ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲಕಾರ್ಮಿಕರನ್ನು ಹಾಸ್ಟೆಲ್‌ಗಳಿಗೆ ಸೇರಿಸಿ

ರಾಯಚೂರು: ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್‌ ಸೂಚನೆ
Last Updated 3 ಜೂನ್ 2017, 5:50 IST
ಅಕ್ಷರ ಗಾತ್ರ

ರಾಯಚೂರು: ‘ಸಮೀಕ್ಷೆಯೊಂದರ ಪ್ರಕಾರ ಜಿಲ್ಲೆಯಾದ್ಯಂತ 4,250ಕ್ಕೂ ಅಧಿಕ ಬಾಲಕಾರ್ಮಿಕರು ದುಡಿಮೆಯಲ್ಲಿ ತೊಡಗಿದ್ದಾರೆ ಎನ್ನುವ ಮಾಹಿತಿಯಿದೆ. ಕೆಲಸಕ್ಕೆ ತೊಡಗಿಸಲಾದ ಬಾಲಕಾರ್ಮಿಕರನ್ನು ಗುರುತಿಸಿ ವಿವಿಧ ಸರ್ಕಾರಿ ಹಾಸ್ಟೆಲ್‌ಗಳಿಗೆ ವಿದ್ಯಾಭ್ಯಾಸಕ್ಕಾಗಿ ಸೇರ್ಪಡೆಗೊಳಿಸುವುದು ಕಡ್ಡಾಯ’ ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್‌ ಹೇಳಿದರು.

ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ನಿಮಿತ್ತ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

‘ಬಾಲಕಾರ್ಮಿಕರನ್ನು ಗುರುತಿಸಿ ಈ ಅನಿಷ್ಟ ಪದ್ಧತಿ ನಿರ್ಮೂಲನೆಗೆ ತಡೆ ಹಾಕುವ ನಿಟ್ಟಿನಲ್ಲಿ ಮಕ್ಕಳ ಸಹಾಯವಾಣಿ ಕೇಂದ್ರ (1098) ನಿರಂತರವಾಗಿ ಕಾರ್ಯನಿರ್ವಹಿಸಬೇಕು. ಅದು ಸ್ಥಗಿತಗೊಂಡಿದ್ದರೂ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಏಕೆ ಎಚ್ಚರಿಕೆ ವಹಿಸಿ ಆರಂಭಿಸಿಲ್ಲ’ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

‘ಈ ಜಿಲ್ಲೆಯಲ್ಲಿ ಮಾತ್ರ ಮಕ್ಕಳ ಸಹಾಯವಾಣಿ ಕೇಂದ್ರ ಪ್ರಾರಂಭಿಸದೆ ಸ್ಥಗಿತಗೊಳಿಸಲಾಗಿದೆ. ತೆರೆಮರೆಯಲ್ಲಿ ಬಾಲಕಾರ್ಮಿಕ ಪದ್ಧತಿ ನಡೆಯುತ್ತಿದ್ದರೂ ಇದರ ನಿರ್ಮೂಲನೆಗಾಗಿ ಯಾವ ಅಧಿಕಾರಿಗಳು ಗಂಭೀರವಾಗಿ ಗಮನ ಹರಿಸುತ್ತಿಲ್ಲ. ನೆರೆಯ ಜಿಲ್ಲೆಗಳಲ್ಲಿ ಬಾಲಕಾರ್ಮಿಕರನ್ನು ಮರಳಿ ಶಾಲೆಗೆ ಕರೆತರುವ ನಿಟ್ಟಿನಲ್ಲಿ ಯಶಸ್ವಿಯಾಗಿ ಕೆಲಸಗಳು ನಡೆದಿವೆ. ಗ್ರಾಮ ಪಂಚಾಯಿತಿ ಮಟ್ಟದಿಂದಲೂ ಈ ಬಗ್ಗೆ ಎಚ್ಚರಿಕೆ ವಹಿಸಬೇಕು’ ಎಂದು ತಿಳಿಸಿದರು.

‘ಒಂದು ವಾರದಲ್ಲಿ ಬಾಲಕಾರ್ಮಿಕರ ಬಗ್ಗೆ ವರದಿ ಸಲ್ಲಿಸುವುದಕ್ಕೆ ಸೂಕ್ತ ಕ್ರಮ ಕೈಗೊಳ್ಳಬೇಕು. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ದುಡಿಮೆಗಾಗಿ ಶಿಕ್ಷಣ ಮೊಟಕುಗೊಳಿಸುವ ಮಕ್ಕಳ ಸಂಖ್ಯೆ ಅಧಿಕವಿದೆ. ಇಂತಹ ಬಾಲಕಾರ್ಮಿಕರನ್ನು ಗುರುತಿಸುವ ಕೆಲಸವಾಗುತ್ತಿಲ್ಲ’ ಎಂದರು.

‘ಬಾಲ ಕಾರ್ಮಿಕರ ಪದ್ಧತಿ ನಿರ್ಮೂಲನೆಗಾಗಿ ಇಂದಿನಿಂದಲೆ ಕಾರ್ಯಪ್ರವೃತ್ತರಾಗಬೇಕು. ಬಾಲಕಾರ್ಮಿಕ ಯೋಜನಾಧಿಕಾರಿ, ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಆಸಕ್ತಿಯಿಂದ ಕೆಲಸ ಮಾಡಬೇಕು’ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಕುರ್ಮಾರಾವ್, ನಗರಸಭೆ ಪೌರಾಯುಕ್ತ ಕೆ.ಗುರುಲಿಂಗಪ್ಪ, ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಂಜುನಾಥ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

**

12ರಂದು ದಿನಾಚರಣೆ

ಜಿಲ್ಲೆಯಾದ್ಯಂತ ಜೂನ್ 12ರಂದು ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆ ನಿಮಿತ್ತ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಘೋಷಣೆಗಳೊಂದಿಗೆ ಜನಜಾಗೃತಿ ಮೂಡಿಸಬೇಕು. ತಾಲ್ಲೂಕಿನಲ್ಲಿ ತಹಶೀಲ್ದಾರರ ನೇತೃತ್ವದಲ್ಲಿ ಸ್ಥಳೀಯ ಅಧಿಕಾರಿಗಳು, ಸ್ವಯಂ ಸೇವಾ ಸಂಸ್ಥೆಗಳು, ಶಿಕ್ಷಣ ಇಲಾಖೆಯಿಂದ ಮಕ್ಕಳು, ಶಿಕ್ಷಕರು ಪ್ರಭಾತಪೇರಿಯ ಮೂಲಕ ಜನಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್‌ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು.

ಅಂದು ಬೆಳಿಗ್ಗೆ 8.30ಕ್ಕೆ ಜಿಲ್ಲಾಧಿಕಾರಿ ಕಾರ್ಯಾಲಯದಿಂದ ಮಕ್ಕಳ ಕಾಲ ನಡಿಗೆ- ಸೈಕಲ್ ಜಾಥಾಗಳೊಂದಿಗೆ ನಗರದ ಪ್ರಮುಖ ಬೀದಿಗಳಲ್ಲಿ ಬಾಲಕಾರ್ಮಿಕ ಅನಿಷ್ಟ ಪದ್ಧತಿಯನ್ನು ಹೋಗಲಾಡಿಸುವ ಘೋಷಣೆಗಳೊಂದಿಗೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ನಿರ್ಧರಿಸಲಾಯಿತು.

**

ಬಾಲಕಾರ್ಮಿಕರನ್ನು ದುಡಿಮೆಯಿಂದ ಮುಕ್ತಗೊಳಿಸಲು ಇಲಾಖಾವಾರು ಅಧಿಕಾರಿಗಳು ಎಚ್ಚರಿಕೆ ವಹಿಸಿ ಕೆಲಸ ಮಾಡಬೇಕು. ಮಕ್ಕಳ ಸಹಾಯವಾಣಿ ನಿರಂತರ ಕಾರ್ಯ ನಿರ್ವಹಿಸಬೇಕು.
-ಡಾ.ಬಗಾದಿ ಗೌತಮ್, ಜಿಲ್ಲಾಧಿಕಾರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT