ಮಂಗಳವಾರ, ಮೇ 17, 2022
29 °C
ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಒತ್ತಾಯಿಸಿ ಪಾದಯಾತ್ರೆ

ಸಿ.ಎಂ. ನಿರ್ಧಾರಕ್ಕೆ ಸ್ವಾಗತ: ಜಯಮೃತ್ಯುಂಜಯ ಸ್ವಾಮೀಜಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿರಾ: ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2 ಎ ಮೀಸಲಾತಿ ನೀಡುವ ಕುರಿತು ಅಧ್ಯಯನ ವರದಿ ಪಡೆಯಲು ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಸರ್ಕಾರ ಸೂಚನೆ ನೀಡಿರುವುದು ಸಂತಸ ತಂದಿದೆ ಎಂದು ಲಿಂಗಾಯತ ಪಂಚಮಸಾಲಿ ಕೂಡಲಸಂಗಮ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.

ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2 ಎ ಮೀಸಲಾತಿ ನೀಡುವಂತೆ ಒತ್ತಾಯಿಸಿ ಬೆಂಗಳೂರಿನತ್ತ ಹೊರಟಿರುವ ಪಾದಯಾತ್ರೆ ಶನಿವಾರ ತಾಲ್ಲೂಕಿನ ತಾವರೆಕೆರೆ ಮೂಲಕ ತುಮಕೂರು ಜಿಲ್ಲೆ ಪ್ರವೇಶಿಸಿತು.

ತಾವರೆಕೆರೆ ಗ್ರಾಮದ ಸಮೀಪದ ಸರ್ಕಾರಿ ಸಾರ್ವಜನಿಕ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ವಿಶ್ರಾಂತಿ ಪಡೆದ ನಂತರ ಸ್ವಾಮೀಜಿ ಮಾತನಾಡಿದರು.

ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡುವ ಕುರಿತು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಅಧಿವೇಶನದಲ್ಲಿ ನೀಡಿರುವ ಹೇಳಿಕೆ ನೋವು ತಂದಿತ್ತು. ಆದರೆ ಮುಖ್ಯಮಂತ್ರಿ ಮನಸ್ಸು ಬದಲಾಯಿಸಿಕೊಂಡು ಹಿಂದುಳಿದ ವರ್ಗಗಳ ಆಯೋಗದಿಂದ ವರದಿ ಪಡೆದು ಕ್ರಮ ತೆಗೆದುಕೊಳ್ಳುವುದಾಗಿ ಹೇಳಿರುವುದು ಸಂತಸದ ವಿಷಯವಾಗಿದೆ ಎಂದರು.

ಸಮುದಾಯವನ್ನು 2 ಎ ಗೆ ಸೇರಿಸುವ ಆದೇಶದೊಂದಿಗೆ ಮರಳುತ್ತೇವೆ ಎಂದು ಭಕ್ತರಿಗೆ ಮಾತು ಕೊಟ್ಟಿದ್ದೇವೆ. ಅದನ್ನು ಪಡೆಯುವ ತನಕ ಮಠಕ್ಕೆ ಹಿಂದಿರುಗುವುದಿಲ್ಲ. ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.

ನಮ್ಮ ಬೇಡಿಕೆ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಿ ಗೆಜೆಟ್ ಪ್ರಕಟಣೆ ಹೊರಡಿಸಬೇಕು. ಎಲ್ಲಾ ಜಿಲ್ಲಾಧಿಕಾರಿಗಳಿಗೆ 2 ಎ ಪ್ರಮಾಣಪತ್ರ ನೀಡಲು ಆದೇಶ ಮಾಡಬೇಕು ಎಂದು ಆಗ್ರಹಿಸಿದರು.‌ ಹರಿಹರ ಪೀಠದ ವಚನಾನಂದ ಸ್ವಾಮೀಜಿ, ಪಂಚಮಸಾಲಿ ಸಮಾಜದ ರಾಷ್ಟ್ರೀಯ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು