‘ಮಂಗಳೂರಿನಲ್ಲಿ ರಾಷ್ಟ್ರೀಯ ಐಟಿ ಸಂಸ್ಥೆ ಸ್ಥಾಪನೆ’

7

‘ಮಂಗಳೂರಿನಲ್ಲಿ ರಾಷ್ಟ್ರೀಯ ಐಟಿ ಸಂಸ್ಥೆ ಸ್ಥಾಪನೆ’

Published:
Updated:
‘ಮಂಗಳೂರಿನಲ್ಲಿ ರಾಷ್ಟ್ರೀಯ ಐಟಿ ಸಂಸ್ಥೆ ಸ್ಥಾಪನೆ’

ಮಂಗಳೂರು: ಶೈಕ್ಷಣಿಕವಾಗಿ ಸಾಕಷ್ಟು ಮುಂದುವರಿದಿರುವ ಮಂಗಳೂರಿನಲ್ಲಿ ರಾಷ್ಟ್ರೀಯ ಎಲೆಕ್ಟ್ರಾನಿಕ್ಸ್‌ ಮತ್ತು ಮಾಹಿತಿ ತಂತ್ರಜ್ಞಾನ ಸಂಸ್ಥೆಯನ್ನು ಆರಂಭಿಸಲು ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಕೇಂದ್ರ ಕಾನೂನು, ನ್ಯಾಯ ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ರಾಜ್ಯ ಸಚಿವ ಪಿ.ಪಿ. ಚೌಧರಿ ಹೇಳಿದ್ದಾರೆ.

ಇಲ್ಲಿನ ಪುರಭವನದಲ್ಲಿ ಬುಧವಾರ ಕೇಂದ್ರ ಸರ್ಕಾರದ ಮೂರು ವರ್ಷಗಳ ಸಾಧನೆಯನ್ನು ತಿಳಿಸುವ ‘ಸಬ್‌ ಕಾ ಸಾಥ್‌–ಸಬ್‌ ಕಾ ವಿಕಾಸ್‌’ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಗೆ ಆಯ್ಕೆಯಾಗಿದ್ದು, ಈ ಯೋಜನೆಯಡಿ ರಾಷ್ಟ್ರೀಯ ಎಲೆಕ್ಟ್ರಾನಿಕ್ಸ್‌ ಮತ್ತು ಮಾಹಿತಿ ತಂತ್ರಜ್ಞಾನ ಸಂಸ್ಥೆಯನ್ನು ತೆರೆಯಲು ಅವಕಾಶ ನೀಡಲಾಗುವುದು, ಇದಕ್ಕಾಗಿ ಪ್ರಸ್ತಾವನೆ ಸಲ್ಲಿಸುವಂತೆ ಸ್ಥಳೀಯ ಸಂಸದರಿಗೆ ಸೂಚಿಸಿದರು.

ದೇಶದಲ್ಲಿ ಮೂಲಸೌಕರ್ಯಕ್ಕೆ ಒತ್ತು ನೀಡಲಾಗುತ್ತಿದ್ದು, ಇದರ ಜತೆಗೆ ತಂತ್ರಜ್ಞಾನ ಕ್ಷೇತ್ರದಲ್ಲೂ ಇನ್ನಷ್ಟು ಸುಧಾರಣೆ ತರಲು ಚಿಂತನೆ ನಡೆಸಲಾಗುತ್ತಿದೆ. ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಸಾಕಷ್ಟು ಮುಂದುವರಿದಿದ್ದರೂ, ಎಲೆಕ್ಟ್ರಾನಿಕ್‌ ವಸ್ತುಗಳ ಆಮದಿನಲ್ಲಿ ಹೆಚ್ಚಳವಾಗುತ್ತಿದೆ.

ದೇಶದ ಉತ್ಪಾದನೆಯ ಮೂರು ಪಟ್ಟು ಎಲೆಕ್ಟ್ರಾನಿಕ್‌ ವಸ್ತುಗಳನ್ನು ಆಮದು ಮಾಡಿಕೊಳ್ಳಲಾಗುತ್ತಿದೆ. ಇದನ್ನು ನಿಯಂತ್ರಿಸುವುದಕ್ಕಾಗಿ ಮೇಕ್‌ ಇನ್‌ ಇಂಡಿಯಾದ ಮೂಲಕ ಸ್ಥಳೀಯವಾಗಿ ಎಲೆಕ್ಟ್ರಾನಿಕ್‌ ವಸ್ತುಗಳ ಉತ್ಪಾದನೆಗೆ ಒತ್ತು ನೀಡಲಾಗುತ್ತಿದೆ ಎಂದರು.

ಕಂಬಳ ಮಸೂದೆ ರಾಷ್ಟ್ರಪತಿ ಅಂಕಿತಕ್ಕೆ

ಕಂಬಳವು ಈ ಭಾಗದ ಜನಪದ ಕ್ರೀಡೆಯಾಗಿದ್ದು, ಅದನ್ನು ಉಳಿಸಿಕೊಳ್ಳಲು ಕೇಂದ್ರ ಸರ್ಕಾರ ಎಲ್ಲ ರೀತಿಯ ಸಹಾಯ ನೀಡಲಿದೆ. ಇದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ತಿದ್ದುಪಡಿ ಮಸೂದೆಯನ್ನು ರಾಷ್ಟ್ರಪತಿಗಳ ಅಂಕಿತಕ್ಕೆ ಕಳುಹಿಸಲಾಗಿದೆ ಎಂದು ಸಚಿವ ಪಿ.ಪಿ. ಚೌಧರಿ ತಿಳಿಸಿದರು.

ರಾಷ್ಟ್ರಪತಿ ಅಂಕಿತದ ನಂತರ ಮಸೂದೆಯು ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ ಆಗಲಿದ್ದು, ನಂತರ ಕಂಬಳ ನಡೆಸಲು ಅವಕಾಶ ದೊರೆಯಲಿದೆ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry