ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂತರ್ಜಲ ಹೆಚ್ಚಳಕ್ಕೆ ಎಲ್ಲರೂ ಕ್ರಮ ವಹಿಸಿ

Last Updated 7 ಜೂನ್ 2017, 5:04 IST
ಅಕ್ಷರ ಗಾತ್ರ

ರಾಯಚೂರು: ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸಲು ಎಲ್ಲರೂ ಕ್ರಮ ವಹಿಸಬೇಕು. ಯೋಜನೆಯಲ್ಲಿ ಗ್ರಾಮ ಪಂಚಾಯಿತಿಗಳನ್ನು ಸೇರ್ಪಡೆ ಮಾಡಿಕೊಳ್ಳುವುದು ತುಂಬಾ ಮುಖ್ಯ. ರೈತರ ಜಮೀನುಗಳಲ್ಲಿ ಬದುಗಳನ್ನು ನಿರ್ಮಿಸಬೇಕು ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ಶೌಚಾಲಯ ನಿರ್ಮಾಣ ಪರಿಶೀಲನಾ ಸಮಿತಿ ಅಧ್ಯಕ್ಷ ನಂಜಯ್ಯಮಠ ಎಸ್.ಜಿ. ಸಲಹೆ ನೀಡಿದರು.

ನಗರದ ಜಿಲ್ಲಾ ಪಂಚಾಯಿತಿಯ ಜಲ ನಿರ್ಮಲ ಸಭಾಂಗಣದಲ್ಲಿ ‘ಗ್ರಾಮೀಣ ಕುಡಿಯುವ ನೀರು ಮತ್ತು ಶೌಚಾಲಯಗಳ ನಿರ್ಮಾಣ’ಕ್ಕೆ ಸಂಬಂಧಿಸಿದಂತೆ ಮಂಗಳವಾರ ನಡೆದ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.

ಜಲಮರುಪೂರ್ಣ ಕಾರ್ಯಕ್ಕಾಗಿ ಕೆರೆಗಳನ್ನು ಭರ್ತಿ ಮಾಡುವುದಕ್ಕೆ ವ್ಯವಸ್ಥೆಯಾಗಬೇಕು. ಇದರಿಂದ ಸುತ್ತಮುತ್ತಲಿನ ಕೊಳವೆಬಾವಿಗಳು, ಬಾವಿಗಳಲ್ಲಿ ನೀರಿನ ಪ್ರಮಾಣ ಹೆಚ್ಚಾಗುತ್ತದೆ. ಸಣ್ಣ ಚೆಕ್‌ಡ್ಯಾಮ್‌ಗಳಿಂದಲೂ ಭೂಮಿಯಲ್ಲಿ ನೀರು ಇಂಗಿಸಬಹುದು. ರಾಜ್ಯದಲ್ಲಿ ಅಂತರ್ಜಲ ಮಟ್ಟ ಸಂಪೂರ್ಣ ಕುಸಿದಿದೆ. ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ 12ರಿಂದ 14 ನೂರು ಅಡಿ ಆಳಕ್ಕೆ ಕೊಳವೆ ಕೊರೆದರೂ ನೀರು ಬೀಳುತ್ತಿಲ್ಲ ಎಂದರು.

‘ಅಭಿವೃದ್ಧಿ ವಿಚಾರದಲ್ಲಿ ನಮ್ಮ ರಾಜ್ಯ ದೇಶದಲ್ಲಿ 3ನೇ ಬಾರಿಗೆ ಸತತವಾಗಿ ಪ್ರಥಮ ಬಹುಮಾನ ಪಡೆದಿದೆ. ಇದು ಕೇವಲ ಮೇಲಿನ ಅಧಿಕಾರಿಗಳಿಂದಲ್ಲ ಎಲ್ಲರೂ ಸೇರಿ ಮಾಡುವುದರಿಂದ ಸಾಧ್ಯ. ಅ.2ರೊಳಗೆ ಬಯಲು ಬಹಿರ್ದೆಸೆ ಮುಕ್ತ ಗ್ರಾಮ ಮಾಡಬೇಕಾಗಿದೆ.

ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಂದ ಹಿಡಿದು ಎಲ್ಲರೂ ಸೇರಿ ಕೆಲಸ ಮಾಡಬೇಕು’ ಎಂದು ಸೂಚಿಸಿದರು.  ಸಮಿತಿ ಸದಸ್ಯ ತಿಪ್ಪೇಸ್ವಾಮಿ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮಿ, ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕೂರ್ಮಾರಾವ್ ಎಂ., ಉಪ ಕಾರ್ಯದರ್ಶಿ ಮಹ್ಮದ್ ಯೂಸೂಫ್ ಇದ್ದರು.

10 ಜಿಲ್ಲೆಗಳ ಪ್ರವಾಸ ಪೂರ್ಣ
ರಾಯಚೂರು: ರಾಜ್ಯದಲ್ಲಿ ರಾಯಚೂರು ಸೇರಿ 10 ಜಿಲ್ಲೆಗಳಲ್ಲಿ ಪ್ರವಾಸ ಮುಗಿದಿದೆ. ಕುಡಿಯುವ ನೀರು, ಶೌಚಾಲಯ ಹಾಗೂ ನೀರು ಶುದ್ಧೀಕರಣ ಘಟಕಗಳ ಸ್ಥಿತಿಗತಿಗಳ ಬಗ್ಗೆ ಸರ್ಕಾರಕ್ಕೆ ಜಿಲ್ಲಾವಾರು ವರದಿ ಸಲ್ಲಿಸಲಾಗುತ್ತಿದೆ. ಕಾಮಗಾರಿ ಪೂರ್ಣಗೊಳಿಸಲು ಹಿರಿಯ ಅಧಿಕಾರಿಗಳು ಕ್ರಮ ವಹಿಸುತ್ತಿದ್ದಾರೆ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ಶೌಚಾಲಯ ನಿರ್ಮಾಣ ಪರಿಶೀಲನಾ ಸಮಿತಿ ಅಧ್ಯಕ್ಷ ನಂಜಯ್ಯಮಠ ಎಸ್.ಜಿ. ಹೇಳಿದರು. ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಜಿಲ್ಲೆಯಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳು ನನೆಗುದಿದೆ ಬಿದ್ದಿವೆ. ಇದಕ್ಕೆ ಹಲವು ಕಾರಣಗಳು ಗೊತ್ತಾಗಿವೆ. ಮುಖ್ಯವಾಗಿ ತುಂಗಭದ್ರಾ ನದಿಗೆ ನೀರು ಲಭ್ಯತೆಯಿಲ್ಲ. ಇನ್ನೂ ಹೆಚ್ಚಿನ ಕೆಲಸವಾಗಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಜಿಲ್ಲೆಯಲ್ಲಿ ಕೇವಲ ಶೇ 35ರಷ್ಟು ಮಾತ್ರ ಶೌಚಾಲಯಗಳಿವೆ. ಈ ಹಂತದಲ್ಲಿ ಅಕ್ಟೋಬರ್‌ ಒಳಗಾಗಿ ಬಯಲು ಶೌಚಮುಕ್ತ ಗುರಿ ತಲುಪುವುದು ತುಂಬಾ ಕಷ್ಟ. ಶೌಚಾಲಯ ನಿರ್ಮಾಣದ ಬಗ್ಗೆ ಜನರಿಗೆ ಅರಿವು ಮೂಡಿಸುವ ಕಾರ್ಯಕ್ರಮ ಮಾಡುವಂತೆ ತಿಳಿಸಲಾಗಿದೆ ಎಂದರು.

ಜಿಲ್ಲೆಯಲ್ಲಿ ಒಟ್ಟು 34 ಬಹುಗ್ರಾಮ ಯೋಜನೆಗಳಿದ್ದು, ಅದರಲ್ಲಿ 18 ಯೋಜನೆಗಳು ಪೂರ್ಣಗೊಂಡಿವೆ. ಒಟ್ಟು 473 ಶುದ್ಧ ಕುಡಿಯುವ ನೀರಿನ ಘಟಕಗಳಿವೆ. ಅವುಗಳಲ್ಲಿ 71 ಘಟಕಗಳು ದುರಸ್ತಿಯಲ್ಲಿವೆ. ನಿರ್ವಹಣೆ ಜವಾಬ್ದಾರಿ ವಹಿಸಿಕೊಂಡಿದ್ದ ಎರಡು ಕಂಪೆನಿಗಳು ಪಲಾಯನ ಮಾಡಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮಕ್ಕೆ ಸೂಚಿಸಲಾಗಿದೆ. ಈ ಶುದ್ಧೀಕರಣ ಘಟಕಗಳ ನಿರ್ವಹಣೆಯನ್ನು ಸರ್ಕಾರೇತರ ಸಂಸ್ಥೆಗಳಿಗೆ ವಹಿಸುವುದಕ್ಕೆ ಟೆಂಡರ್‌ ಪ್ರಕ್ರಿಯೆ ಪೂರ್ಣಗೊಂಡಿದೆ ಎಂದು ಹೇಳಿದರು.

* * 

ರಾಯಚೂರು ಜಿಲ್ಲೆಯಲ್ಲಿ ವೈಯಕ್ತಿಕ ಶೌಚಾಲಯ ನಿರ್ಮಾಣ ಪ್ರಮಾಣ ನಿರಾಶಾದಾಯಕವಾಗಿದೆ. ಶೌಚಾಲಯ ನಿರ್ಮಿಸಿಕೊಳ್ಳಬೇಕು ಎನ್ನುವ ಅರಿವಿನ ಕೊರತೆ ಜನರಲ್ಲಿ ಬಹಳಷ್ಟಿದೆ.
ನಂಜಯ್ಯ ಮಠ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT