ಶನಿವಾರ, ಮೇ 21, 2022
23 °C

ಹೈಕೋರ್ಟ್‌ಗೆ ಅಧಿಕಾರಿಗಳ ಹಾಜರು ಕಡ್ಡಾಯ: ರಾಜ್ಯ ಸರ್ಕಾರದ ಸುತ್ತೋಲೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಹೈಕೋರ್ಟ್‌ನಲ್ಲಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳ ಉಪಸ್ಥಿತಿ ಮತ್ತು ಖುದ್ದು ಹಾಜರಾತಿಗೆ ನ್ಯಾಯ‍ಪೀಠ ನೀಡುವ ನಿರ್ದೇಶನಗಳನ್ನು ಅಧಿಕಾರಿಗಳು ಕಡ್ಡಾಯವಾಗಿ ಪಾಲಿಸುವಂತೆ ಸುತ್ತೋಲೆ ಹೊರಡಿಸಲಾಗಿದೆ’ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.

‘ಧಾರವಾಡ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಗೆ (ಡಿಮ್ಹಾನ್ಸ್) ಮೂಲಸೌಕರ್ಯ ಒದಗಿಸಲು ಹಾಗೂ ನಿರ್ವಸಿತರಿಗೆ ವಸತಿ ಕಲ್ಪಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು’ ಎಂದು ಕೋರಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಋತುರಾಜ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಹೆಚ್ಚುವರಿ ಅಡ್ವೊಕೇಟ್ ಜನರಲ್ ಧ್ಯಾನ್ ಚಿನ್ನಪ್ಪ, ಈ ಕುರಿತಂತೆ ನ್ಯಾಯಪೀಠಕ್ಕೆ ವಿವರಣೆ ನೀಡಿ, ‘ಹೈಕೋರ್ಟ್ ವಿಚಾರಣೆಗೆ ಹಾಜರಾಗುವಂತೆ ನಿರ್ದೇಶಿಸಿದಾಗ ಅಧಿಕಾರಿಗಳು ತಪ್ಪದೇ ಹಾಜರಾಗಬೇಕು. ಇಲ್ಲದಿದ್ದಲ್ಲಿ ಅವರ ನಡವಳಿಕೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಲಿದೆ ಎಂದು ಎಲ್ಲ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿ ಸೇರಿದಂತೆ ಮುಖ್ಯಸ್ಥರಿಗೆ ನಿರ್ದೇಶಿಸಲಾಗಿದೆ’ ಎಂದು ತಿಳಿಸಿದರು.

‘ಈ ಸಂಬಂಧ ಸರ್ಕಾರದ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಅವರು ನವೆಂಬರ್ 9ರಂದು ಎಲ್ಲಾ ಇಲಾಖಾ ಮುಖಸ್ಥರಿಗೆ ನಿರ್ದೇಶಿಸಿ ಸುತ್ತೋಲೆ ಹೊರಡಿಸಿದ್ದಾರೆ. ಕೋರ್ಟ್ ವಿಚಾರದಲ್ಲಿ ಅಧಿಕಾರಿಗಳು ಗಂಭೀರವಾಗಿ ನಡೆದುಕೊಳ್ಳುವಂತೆ ನೋಡಿಕೊಳ್ಳಲಾಗುವುದು’ ಎಂದು ಭರವಸೆ ನೀಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು