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಬಿಂಬಿಸಲು 75ನೇ ವರ್ಷದ ಹುಟ್ಟುಹಬ್ಬದ ಆಚರಣೆಗೆ ಸಿದ್ಧತೆಯೂ ನಡೆದಿದೆ. ಈ ಸಂದರ್ಭದಲ್ಲೇ ಒಕ್ಕಲಿಗರಿಗೆ ಮುಖ್ಯಮಂತ್ರಿಯಾಗುವ ಅವಕಾಶ ಎದುರಿನಲ್ಲಿದೆ ಎಂದು ಹೇಳುವ ಮೂಲಕ ಶಿವಕುಮಾರ್‌ ಅವರು ತಾವೂ ಮುಖ್ಯಮಂತ್ರಿ ಹುದ್ದೆಯ ಪ್ರಬಲ ಆಕಾಂಕ್ಷಿ ಎಂಬ ಸಂದೇಶವನ್ನು ಪರೋಕ್ಷವಾಗಿ ರವಾನಿಸಲು ಯತ್ನಿಸಿದರು.

‘ನಮ್ಮವ, ನಮ್ಮವ ಎಂದು ಹೇಳಿದರಷ್ಟೇ ಸಾಲದು. ದೊರಕಿದ ಅವಕಾಶವನ್ನು ಬಳಸಿಕೊಳ್ಳಬೇಕು. ಮುಂದಿನ ಚುನಾವಣೆಯಲ್ಲಿ ಆಶೀರ್ವದಿಸಬೇಕು. ನಾನು ಯಾವುದೇ ತಪ್ಪು ಮಾಡದಿದ್ದರೂ ತನಿಖೆ ಹೆಸರಿನಲ್ಲಿ ತಿಹಾರ್‌ ಜೈಲಿಗೆ ಕಳುಹಿಸಿದರು. ರಾಜಕೀಯ ಜೀವನದಲ್ಲಿ ಸಾಕಷ್ಟು ಏಳು–ಬೀಳುಗಳನ್ನು ಕಂಡಿದ್ದೇನೆ. ಯಾವುದಕ್ಕೂ ಜಗ್ಗುವುದಿಲ್ಲ’ ಎಂದರು.

ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ, ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌. ಅಶ್ವತ್ಥ ನಾರಾಯಣ ಉಪಸ್ಥಿತರಿದ್ದರು. ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್‌.ಆರ್‌. ಉಮಾಶಂಕರ್‌, ಒಕ್ಕಲಿಗರ ಸಂಘದ ‍ಪ್ರಧಾನ ಕಾರ್ಯದರ್ಶಿ ಕೋನಪ್ಪ ರೆಡ್ಡಿ, ನಿವೃತ್ತ ಐಎಫ್‌ಎಸ್‌ ಅಧಿಕಾರಿ ಗಾ.ನಂ. ಶ್ರೀಕಂಠಯ್ಯ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT