15 ದಿನದಲ್ಲಿ ವರದಿ ಸಲ್ಲಿಸಲು ಸೂಚನೆ

7

15 ದಿನದಲ್ಲಿ ವರದಿ ಸಲ್ಲಿಸಲು ಸೂಚನೆ

Published:
Updated:
15 ದಿನದಲ್ಲಿ ವರದಿ ಸಲ್ಲಿಸಲು ಸೂಚನೆ

ತುಮಕೂರು: ಜಿಲ್ಲೆಯ ವಿವಿಧೆಡೆ ನೆಲೆಸಿರುವ ಅಲೆಮಾರಿ ಹಾಗೂ ಅರೆ ಅಲೆಮಾರಿ ಸಮುದಾಯಗಳ ಸ್ಥಿತಿಗತಿ ಬಗ್ಗೆ ಸಮೀಕ್ಷೆ ನಡೆಸಿ 15 ದಿನಗಳ ಒಳಗೆ ವರದಿ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಪಿ. ಮೋಹನ್ ರಾಜ್ ಅವರು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಸಮುದಾಯಗಳ  ಅಭಿವೃದ್ಧಿ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ರೈಲ್ವೆ ಇಲಾಖೆಯ ಜಾಗಗಳಲ್ಲಿ, ಸೇತುವೆಗಳ ಕೆಳಗೆ ಹೀಗೆ ಜಿಲ್ಲೆಯ ವಿವಿಧೆಡೆ ಅಲೆಮಾರಿ ಸಮುದಾಯದವರು ವಾಸಿಸುತ್ತಿದ್ದಾರೆ. ಅವರ ಶೈಕ್ಷಣಿಕ ಮಟ್ಟ, ನಿವೇಶನ ಸೇರಿದಂತೆ ಹಲವು ಅಂಶಗಳ ಬಗ್ಗೆ ಮಾಹಿತಿ ಕಲೆ ಹಾಕಲು ತಾಲ್ಲೂಕು ಮಟ್ಟದ ಸಮಿತಿಯನ್ನು ರಚಿಸಲಾಗಿದೆ. ಇವರ ಮೂಲಕ ಸಮಾಜ ಕಲ್ಯಾಣ ಇಲಾಖೆ ಮಾಹಿತಿ ಸಂಗ್ರಹಿಸಬೇಕು’ ಎಂದು ನಿರ್ದೇಶನ ನೀಡಿದರು.

‘ಸಮೀಕ್ಷೆ ಆಧರಿಸಿ ನಿವೇಶನ ಇಲ್ಲದವರಿಗೆ ನಿವೇಶನ, ನಿವೇಶನ ಇರುವವರಿಗೆ ವಸತಿ, ಮತದಾರರ ಗುರುತಿನ ಚೀಟಿ, ಆಧಾರ್ ಕಾರ್ಡ್, ಪಡಿತರ ಚೀಟಿ, ವಿದ್ಯಾಭ್ಯಾಸ ಹೀಗೆ ಹಲವು ಸೌಲಭ್ಯಗಳನ್ನು ಒದಗಿಸಲು ಸುಲಭವಾಗಲಿದೆ’ ಎಂದರು.

‘ಒಂದೆಡೆ ನೆಲೆ ನಿಂತಿರುವ ಅಲೆಮಾರಿ ಸಮುದಾಯಗಳಿಗೆ ಆಧಾರ್ ಕಾರ್ಡ್ ನೀಡಲಾಗಿದೆ. ಉಳಿದವರನ್ನೂ ನೆಲೆ ನಿಲ್ಲುವಂತೆ ಮಾಡಿ ಪಡಿತರ ಚೀಟಿ, ವಸತಿ ಮತ್ತು ಜಾತಿ ಪ್ರಮಾಣ ಪತ್ರವನ್ನು ವಿತರಿಸಬೇಕಾಗಿದೆ. ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಈ ಜಾತಿಗಳ ಬಗ್ಗೆ ಅರಿವು ಅಗತ್ಯ’ ಎಂದು ಅವರು ತಿಳಿಸಿದರು.

‘ಹಕ್ಕಿ ಪಿಕ್ಕಿ ಸಮುದಾಯದವರಿಗಾಗಿ ಶಿವಮೊಗ್ಗ ಮತ್ತು ಕೆಂಗೇರಿಯಲ್ಲಿ ಕಾಲೊನಿಗಳನ್ನು ನಿರ್ಮಿಸಲಾಗಿದೆ. ಅಲ್ಲಿ ಕೈಗೊಂಡಿರುವ ಕಾರ್ಯಕ್ರಮಗಳ ಬಗ್ಗೆ ಇಲಾಖೆಯ ಅಧಿಕಾರಿಗಳನ್ನು ಕಳುಹಿಸಿ ಮಾಹಿತಿ ಪಡೆಯಬೇಕು’ ಎಂದು ಸಮಾಜಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಿಗೆ ಸೂಚಿಸಿದರು.

‘ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ ಸಮ್ಮೇಳನವನ್ನು ಜಿಲ್ಲೆಯಲ್ಲಿ ಆಯೋಜಿಸಬೇಕು. ಇದರಿಂದ ಈ ಸಮುದಾಯಗಳು  ಗುರುತಿಸಿಕೊಳ್ಳಲು ಸಾಧ್ಯವಾಗುತ್ತದೆ’ ಎಂದು ಅಲೆಮಾರಿ ಸಮುದಾಯದ ಮುಖಂಡ ರೆಡ್ಡಿ ಚಿನ್ನಯಲ್ಲಪ್ಪ ಮನವಿ ಮಾಡಿದರು.

ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ದೇವರಾಜ್, ಪರಿಶಿಷ್ಟ ವರ್ಗ ಕಲ್ಯಾಣಾಧಿಕಾರಿ ರಾಜ್‌ಕುಮಾರ್, ಅಲೆಮಾರಿ ಸಮುದಾಯದ ಮುಖಂಡರಾದ ರಾಮಕ್ಕ ಹಾಗೂ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry