ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳೆನಷ್ಟ ಪರಿಹಾರ ತ್ವರಿತ ವಿತರಣೆಗೆ ತಾಕೀತು

ಕೃಷಿ ಸಾಲ ಮನ್ನಾಕ್ಕೆ ಆಗ್ರಹಿಸಿ ರೈತ ಸಂಘದಿಂದ ಪ್ರತಿಭಟನಾ ಮೆರವಣಿಗೆ
Last Updated 18 ಏಪ್ರಿಲ್ 2017, 7:26 IST
ಅಕ್ಷರ ಗಾತ್ರ
ರಾಮನಗರ: ಕೃಷಿ ಸಾಲ ಮನ್ನಾ ಹಾಗೂ ರೈತರಿಗೆ ನೀಡುವ ಬೆಳೆ ನಷ್ಟ ಪರಿಹಾರ ತ್ವರಿತವಾಗಿ ವಿತರಿಸುವಂತೆ ಆಗ್ರಹಿಸಿ ರೈತ ಸಂಘ ಹಾಗೂ ಹಸಿರುಸೇನೆ ನೇತೃತ್ವದಲ್ಲಿ ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಯಿತು.
 
ಕಂದಾಯ ಭವನದ ಎದುರು ಸಮಾವೇಶಗೊಂಡ ಪ್ರತಿಭಟನಾಕಾರರು ಸರ್ಕಾರಗಳ ವಿರುದ್ಧ ಘೋಷಣೆ ಕೂಗಿದರು. ಬಳಿಕ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಅಲ್ಲಿಯೂ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. 
 
‘ರಾಜ್ಯವು ಭೀಕರ ಬರಗಾಲಕ್ಕೆ ತುತ್ತಾಗಿದ್ದರೂ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ರೈತರ ಸಂಕಷ್ಟಕ್ಕೆ ಸ್ಪಂದಿಸುತ್ತಿಲ್ಲ. ಸಾಲ ಮನ್ನಾ ವಿಚಾರದಲ್ಲಿ ಒಬ್ಬರನ್ನೊಬ್ಬರು ದೂಷಿಸುತ್ತಾ ಕಾಲಹರಣ ಮಾಡುತ್ತಿವೆ’ ಎಂದು ಪ್ರತಿಭಟನಾಕಾರರಯ ದೂರಿದರು.
 
‘ರಾಜ್ಯದ ಎಲ್ಲ ರಾಷ್ಟ್ರೀಕೃತ ಹಾಗೂ ಸಹಕಾರಿ ಬ್ಯಾಂಕುಗಳಲ್ಲಿ ಇರುವ ರೈತರ ಸಾಲವನ್ನು ಮನ್ನಾ ಮಾಡಬೇಕು. ಇಲ್ಲವಾದಲ್ಲಿ ಸರ್ಕಾರದ ವಿರುದ್ಧ ಹೋರಾಟ ತೀವ್ರಗೊಳಿಸಲಾಗುವುದು’ ಎಂದು ಎಚ್ಚರಿಸಿದರು.
 
‘ಬರಗಾಲಕ್ಕೆ ತುತ್ತಾಗಿರುವ ಪ್ರದೇಶಗಳ ರೈತರಿಗೆ ವೈಜ್ಞಾನಿಕ ಬೆಳೆ ಪರಿಹಾರ ನೀಡಬೇಕು. ಕೃಷಿ ಪಂಪ್‌ಸೆಟ್‌ಗಳಿಗೆ ಯಾವುದೇ ಕಾರಣಕ್ಕೂ ವಿದ್ಯುತ್‌ ಮೀಟರ್ ಅಳವಡಿಸಬಾರದು. ವಿದ್ಯುತ್ ಕಣ್ಣಾಮುಚ್ಚಾಲೆ ತಪ್ಪಿಸಿ ಸಮರ್ಪಕ ವಿದ್ಯುತ್ ಪೂರೈಸಬೇಕು.
 
ಮೇಕೆದಾಟು ಯೋಜನೆ ಸಮರ್ಪಕವಾಗಿ ಕಾರ್ಯರೂಪಕ್ಕೆ ತಂದು, ತ್ವರಿತವಾಗಿ ಕಾಮಗಾರಿ ಪ್ರಾರಂಭಿಸಬೇಕು. ಎತ್ತಿನಹೊಳೆ ಯೋಜನೆ ಕಾಮಗಾರಿ ಪ್ರಾರಂಭಿಸಬೇಕು’ ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
 
‘ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ ಮೇವು ಬ್ಯಾಂಕ್ -ಗೋಶಾಲೆ ತೆರೆಯಬೇಕು. ಯಾವುದೇ ಬ್ಯಾಂಕುಗಳು ರೈತರಿಗೆ ಸಾಲ ಮರು ಪಾವತಿಸುವಂತೆ ಕಿರುಕುಳ ನೀಡಬಾರದು. ಎಪಿಎಂಸಿಯಲ್ಲಿ ರೈತರಿಂದ ಕಮಿಷನ್‌ ವಸೂಲಿ ಮಾಡುವುದನ್ನು ನಿಲ್ಲಿಸಬೇಕು. ಜಿಲ್ಲೆಯಲ್ಲಿ ಅನಧಿಕೃತವಾಗಿ ಹೆಚ್ಚಿರುವ ಮರಳು ಹಾಗೂ ಕಲ್ಲು ಗಣಿಕಾರಿಕೆಗೆ ಬ್ರೇಕ್ ಹಾಕಬೇಕು. ರೈತರ ಜಮೀನುಗಳಲ್ಲಿ ಸರ್ವೇ ಕಾರ್ಯ ಬಿರುಸಿನಿಂದ ನಡೆಯಬೇಕು’ ಎಂದು ಒತ್ತಾಯಿಸಿದರು.
 
ಈ ಬೇಡಿಕೆಗಳು ಈಡೇರದಿದ್ದಲ್ಲಿ ಮುಂದಿನ ದಿನಗಳಲ್ಲಿ ಹೋರಾಟ ತೀವ್ರಗೊಳಿಸುವುದಾಗಿ ಎಚ್ಚರಿಸಿದರು. ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಉಪಾಧ್ಯಕ್ಷೆ ಅನಸೂಯಮ್ಮ, ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಸ್. ಲಕ್ಷ್ಮಣಸ್ವಾಮಿ, ಕಾರ್ಯಾಧ್ಯಕ್ಷ ಸಂಪತ್ ಕುಮಾರ್, ಕಾರ್ಯದರ್ಶಿ ಬೈರೇಗೌಡ, ಮುಖಂಡರಾದ ಎಂ.ಡಿ. ಶಿವಕುಮಾರ್, ಚಲುವಯ್ಯ, ಅನಂತ ರಾಮಪ್ರಸಾದ್, ಗೋವಿಂದರಾಜು, ಮಾರಕ್ಕ, ಸುಜೀವನ್‌ಕುಮಾರ್,  ಉಮೇಶ್, ಜಗದೀಶ್, ದುಂಡಪ್ಪ, ಮೃತ್ಯುಂಜಯ, ಅಮ್ಮಳ್ಳಿದೊಡ್ಡಿ ರಮೇಶ್‌, ರಾಜು ಇತರರು ಪಾಲ್ಗೊಂಡಿದ್ದರು. 
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT