ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುಪಿ ಜಿಲ್ಲಾಧಿಕಾರಿ ಮೇಲೆ ಹಲ್ಲೆ

Last Updated 2 ಏಪ್ರಿಲ್ 2017, 20:07 IST
ಅಕ್ಷರ ಗಾತ್ರ

ಉಡುಪಿ: ಅಕ್ರಮ ಮರಳು ಅಡ್ಡೆ ಮೇಲೆ ದಾಳಿ ನಡೆಸಿದ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌, ಕುಂದಾಪುರದ ಉಪವಿಭಾಗಾಧಿಕಾರಿ ಶಿಲ್ಪಾ ನಾಗ್‌ ಹಾಗೂ ಸಿಬ್ಬಂದಿ ಮೇಲೆ ದುಷ್ಕರ್ಮಿಗಳು ಭಾನುವಾರ ತಡ ರಾತ್ರಿ ಹಲ್ಲೆ ನಡೆಸಿದ್ದಾರೆ.

ತಲ್ಲೂರು ಸುತ್ತಮುತ್ತ ಅಕ್ರಮ ಮರಳುಗಾರಿಕೆ ನಡೆಯುತ್ತಿರುವ ಬಗ್ಗೆ ಮಾಹಿತಿ ಸಂಗ್ರಹಿಸಿದ್ದ ಜಿಲ್ಲಾಧಿಕಾರಿ ಅವರು, ತಮ್ಮ ಹಾಗೂ ಉಪವಿಭಾಗಾಧಿಕಾರಿ ನೇತೃತ್ವದಲ್ಲಿ ಎರಡು ವಿಶೇಷ ತಂಡ ರಚನೆ ಮಾಡಿದ್ದರು. ಗಣಿ ಮತ್ತು ಭೂವಿಜ್ಞಾನ ಇಲಾಖೆ, ಕಂದಾಯ ಇಲಾಖೆ ಅಧಿಕಾರಿಗಳೊಂದಿಗೆ ಅವರು  ಭಾನುವಾರ ಮಧ್ಯರಾತ್ರಿ 12 ಗಂಟೆ ಸುಮಾರಿಗೆ ದಾಳಿ ನಡೆಸಿದಾಗ ಭಾರಿ ಸಂಖ್ಯೆಯಲ್ಲಿದ್ದ ದಂಧೆಕೋರರು ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದರು. ಜಿಲ್ಲಾಧಿಕಾರಿ ಅವರಿಗೂ ಸಹ ಸಣ್ಣಪುಟ್ಟ ಗಾಯಗಳಾಗಿವೆ. ಈ ಬಗ್ಗೆ ಅವರು ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ಕೊಲೆ ಯತ್ನದ ದೂರು ದಾಖಲಿಸಿದ್ದಾರೆ.

ಜಿಲ್ಲೆಯಲ್ಲಿ ಎಗ್ಗಿಲ್ಲದೆ ಅಕ್ರಮ ಮರಳುಗಾರಿಕೆ ನಡೆಯುತ್ತಿರುವ ಬಗ್ಗೆ ಜಿಲ್ಲಾಪಂಚಾಯತ್‌ ಸದಸ್ಯರು ಸಾಮಾನ್ಯ ಸಭೆಯಲ್ಲಿ ಆರೋಪ ಮಾಡಿದ್ದರು. ಕರಾವಳಿ ನಿಯಂತ್ರಣ ವಲಯದಲ್ಲಿ ಮರಳುಗಾರಿಕೆ ನಿಷೇಧಿಸಿ ಚೆನ್ನೈನ ಹಸಿರುಪೀಠ ಈ ಹಿಂದೆ ಆದೇಶ ಹೊರಡಿಸಿತ್ತು.

ಪ್ರಕರಣದ ವಿಚಾರಣೆ ನಡೆದ ನಂತರ ಹಲವು ಕಠಿಣ ಷರತ್ತುಗಳನ್ನು ವಿಧಿಸಿ ಮರಳುಗಾರಿಕೆಗೆ ಅವಕಾಶ ನೀಡಲಾಗಿತ್ತು. ಆದರೂ ಸಹ ಸಿಆರ್‌ ಝೆಡ್‌ ವ್ಯಾಪ್ತಿಯಲ್ಲಿ ಈವರೆಗೂ ಮರಳುಗಾರಿಕೆ ಆರಂಭವಾಗಿಲ್ಲ. ಕರಾವಳಿ ನಿಯಂತ್ರಣೇತರ ವಲಯದಲ್ಲಿ ಸಹ ಕೇವಲ 22 ಬ್ಲಾಕ್‌ಗಳಲ್ಲಿ ಮಾತ್ರ ಮರಳುಗಾರಿಕೆ ನಡೆಯುತ್ತಿದೆ. ಆದ್ದರಿಂದ ಜಿಲ್ಲೆಯಲ್ಲಿ ಮರಳಿನ ಅಭಾವ ತಲೆದೋರಿದೆ. ಪರಿಸ್ಥಿತಿಯ ಲಾಭ ಪಡೆಯಲು ಯತ್ನಿಸಿದ್ದ ಅಕ್ರಮ ಮರಳುದಂಧೆಕೋರರು ಕೆಲವು ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT