ಭಾನುವಾರ, ಸೆಪ್ಟೆಂಬರ್ 26, 2021
21 °C

ರಾಷ್ಟ್ರೀಯ ಪೋಷಣೆ ಅಭಿಯಾನದಲ್ಲಿ ರಾಜ್ಯಕ್ಕೆ 2ನೇ ಸ್ಥಾನ: ಶಶಿಕಲಾ ಜೊಲ್ಲೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ರಾಷ್ಟ್ರೀಯ ಪೋಷಣೆ ಅಭಿಯಾನದ ಅನುದಾನದ ಬಳಕೆ ಹಾಗೂ ಒಟ್ಟು ಸಾಧನೆಯಲ್ಲಿ ಇಡೀ ದೇಶದಲ್ಲಿಯೇ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಮುಂದಿನ ತ್ರೈಮಾಸಿಕ ಸಭೆಯ ವೇಳೆಗೆ ಮೊದಲ ಸ್ಥಾನದಲ್ಲಿರುವಂತೆ ನೋಡಿಕೊಳ್ಳಬೇಕು’ ಇಲಾಖೆಯ ಅಧಿಕಾರಿಗಳಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಗುರಿ ನೀಡಿದ್ದಾರೆ.

ಪೋಷಣೆ ಅಭಿಯಾನದ ಪ್ರಗತಿ ಪರಿಶೀಲನೆ ಕುರಿತಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಜಿಲ್ಲಾ ಉಪನಿರ್ದೇಶಕರ ಜೊತೆಗೆ ಅವರು ಗುರುವಾರ ವಿಡಿಯೊ ಸಂವಾದ ನಡೆಸಿದರು.

‘ಪೋಷಣೆ ಟ್ರ್ಯಾಕರ್ ಅಳವಡಿಕೆ, ಸಮುದಾಯ ಆಧಾರಿತ ಕಾರ್ಯಕ್ರಮಗಳು, ತರಬೇತಿ ಕಾರ್ಯಕ್ರಮ ಕುರಿತಂತೆ ಅಧಿಕಾರಿಗಳಿಂದ ಸಚಿವರು ಮಾಹಿತಿ ಪಡೆದರು. ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಮೇಲ್ವಿಚಾರಕಿಯರಿಗೆ ನೀಡಿರುವ ಸ್ಮಾರ್ಟ್ ಫೋನ್ ಸಮಸ್ಯೆ ಕುರಿತು ಅಧಿಕಾರಿಗಳು ಸಚಿವರ ಗಮನಕ್ಕೆ ತಂದರು. ಸಮಸ್ಯೆಯ ಬಗ್ಗೆ ಲಿಖಿತ ರೂಪದಲ್ಲಿ ಆಯುಕ್ತರಿಗೆ ಮಾಹಿತಿ ನೀಡಿದರೆ  ಸಂಬಂಧಪಟ್ಟ ಕಂಪನಿಗಳ ಜೊತೆಗೆ ಮಾತನಾಡಿ, ಸಮಸ್ಯೆ ಬಗೆಹರಿಸಲಾಗುವುದು ಎಂದೂ ಅವರು ಭರವಸೆ ನೀಡಿದರು.

ಯುವತಿಗೆ ರಕ್ಷಣೆ ಕೊಡಲು ಸಿದ್ಧ: ‘ಶಾಸಕ ರಮೇಶ ಜಾರಕಿಹೊಳಿ ಅವರಿಗೆ ಸಂಬಂಧಿಸಿದ್ದು ಎನ್ನಲಾದ ಸಿ.ಡಿ ವಿಚಾರವನ್ನು ಮುಖ್ಯಮಂತ್ರಿ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದಾರೆ. ಅಲ್ಲದೆ, ಸಿ.ಡಿಯಲ್ಲಿರುವ ಯುವತಿಗೆ ಸೂಕ್ತ ಭದ್ರತೆ ನೀಡುವುದಾಗಿ ಮುಖ್ಯಮಂತ್ರಿ ಮತ್ತು ಗೃಹ ಸಚಿವರು ಈಗಾಗಲೇ ಹೇಳಿದ್ದಾರೆ. ನಮ್ಮ ಇಲಾಖೆಯಿಂದಲೂ ರಕ್ಷಣೆ ಬಯಸಿದರೆ ಕೊಡಲು ವ್ಯವಸ್ಥೆ ಮಾಡಲಾಗುವುದು’ ಎಂದು ಜೊಲ್ಲೆ ಹೇಳಿದರು.

ವಿಕಾಸಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಸಿ.ಡಿ ವಿಚಾರದಲ್ಲಿ ಕೂಲಂಕಷವಾಗಿ ಹಾಗೂ ನಿಷ್ಪಕ್ಷಪಾತವಾಗಿ ತನಿಖೆ ನಡೆಯುತ್ತಿದೆ. ಹೀಗಾಗಿ, ಯಾರು ತಪ್ಪಿತಸ್ಥರು ಅನ್ನೋದು ಗೊತ್ತಾಗಲಿದೆ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು