ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಗ್ರೀವಾಜ್ಞೆ ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಅರ್ಜಿ

ಗೋಹತ್ಯೆ ನಿಷೇಧ ತಿದ್ದುಪಡಿ ಕಾಯ್ದೆ ಕುರಿತ ವಿಚಾರಸಂಕಿರಣದಲ್ಲಿ ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲಗೌಡ ಹೇಳಿಕೆ
Last Updated 10 ಜನವರಿ 2021, 15:03 IST
ಅಕ್ಷರ ಗಾತ್ರ

ಬೆಂಗಳೂರು: ‘ಗೋಹತ್ಯೆ ನಿಷೇಧಿಸಿ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಸುಗ್ರೀವಾಜ್ಞೆ ಸಿಂಧುವಲ್ಲ. ಅದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗುವುದು’ ಎಂದು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲಗೌಡ ಅವರು ಭಾನುವಾರ ಹೇಳಿದರು.

ಕರ್ನಾಟಕ ರಾಜ್ಯ ರೈತ ಸಂಘ ಆಯೋಜಿಸಿದ್ದ ‘ಗೋಹತ್ಯೆ ನಿಷೇಧ ತಿದ್ದುಪಡಿ ಕಾಯ್ದೆ ರೈತರ ಪಾಲಿಗೆ ಮರಣ ಶಾಸನ ಆಗಲಿದೆಯೆ?’ ಎಂಬ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದ ಅವರು, ‘ಸಂವಿಧಾನದತ್ತವಾಗಿರುವ ಮೂಲಭೂತ ಹಕ್ಕುಗಳು, ನಿರ್ದೇಶಕ ತತ್ವಗಳ ವಿರುದ್ಧವಾಗಿ ಸುಗ್ರೀವಾಜ್ಞೆ ಹೊರಡಿಸಲಾಗಿದೆ. ಸಂವಿಧಾನವನ್ನು ಮೀರಿ ರಾಜ್ಯಪಾಲರು ಸುಗ್ರೀವಾಜ್ಞೆಗೆ ಅಂಕಿತ ಹಾಕಿದ್ದಾರೆ. ನ್ಯಾಯಾಂಗದ ಪರಿಶೀಲನೆಯಲ್ಲಿ ಅದು ಊರ್ಜಿತವಾಗದು’ ಎಂದು ಅಭಿಪ್ರಾಯಪಟ್ಟರು.

‘ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಮಾತ್ರ ಯಾವುದೇ ಕಾಯ್ದೆಗೆ ಸುಗ್ರೀವಾಜ್ಞೆ ಮೂಲಕ ತಿದ್ದುಪಡಿಗಳನ್ನು ಜಾರಿಗೊಳಿಸಬಹುದು. ರಾಜ್ಯದಲ್ಲಿ ಅಂತಹ ಪರಿಸ್ಥಿತಿಯೂ ಇಲ್ಲ. ವಿಧಾನಸಭೆಯಲ್ಲಿ ಈ ಮಸೂದೆಗೆ ಅಂಗೀಕಾರ ದೊರಕಿದೆ. ಆದರೆ, ವಿಧಾನ ಪರಿಷತ್‌ನಲ್ಲಿ ಒಪ್ಪಿಗೆ ಸಿಗದಿರಬಹುದು ಎಂದು ಸುಗ್ರೀವಾಜ್ಞೆ ಹೊರಡಿಸಲಾಗಿದೆ’ ಎಂದು ಹೇಳಿದರು.

‘ಜನವಿರೋಧಿ ಕಾನೂನುಗಳು ಅಸ್ತಿತ್ವದಲ್ಲಿ ಉಳಿಯಲು ಸಾಧ್ಯವೇ ಇಲ್ಲ. ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗಗಳಿಗಿಂತಲೂ ಜನರ ಅಧಿಕಾರವೇ ದೊಡ್ಡದು. ಜನರು ಒಗ್ಗಟ್ಟಾಗಿ ವಿರೋಧಿಸಿದರೆ ಕೆಟ್ಟ ಕಾಯ್ದೆಗಳು ಉಳಿಯದು. ಗೋಹತ್ಯೆ ನಿಷೇಧ ಸುಗ್ರೀವಾಜ್ಞೆ ಹಾಗೂ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಸಂಬಂಧಿ ತಿದ್ದುಪಡಿ ಕಾಯ್ದೆಗಳ ಕುರಿತು ಪಂಚಾಯಿತಿಗಳ ಮಟ್ಟದಲ್ಲಿ ಜನಜಾಗೃತಿ ಅಭಿಯಾನ ನಡೆಸಬೇಕು’ ಎಂದು ಗೋಪಾಲಗೌಡ ಸಲಹೆ ನೀಡಿದರು.

ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಜೆ.ವೀರಸಂಗಯ್ಯ ಅವರು, ‘ಹೈನುಗಾರಿಕೆಯನ್ನು ನಾಶ ಮಾಡಲು ರಾಜ್ಯ ಸರ್ಕಾರ ಹೊರಟಿದೆ. ಅದರ ಭಾಗವಾಗಿಯೇ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೊಳಿಸಲಾಗಿದೆ. ರೈತರ ಸಂಪೂರ್ಣ ನಾಶಕ್ಕೆ ಬಿಜೆಪಿ ಸರ್ಕಾರ ಪ್ರಯತ್ನಿಸುತ್ತಿದೆ’ ಎಂದರು.

ಕರ್ನಾಟಕ ಜನಶಕ್ತಿಯ ಗೌರವಾಧ್ಯಕ್ಷೆ ಸಿರಿ ಗೌರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅಧ್ಯಕ್ಷತೆ ವಹಿಸಿದ್ದರು. ‘ನಮ್ಮೂರ ಭೂಮಿ ನಮಗಿರಲಿ’ ಆಂದೋಲನದ ವಿ. ಗಾಯತ್ರಿ ವಿಷಯ ಮಂಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT