ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲಕಾರ್ಮಿಕ ಪದ್ಧತಿ ಅಭಿವೃದ್ಧಿಗೆ ಮಾರಕ

Last Updated 13 ಜೂನ್ 2017, 6:39 IST
ಅಕ್ಷರ ಗಾತ್ರ

ರಾಯಚೂರು: ಎಲ್ಲ ಮಕ್ಕಳಿಗೂ ಉತ್ತಮ ಶಿಕ್ಷಣ ನೀಡುವುದು ತುಂಬಾ ಮುಖ್ಯ. ಬಾಲಕಾರ್ಮಿಕ ಪದ್ಧತಿಯು ದೇಶದ ಅಭಿವೃದ್ಧಿಗೆ ಮಾರಕವಾಗಿದೆ ಎಂದು ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಂ. ಮಹಾದೇವಯ್ಯ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪಂಚಾಯಿತಿ, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ, ಮಕ್ಕಳ ರಕ್ಷಣಾ ಘಟಕ, ವಾರ್ತೆ ಇಲಾಖೆ, ಸ್ವಯಂ ಸೇವಾ ಸಂಸ್ಥೆಗಳು ಮತ್ತು ಜಿಲ್ಲಾ ಬಾಲಕಾರ್ಮಿಕ ಯೋಜನೆಯಿಂದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ನಿಮಿತ್ತ ಸೋಮವಾರ  ನಡೆದ ಕಾನೂನು ಅರಿವು ಜಾಗೃತಿ ಜಾಥಾಕ್ಕೆ  ಚಾಲನೆ ನೀಡಿ ಮಾತನಾಡಿದರು.

ಬಾಲಕಾರ್ಮಿಕ ಪದ್ಧತಿ ತೊಲಗಿಸಲು ಎಲ್ಲರೂ ಪಣ ತೊಡಬೇಕು. 18 ವರ್ಷದೊಳಗಿನ ಮಕ್ಕಳನ್ನು ಯಾವುದೇ ಕಾರಣಕ್ಕೂ ದುಡಿಮೆಗೆ ಬಳಸಿಕೊಳ್ಳುವುದು ಅಪರಾಧ. ಮಕ್ಕಳು ದುಡಿಯುತ್ತಿರುವುದು ಕಂಡು ಬಂದ ತಕ್ಷಣವೇ ಜಿಲ್ಲಾಡಳಿತಕ್ಕೆ ಅಥವಾ ಮಕ್ಕಳ ರಕ್ಷಣಾ ಘಟಕಕ್ಕೆ ದೂರು ನೀಡಬೇಕು. ಮಕ್ಕಳು ಬಾಲಕಾರ್ಮಿಕರಾಗಿ ಭವಿಷ್ಯ ಹಾಳು ಮಾಡಿಕೊಳ್ಳುವುದನ್ನು ತಪ್ಪಿಸಬೇಕು ಎಂದು ಸಲಹೆ ನೀಡಿದರು.

ಮಕ್ಕಳನ್ನು ಶಾಲೆಗಳಿಗೆ ಕಳುಹಿಸುವುದಕ್ಕೆ ಪಾಲಕರನ್ನು ಪ್ರೇರೆಪಿಸಬೇಕು. ಸೂಕ್ತ ತಿಳಿವಳಿಕೆ ಮೂಡಿಸಬೇಕು. ಬಾಲಕಾರ್ಮಿಕ ಪದ್ಧತಿ ವಿರೋಧಿ ಕಾನೂನು ಸಮರ್ಪಕವಾಗಿ ಜಾರಿಯಾಗುವಂತೆ ಸಂಬಂಧಿಸಿದ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು. ಮಕ್ಕಳಿಗೆ ಸಂಬಂಧಿಸಿದ ಪ್ರತಿಯೊಂದು ಇಲಾಖೆ ಈ ಬಗ್ಗೆ ಕಾಳಜಿ ವಹಿಸಬೇಕು ಎಂದು ಹೇಳಿದರು.

ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಅವರು ಬಾಲಕಾರ್ಮಿಕ ವಿರೋಧಿ ದಿನಾಚರಣೆ ನಿಮಿತ್ತ ನಡೆದ ಸೈಕಲ್ ಜಾಥಾಗೆ ಚಾಲನೆ ನೀಡಿ ಮಾತನಾಡಿದರು. ‘ಸರ್ಕಾರದಿಂದ ಆರಂಭಿಸಿದ ಬಾಲಕಾರ್ಮಿಕ ತರಬೇತಿ ಕೇಂದ್ರದಲ್ಲೂ ಉತ್ತಮ ಶಿಕ್ಷಣ ಕೊಡಲಾಗುತ್ತಿದೆ. ಅನೇಕ ಬಾಲಕಾರ್ಮಿಕರು ಒಳ್ಳೆಯ ಶಿಕ್ಷಣ ಪಡೆದು ಉತ್ತಮ ಸಾಧನೆ ಮಾಡುತ್ತಿದ್ದಾರೆ’ ಎಂದು ಶ್ಲಾಘಿಸಿದರು.

‘ಜಿಲ್ಲೆಯಲ್ಲಿ ನಾಲ್ಕು ಸಾವಿರ ಮಕ್ಕಳು ವಿವಿಧೆಡೆ ಬಾಲಕಾರ್ಮಿಕರಾಗಿ ದುಡಿಯುತ್ತಿದ್ದಾರೆ ಎನ್ನುವ ಮಾಹಿತಿ ಇದೆ.  ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಇಂತಹ ತಾಣಗಳನ್ನು ಕಂಡು ಹಿಡಿದು ದಾಳಿ ನಡೆಸಿ, ಮಕ್ಕಳನ್ನು ರಕ್ಷಿಸುವ ಕೆಲಸ ಮಾಡುತ್ತಿದೆ. ಬಾಲಕಾರ್ಮಿಕರಿಗೆ ಬಾಲಕಾರ್ಮಿಕ ತರಬೇತಿ ಕೇಂದ್ರದಲ್ಲಿ ಪ್ರವೇಶಾತಿ ಕಲ್ಪಿಸಿ ಉಚಿತ ಶಿಕ್ಷಣ ನೀಡಲಾಗುತ್ತದೆ. ಮುಂಬರುವ ದಿನಗಳಲ್ಲಿ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಸರ್ಕಾರಿ ವಸತಿ ಶಾಲೆಗೆ ಪ್ರವೇಶಾತಿ ಕಲ್ಪಿಸಿ ಉಚಿತ ಊಟ, ವಸತಿ ಸೌಲಭ್ಯ ಒದಗಿಸಲಾಗುವುದು’ ಎಂದರು.

ವಿದ್ಯಾರ್ಥಿಗಳಿಗೆ ಸನ್ಮಾನ: ಬಾಲಕಾರ್ಮಿಕ ಪದ್ಧತಿ ಕೇಂದ್ರದಲ್ಲಿ ಶಿಕ್ಷಣ ಪಡೆದು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಮತ್ತು ಕಾನೂನು ಅರಿವು ಜಾಗೃತಿ ಜಾಥಾ ನಿಮಿತ್ತ ನಡೆದ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

ನ್ಯಾ.ಶ್ರೀನಿವಾಸ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮಂಜುನಾಥ, ಕ್ಷೇತ್ರ ಶಿಕ್ಷಣಾಧಿಕಾರಿ ರಾಮಚಂದ್ರಪ್ಪ ಶಿವಂಗಿ, ಕಾರ್ಮಿಕ ಅಧಿಕಾರಿ ಆರತಿ, ಜಿಲ್ಲಾ ಬಾಲಕಾರ್ಮಿಕ ಯೋಜನಾಧಿಕಾರಿ ಮಂಜುನಾಥರೆಡ್ಡಿ, ಪೌರಾಯುಕ್ತ ಕೆ.ಗುರುಲಿಂಗಪ್ಪ ಇದ್ದರು.

* * 

ಮಕ್ಕಳನ್ನು ಶಾಲೆಗೆ ಕಳುಹಿಸದೆ ದುಡಿಮೆಗೆ ಹಾಕುವುದು ಗ್ರಾಮೀಣ ಭಾಗದಲ್ಲಿ ಹೆಚ್ಚಿದೆ. ಮಕ್ಕಳ ರಕ್ಷಣಾ ಘಟಕವು ಇಂತಹ ಮಕ್ಕಳಿಗೆ ಉಚಿತ ಶಿಕ್ಷಣ ಕಲ್ಪಿಸಬೇಕು.
ಡಾ.ಬಗಾದಿ ಗೌತಮ್‌
ಜಿಲ್ಲಾಧಿಕಾರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT