ಜಂತಕಲ್ ಮೈನಿಂಗ್ ಪ್ರಕರಣ: ಎಚ್.ಡಿ. ಕುಮಾರಸ್ವಾಮಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

7

ಜಂತಕಲ್ ಮೈನಿಂಗ್ ಪ್ರಕರಣ: ಎಚ್.ಡಿ. ಕುಮಾರಸ್ವಾಮಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

Published:
Updated:
ಜಂತಕಲ್ ಮೈನಿಂಗ್ ಪ್ರಕರಣ: ಎಚ್.ಡಿ. ಕುಮಾರಸ್ವಾಮಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಬೆಂಗಳೂರು: ಜಂತಕಲ್ ಮೈನಿಂಗ್ ಪ್ರಕರಣ ಸಂಬಂಧ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಲೋಕಾಯುಕ್ತ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ.

ಎಚ್‌.ಡಿ. ಕುಮಾರಸ್ವಾಮಿ ಅವರು ಜಂತಕಲ್‌ ಮೈನಿಂಗ್ ಕಂಪೆನಿಯಿಂದ ಲಂಚ ಪಡೆದಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದಾರೆ. ಈ ಸಂಬಂಧ ಬಂಧನ ಭೀತಿಯಿಂದ ಕುಮಾರಸ್ವಾಮಿ ಅವರು ನಿರೀಕ್ಷಣಾ ಜಾಮೀನು ಕೋರಿದ್ದರು. 

ಪ್ರಕರಣ ಸಂಬಂಧ ಇಂದು ನಡೆದ ವಿಚಾರಣೆ ವೇಳೆ, ಎಚ್‌.ಡಿ. ಕುಮಾರಸ್ವಾಮಿ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕೋರ್ಟ್‌ ವಜಾಗೊಳಿಸಿತು.

ಜಾಮೀನು ನೀಡಿದರೆ ತನಿಖೆಯ ಮೇಲೆ ಪರಿಣಾಮ ಉಂಟಾಗಲಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಈ ಕಾರಣಕ್ಕೆ ಕುಮಾರಸ್ವಾಮಿ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟ್‌ ವಜಾ ಮಾಡಿದೆ.

ಪ್ರಕರಣ: ಎಚ್‌.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಜಂತಕಲ್‌ ಮೈನಿಂಗ್‌ ಕಂಪೆನಿಯಿಂದ ಲಂಚ ಪಡೆದು ಅಕ್ರಮ ಗಣಿಗಾರಿಕೆಗೆ ಪರವಾನಗಿ ನೀಡಿದ್ದಾರೆ. ಇದಕ್ಕೆ ಪ್ರತಿಯಾಗಿ ಲಂಚರೂಪದಲ್ಲಿ ವಿಶ್ವ ಭಾರತಿ ಹೌಸಿಂಗ್ ಕೋ ಆಪರೇಟಿವ್ ಸೊಸೈಟಿಯಿಂದ ಪತ್ನಿ ಅನಿತಾ ಕುಮಾರಸ್ವಾಮಿ ಅವರ ಹೆಸರಿಗೆ ನಿವೇಶನ ಹಂಚಿಕೆ ಮಾಡಲಾಗಿತ್ತು ಎಂದು ಆರೋಪಿಸಿ ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ ಮತ್ತು ಜಂತಕಲ್‌ ಕಂಪೆನಿ ವ್ಯವಸ್ಥಾಪಕ ನಿರ್ದೇಶಕರ ವಿರುದ್ಧ ದೂರು ಸಲ್ಲಿಕೆಯಾಗಿತ್ತು. ಈ ಹಿಂದೆ ಈ ಪ್ರಕರಣವನ್ನು ಹೈಕೋರ್ಟ್‌ ರದ್ದು ಮಾಡಿತ್ತು.

ಹೈಕೋರ್ಟ್ ಆದೇಶ ಪ್ರಶ್ನಿಸಿ ದೂರುದಾರರು ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು. ಪ್ರಕರಣದ ಮರು ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರ್ದೇಶಿಸಿತ್ತು. ಹೀಗಾಗಿ, ಲೋಕಾಯುಕ್ತ ವಿಶೇಷ ನ್ಯಾಯಾಲಯ ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡಿತ್ತು.

ಎಸ್‌ಐಟಿ ಮುಂದೆ ಜನಾರ್ದನ ರೆಡ್ಡಿ

ಇದೇ ಪ್ರಕರಣದಲ್ಲಿ ಕುಮಾರಸ್ವಾಮಿ ವಿರುದ್ಧ ದಾಖಲೆಗಳನ್ನು ಒದಗಿಸಲು ಮಾಜಿ ಸಚಿವ ಜನಾರ್ದನರೆಡ್ಡಿ ಅವರು ವಿಶೇಷ ತನಿಖಾ ತಂಡದ(ಎಸ್‌ಐಟಿ) ಮುಂದೆ ಹಾಜರಾಗಿದ್ದಾರೆ.

ಕುಮಾರಸ್ವಾಮಿ ವಿರುದ್ಧ ₹150 ಕೋಟಿ ಲಂಚ ಪಡೆದಿರುವ ಆರೋಪವನ್ನು ಈ ಹಿಂದೆ ಜನಾರ್ದನ ರೆಡ್ಡಿ ಮಾಡಿದ್ದರು. ದಾಖಲೆ ಒದಗಿಸುವಂತೆ ಎಸ್‌ಐಟಿ ರೆಡ್ಡಿ ಅವರಿಗೆ ನೋಟಿಸ್‌ ನೀಡಿತ್ತು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry