ಸೋಮವಾರ, ಆಗಸ್ಟ್ 8, 2022
24 °C

ಪ್ರಶ್ನೆ ಪತ್ರಿಕೆ ಸೋರಿಕೆ ಜಾಮೀನುರಹಿತ ಅಪರಾಧವಾಗಿ ಪರಿಗಣನೆ: ಅಶ್ವತ್ಥನಾರಾಯಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡುವುದನ್ನು ಜಾಮೀನುರಹಿತ ಅಪರಾಧ ಎಂಬುದಾಗಿ ಪರಿಗಣಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದರು.

ಬೆಂಗಳೂರು ಉತ್ತರ ಮತ್ತು ಕಲಬುರಗಿ ವಿಶ್ವವಿದ್ಯಾಲಯಗಳ ಪದವಿ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿರುವ ಕುರಿತು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಅವರು, ‘ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳ ತಡೆಗೆ ಬಿಗಿ ಕ್ರಮಗಳನ್ನು ಜಾರಿಗೊಳಿಸಲಾಗುವುದು. ಇಂತಹ ಕೃತ್ಯಗಳಲ್ಲಿ ಭಾಗಿಯಾದವರಿಗೆ ಜಾಮೀನು ದೊರಕದಂತೆ ಕಠಿಣ ಕಾನೂನು ತರಲಾಗುವುದು’ ಎಂದರು.

ಪ್ರಶ್ನೆ ಪತ್ರಿಕೆಗಳ ಸೋರಿಕೆ ಹಲವು ವರ್ಷಗಳಿಂದ ನಡೆಯುತ್ತಿದೆ. ಈಗಲೂ ನಡೆಯುತ್ತಿದೆ. ಮುಂದೆ ಇಂತಹ ಕೃತ್ಯಗಳು ನಡೆಯದಂತೆ ಕಟ್ಟೆಚ್ಚರ ವಹಿಸಲಾಗುವುದು ಎಂದು ಹೇಳಿದರು.

ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಆರೋಪ ಕುರಿತ ತನಿಖೆಯನ್ನು ಸಿಸಿಬಿ ಪೊಲೀಸರಿಗೆ ವರ್ಗಾವಣೆ ಮಾಡಲಾಗಿದೆ. ತನಿಖೆಯಲ್ಲಿ ಯಾವುದೇ ರೀತಿಯ ಹಸ್ತಕ್ಷೇಪ ಮಾಡುವುದಿಲ್ಲ. ಯಾರೇ ಅಕ್ರಮದಲ್ಲಿ ಭಾಗಿಯಾಗಿದ್ದರೂ ಸರ್ಕಾರ ಕ್ರಮ ಜರುಗಿಸಲಿದೆ ಎಂದರು.

ಮಾರ್ಗಸೂಚಿಯಂತೆ ಪರೀಕ್ಷೆ: ಸಿಇಟಿ ಪರೀಕ್ಷೆ ನಡೆಯಲಿದೆ. ಹಿಜಾಬ್ ಧರಿಸಲು ಅವಕಾಶ ಸೇರಿದಂತೆ ಎಲ್ಲವೂ ಮಾರ್ಗಸೂಚಿ ಪ್ರಕಾರವೇ ನಿರ್ಧಾರ ಆಗಲಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಬ್ರಿಟನ್ ಮತ್ತು ದಾವೋಸ್ ಪ್ರವಾಸ ಯಶಸ್ವಿಯಾಗಿದೆ. ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಪಾಲುದಾರಿಕೆ ವಹಿಸಲು ಹಲವು ರಾಷ್ಟ್ರಗಳು ಆಸಕ್ತಿ ತೋರಿವೆ. ಜೂನ್ 9ರಂದು ಬ್ರಿಟನ್ ನ 21 ವಿಶ್ವವಿದ್ಯಾಲಯಗಳ ಕುಲಪತಿಗಳ ನಿಯೋಗ ಕರ್ನಾಟಕಕ್ಕೆ ಬರುತ್ತಿದೆ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು