ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಂಬಾಕು ಸೇವನೆ ಸ್ವಯಂಪ್ರೇರಿತ ಅಪರಾಧ

ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಕೆ.ವಿ.ತ್ರಿಲೋಕಚಂದ್ರ ಅಭಿಪ್ರಾಯ
Last Updated 1 ಜೂನ್ 2017, 8:52 IST
ಅಕ್ಷರ ಗಾತ್ರ

ಕೋಲಾರ: ‘ತಂಬಾಕು ಉತ್ಪನ್ನಗಳ ಸೇವನೆಯು ಸ್ವಯಂಪ್ರೇರಿತ ಅಪರಾಧ’ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ತ್ರಿಲೋಕಚಂದ್ರ ಅಭಿಪ್ರಾಯಪಟ್ಟರು.

ಜಿಲ್ಲಾಡಳಿತವು ನಗರದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ತಂಬಾಕು ಬೆಳೆಯುವ ಮತ್ತು ತಂಬಾಕು ಉತ್ಪನ್ನಗಳನ್ನು ಬಳಸುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಇದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮವಾಗುತ್ತಿದೆ’ ಎಂದು ಹೇಳಿದರು.

‘ತಂಬಾಕು ಉತ್ಪನ್ನಗಳ ತಯಾರಿಕೆಯಿಂದ 60 ಲಕ್ಷಕ್ಕೂ ಹೆಚ್ಚು ಮಂದಿ ಜೀವನ ನಡೆಸುತ್ತಿದ್ದಾರೆ. ಈ ಉತ್ಪನ್ನಗಳನ್ನು ಸೇವಿಸುವವರನ್ನು ಎಚ್ಚರಿಸುವ ದೃಷ್ಟಿಯಿಂದ ಕಂಪೆನಿಯವರೇ ಉತ್ಪನ್ನಗಳ ಮೇಲೆ ಎಚ್ಚರಿಕೆ ಸಂದೇಶ ಹಾಕಿರುತ್ತಾರೆ. ಆದರೂ ತಂಬಾಕು ಉತ್ಪನ್ನಗಳನ್ನು ಸೇವಿಸುವವರ ಸಂಖ್ಯೆ ಕಡಿಮೆಯಾಗಿಲ್ಲ’ ಎಂದರು.

‘ತಂಬಾಕು ಉತ್ಪನ್ನಗಳ ಸೇವನೆಯಿಂದ ವಿವಿಧ ಕಾಯಿಲೆಗಳಿಗೆ ತುತ್ತಾಗುವ ವ್ಯಕ್ತಿಗಳ ಆರೋಗ್ಯ ಸುಧಾರಣೆಗಾಗಿ ಸರ್ಕಾರ ಸಾವಿರಾರು ಕೋಟಿ ಹಣ ವೆಚ್ಚ ಮಾಡುತ್ತಿದೆ. ಜನ ದುಶ್ಚಟಗಳಿಂದ ದೂರ ಉಳಿದಿದ್ದರೆ ಆ ಹಣ ಸಮಾಜದ ಅಭಿವೃದ್ಧಿಗೆ ಬಳಕೆಯಾಗಿ ಸಾಕಷ್ಟು ಉಪಯೋಗವಾಗುತ್ತಿತ್ತು.

ಸಿಗರೇಟ್‌, ಬೀಡಿಯಂತಹ ಉತ್ಪನ್ನಗಳನ್ನು ಬಳಸುವವರ ಜತೆಗೆ ಅವರ ಅಕ್ಕಪಕ್ಕದ ಜನರ ಆರೋಗ್ಯವೂ ಹಾಳಾಗುತ್ತದೆ. ಆದ್ದರಿಂದ ಧೂಮಪಾನಿಗಳು ಬೇರೆಯವರ ಆರೋಗ್ಯದ ಬಗ್ಗೆ ಆಲೋಚಿಸಬೇಕು’ ಎಂದು ಸಲಹೆ ನೀಡಿದರು.

ಆತಂಕಕಾರಿ ಬೆಳವಣಿಗೆ: ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಗುರುರಾಜ ಜಿ.ಶಿರೋಳ್ ಮಾತನಾಡಿ, ‘ತಂಬಾಕು ಉತ್ಪನ್ನಗಳ ಸೇವನೆಯಿಂದ ಆರೋಗ್ಯದ ಮೇಲೆ ಆಗುವ ದುಷ್ಪರಿಣಾಮಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು.

18 ವರ್ಷದಿಂದ 25 ವರ್ಷದೊಳಗಿನ ಯುವಕರು ತಂಬಾಕು ಉತ್ಪನ್ನಗಳಿಗೆ ಆಕರ್ಷಿತರಾಗಿ ತಪ್ಪು ದಾರಿ ಹಿಡಿಯುತ್ತಿರುವುದು ಆತಂಕಕಾರಿ ಬೆಳವಣಿಗೆ’ ಎಂದು ಬೇಸರ ವ್ಯಕ್ತಪಡಿಸಿದರು.

‘ತಂಬಾಕು ಉತ್ಪನ್ನಗಳ ಸೇವನೆಯಿಂದ 60 ರೀತಿಯ ಮಾರಕ ಕಾಯಿಲೆಗಳು ಮತ್ತು ಭಯಾನಕ ಕ್ಯಾನ್ಸರ್ ರೋಗಕ್ಕೆ ತುತ್ತಾಗುವ ಸಂಭವವಿದೆ. ವಿಶ್ವದಲ್ಲಿ ಅತಿ ಹೆಚ್ಚು ಜನ ಅಕಾಲಿಕವಾಗಿ ಮೃತಪಡುತ್ತಿರುವುದರಕ್ಕೆ ತಂಬಾಕು ಉತ್ಪನ್ನಗಳ ಸೇವನೆ ಪ್ರಮುಖ ಕಾರಣ’ ಎಂದು ಕಿವಿಮಾತು ಹೇಳಿದರು.

‘ಜಗತ್ತಿನಲ್ಲಿ ತಂಬಾಕು ಉತ್ಪನ್ನಗಳ ಸೇವನೆಯಿಂದ ಶೇ 90ರಷ್ಟು ಮಂದಿ ಗಂಟಲು, ಶ್ವಾಸಕೋಶ ಸಂಬಂಧಿ ತೊಂದರೆಗಳಿಗೆ ಬಲಿಯಾಗುತ್ತಿದ್ದಾರೆ. ದೇಶದಲ್ಲಿ ಪ್ರತಿನಿತ್ಯ 2,000 ಮಂದಿ ಹಾಗೂ ವರ್ಷದಲ್ಲಿ 10 ಲಕ್ಷ ಮಂದಿ ತಂಬಾಕು ಉತ್ಪನ್ನಗಳ ಸೇವನೆಯಿಂದ ಮೃತಪಡುತ್ತಿದ್ದಾರೆ’ ಎಂದು ಕಳವಳ ವ್ಯಕ್ತಪಡಿಸಿದರು.

ಅಭಿವೃದ್ಧಿಗೆ ಅಪಾಯಕಾರಿ: ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ಸರ್ವೇಕ್ಷಣಾಧಿಕಾರಿ ಡಾ. ವಿಜಯಕುಮಾರಿ ಮಾತನಾಡಿ, ‘ತಂಬಾಕು ಉತ್ಪನ್ನಗಳು ದೇಶದ ಅಭಿವೃದ್ದಿಗೆ ಅಪಾಯಕಾರಿ. ಸಾರ್ವಜನಿಕ ಸ್ಥಳಗಳಲ್ಲಿ ಈ ಉತ್ಪನ್ನಗಳ ಬಳಕೆ ನಿಯಂತ್ರಿಸಲು ಸರ್ಕಾರ 2013ರಲ್ಲಿ ಸಿಗರೇಟ್ ಮತ್ತು ಇತರೆ ತಂಬಾಕು ಉತ್ಪನ್ನಗಳ ಕಾಯ್ದೆ (ಕೋಟ್ಪಾ) ಜಾರಿಗೆ ತಂದಿದೆ. ಜತೆಗೆ ಕೋಲಾರ ಸೇರಿದಂತೆ ರಾಜ್ಯದ 18 ಜಿಲ್ಲೆಗಳಲ್ಲಿ ಅಧಿಕಾರಿಗಳನ್ನು ನೇಮಿಸಿದೆ’ ಎಂದು ಮಾಹಿತಿ ನೀಡಿದರು.

‘ತಂಬಾಕಿನಲ್ಲಿರುವ ನಿಕೋಟಿನ್ ಎಂಬ ಅಂಶವು ದೇಹಕ್ಕೆ ಅಗತ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಪೂರೈಕೆಯಾದರೆ ವಿವಿಧ ಮಾರಕ ರೋಗಗಳಿಗೆ ಬಲಿಯಾಗಬೇಕಾಗುತ್ತದೆ. ಉತ್ತರ ಕರ್ನಾಟಕದಲ್ಲಿ ಸಾಕಷ್ಟು ಮಂದಿ ತಂಬಾಕು ಬೆಳೆಯುವ ಮೂಲಕ ಜೀವನ ನಡೆಸುತ್ತಿದ್ದಾರೆ. ಇದನ್ನು ನಿಯಂತ್ರಿಸಲು ಗ್ರಾಹಕರ ಸಂಖ್ಯೆ ಕಡಿಮೆ ಮಾಡಬೇಕು’ ಎಂದರು.

‘ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳ ಬಳಕೆ ನಿಯಂತ್ರಿಸುವ ಉದ್ದೇಶಕ್ಕೆ ವಿಶೇಷ ಘಟಕ ಆರಂಭಿಸಲು ಚಿಂತಿಸಲಾಗಿದೆ. ಕೋಟ್ಪಾ ಕಾಯ್ದೆ ಉಲ್ಲಂಘನೆ ಸಂಬಂಧ ಜಿಲ್ಲೆಯಲ್ಲಿ ಐದು ತಿಂಗಳಲ್ಲಿ 521 ಪ್ರಕರಣ ದಾಖಲಿಸಲಾಗಿದೆ’ ಎಂದು ಮಾಹಿತಿ ನೀಡಿದರು.

ಜಾಗೃತಿ ಜಾಥಾ: ತಂಬಾಕು ಉತ್ಪನ್ನಗಳ ದುಷ್ಪರಿಣಾಮ ಕುರಿತು ವಿದ್ಯಾರ್ಥಿಗಳು ನಗರದ ಪ್ರಮುಖ ರಸ್ತೆಗಳಲ್ಲಿ ಜಾಗೃತಿ ಜಾಥಾ ನಡೆಸಿದರು. ಅಲ್ಲದೇ, ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಬೀದಿ ನಾಟಕ ಪ್ರದರ್ಶಿಸಿದರು. ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶೆ ಮಹಾಲಕ್ಷ್ಮಿ ನೇರಳೆ ಪ್ರವಾಸಿ ಮಂದಿರದ ಬಳಿ ಜಾಥಾಕ್ಕೆ ಚಾಲನೆ ನೀಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ಹಣಾಧಿಕಾರಿ ಬಿ.ಬಿ.ಕಾವೇರಿ ಕರಪತ್ರ ಬಿಡುಗಡೆ ಮಾಡಿದರು. ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ವಿಜಯಕುಮಾರ್, ಜಿಲ್ಲಾ ಕುಷ್ಟ ರೋಗ ನಿಯಂತ್ರಣಾಧಿಕಾರಿ ಡಾ. ಕಲಾವತಿ, ವಾಸವಿ ಕ್ಲಬ್‌ ಜಿಲ್ಲಾ ಘಟಕದ ಅಧ್ಯಕ್ಷ ವಿ.ಪಿ.ಸೋಮಶೇಖರ್, ಆರೋಗ್ಯ ಶಿಕ್ಷಣಾಧಿಕಾರಿ ಡಾ.ಜಯಣ್ಣ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT