ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಗುಜರಾತ್ ಸಿ.ಎಂ ರೂಪಾನಿ ಹಾವೇರಿಗೆ 19ಕ್ಕೆ’

Last Updated 16 ಜೂನ್ 2017, 7:38 IST
ಅಕ್ಷರ ಗಾತ್ರ

ಹಾವೇರಿ:‘ಇದೇ 19ರಂದು ನಗರದ ಮಾಗಾವಿ ಕಲ್ಯಾಣ ಮಂಟಪದಲ್ಲಿ ‘ಸಬ್‌ ಕಾ ಸಾಥ್ ಸಬ್‌ ಕಾ ವಿಕಾಸ್’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಗುಜರಾತ್ ಮುಖ್ಯಮಂತ್ರಿ ವಿಜಯ್‌ ರೂಪಾನಿ ಪಾಲ್ಗೊಳ್ಳಲಿದ್ದಾರೆ’ ಎಂದು ಮಾಜಿ ಸಚಿವ, ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಸಿ.ಎಂ. ಉದಾಸಿ ಹೇಳಿದರು.

ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈ ಕಾರ್ಯಕ್ರಮದಲ್ಲಿ ಕೇಂದ್ರ ಸರ್ಕಾರದ ಸಾಧನೆಗಳ ಬಗ್ಗೆ ಜನತೆಗೆ ತಿಳಿಸಲಾಗುವುದು. ಜಿಲ್ಲೆಯ ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಗವುದು. ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ ಅವರನ್ನೂ ಆಹ್ವಾನಿಸಲಾಗುವುದು’ ಎಂದರು.

‘ಅಂದು, ಗುಜರಾತ್ ಮುಖ್ಯಮಂತ್ರಿ ವಿಜಯ್‌ ರೂಪಾನಿ ಅವರು ಪರಿಶಿಷ್ಟ ಪಂಗಡಕ್ಕೆ ಸೇರಿದ ದೇವಗಿರಿ ಗ್ರಾಮದ ಹೊನ್ನಪ್ಪ ಗೋಣೆಮ್ಮನವರ ಮನೆಯಲ್ಲಿ ಭೋಜನ ಮಾಡುವರು. ಅಲ್ಲದೇ, ನಗರದ ಹುಕ್ಕೇರಿಮಠದ ಶಿವಲಿಂಗೇಶ್ವರ ಮಹಿಳಾ ಕಾಲೇಜಿನಲ್ಲಿ ಜಿಲ್ಲೆಯ ಸಾಧಕರು, ಗಣ್ಯರ ಜೊತೆ ಸಂವಾದ ನಡೆಸುವರು. ಅಲ್ಲದೇ, ಜಿಲ್ಲೆಯ ಪರಂಪರೆಯನ್ನು ಪರಿಚಯಿಸುವ ಸಾಂಸ್ಕೃತಿಕ ಪ್ರಕಾರಗಳ ಪ್ರದರ್ಶನ ನಡೆಯಲಿದೆ’ ಎಂದರು.

‘ಇದೇ 17ರಂದು ಹುಬ್ಬಳ್ಳಿಯಲ್ಲಿ ಬೃಹತ್ ಸಮಾವೇಶ ಆಯೋಜಿಸಲಾಗಿದೆ. ಇಲ್ಲಿ, ‘ಪ್ರಧಾನ ಮಂತ್ರಿ ಉಜ್ವಲ ಯೋಜನೆ’ ಅಡಿ ಹಾವೇರಿ, ಧಾರವಾಡ ಮತ್ತು ಗದಗ ಜಿಲ್ಲೆಗಳ ಫಲಾನುಭವಿಗಳಿಗೆ ಉಚಿತ ಅಡುಗೆ ಅನಿಲ ಸಂಪರ್ಕ ಕಲ್ಪಿಸುವ ಕಾರ್ಯಕ್ಕೆ ಕೇಂದ್ರದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಧರ್ಮೇಂದ್ರ ಪ್ರಧಾನ್ ಚಾಲನೆ ನೀಡುವರು. ಕೇಂದ್ರ ಸಚಿವರಾದ ಸದಾನಂದ ಗೌಡ, ಅನಂತ ಕುಮಾರ್, ರಮೇಶ ಜಿಗಜಿಣಗಿ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಜಗದೀಶ ಶೆಟ್ಟರ್, ಸಂಸದರಾದ ಬಿ.ಎಸ್. ಯಡಿಯೂರಪ್ಪ, ಪ್ರಹ್ಲಾದ್ ಜೋಶಿ, ಶಿವಕುಮಾರ್ ಉದಾಸಿ ಮತ್ತಿತರ ಪ್ರಮುಖರು ಪಾಲ್ಗೊಳ್ಳುವರು’ ಎಂದರು.

‘ಉಜ್ವಲ ಯೋಜನೆ’: ‘2019ರೊಳಗಾಗಿ ದೇಶದ 5 ಕೋಟಿ ಕುಟುಂಬಗಳಿಗೆ ಉಚಿತವಾಗಿ ಅಡುಗೆ ಅನಿಲ ಸಂಪರ್ಕ ಕಲ್ಪಿಸುವ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ. ಈ ಪೈಕಿ ರಾಜ್ಯದಲ್ಲಿ 33 ಲಕ್ಷ ಹಾಗೂ ಜಿಲ್ಲೆಯಲ್ಲಿ 1,09,573 ಅಡುಗೆ ಅನಿಲ ಸಂಪರ್ಕ ರಹಿತ ಕುಟುಂಬಗಳನ್ನು ಗುರುತಿಸಲಾಗಿದ್ದು, ಕೆ.ವೈ.ಸಿ. (ಗ್ರಾಹಕರ ಮಾಹಿತಿ) ನೋಂದಣಿ ಮಾಡಿಸಿದ 25,140 ಫಲಾನುಭವಿಗಳಿಗೆ ಮೂರು ತೈಲ ಕಂಪೆನಿಗಳ ಮೂಲಕ ಉಚಿತವಾಗಿ ‘ಸಂಪರ್ಕ’ ಕಲ್ಪಿಸುವ ಗುರಿ ಹೊಂದಲಾಗಿದೆ. ಇದು ರಾಜ್ಯದಲ್ಲೇ ಅತ್ಯಧಿಕ’ ಎಂದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಶಿವರಾಜ ಸಜ್ಜನರ ಮಾತನಾಡಿ, ‘ಇದೇ 19ರ ಕಾರ್ಯಕ್ರಮದಲ್ಲಿ  ಸಂಸದರಾದ ಪ್ರಹ್ಲಾದ್ ಜೋಶಿ ಮತ್ತು ಶಿವಕುಮಾರ್ ಉದಾಸಿ, ಶಾಸಕರಾದ ಬಸವರಾಜ ಬೊಮ್ಮಾಯಿ ಮತ್ತು ಯು.ಬಿ. ಬಣಕಾರ, ಮಾಜಿ ಸಚಿವ ಸಿ.ಎಂ. ಉದಾಸಿ ಮತ್ತಿತರ ಪ್ರಮುಖರು ಪಾಲ್ಗೊಳ್ಳುವರು. ಈ ಕಾರ್ಯಕ್ರಮವು ಪಕ್ಷಾತೀತವಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವ ರುದ್ರಪ್ಪ ಲಮಾಣಿ ಅವರಿಗೂ ಆಹ್ವಾನ ನೀಡಲಾಗುವುದು’ ಎಂದರು. ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಸಿದ್ದರಾಜ ಕಲಕೋಟಿ ಇದ್ದರು.

* * 

ಉರುವಲು ಬಳಸಿ (ಕಟ್ಟಿಗೆ) ಅಡುಗೆ ಮಾಡುವ ಪರಿಣಾಮ ದೇಶದಲ್ಲಿ 1.3 ಕೋಟಿಗೂ ಅಧಿಕ ಮಹಿಳೆಯರು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ
ಸಿ.ಎಂ. ಉದಾಸಿ
ಬಿಜೆಪಿ ಮುಖಂಡ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT