ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

ಸಾಲ ಮನ್ನಾ ಕುರಿತ ಬಿಜೆಪಿ ಮುಖಂಡರ ಹೇಳಿಕೆಗೆ ಖಂಡನೆ
Last Updated 1 ಜುಲೈ 2017, 5:52 IST
ಅಕ್ಷರ ಗಾತ್ರ

ತುಮಕೂರು: ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿರುವ ರೈತರ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್‌ ಸಮಿತಿ ಮತ್ತು ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಮುಖಂಡರು ಹಾಗೂ ಕಾರ್ಯಕರ್ತರು ಶುಕ್ರವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು.

ನಗರದ ಟೌನ್‌ಹಾಲ್‌ನಿಂದ ಪ್ರಾರಂಭವಾದ ಮೆರವಣಿಗೆಯು ಜಿಲ್ಲಾಧಿಕಾರಿ ಕಚೇರಿವರೆಗೆ ಸಾಗಿತು. ಜಿಲ್ಲಾಧಿಕಾರಿಯವರ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು. ಕೇಂದ್ರ ಸರ್ಕಾರ, ಪ್ರಧಾನಿ ನರೇಂದ್ರ ಮೋದಿ, ಸಂಸದ ಯಡಿಯೂರಪ್ಪ, ಕೇಂದ್ರ ಸಚಿವ ಅರುಣ್‌ ಜೇಟ್ಲಿ ವಿರುದ್ಧ ಕಾರ್ಯಕರ್ತರು ಘೋಷಣೆ ಕೂಗಿದರು. ಯಡಿಯೂರಪ್ಪ ಮತ್ತು ಜೇಟ್ಲಿ ಅವರ ಪ್ರತಿಕೃತಿ ದಹನ ಮಾಡಿ ಪ್ರತಿಭಟಿಸಿದರು. ಮಧುಗಿರಿ ಶಾಸಕ ಕೆ.ಎನ್‌.ರಾಜಣ್ಣ ಮಾತನಾಡಿ, ‘ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಸಾಲ ಮನ್ನಾ ಸಾಧ್ಯವೇ ಇಲ್ಲ ಎಂದಿದ್ದರು. ಈ ಬಗ್ಗೆ ಸ್ಪಷ್ಟನೆ ನೀಡಬೇಕು. ಕೇಂದ್ರ ಸಚಿವರಾದ ಅರುಣ್ ಜೇಟ್ಲಿ, ವೆಂಕಯ್ಯ ನಾಯ್ಡು ಅವರು  ಸಹ ರೈತ ವಿರೋಧಿಗಳಂತೆ ಹೇಳಿಕೆ ನೀಡುತ್ತಿದ್ದಾರೆ’ ಎಂದು ಟೀಕಿಸಿದರು.

‘ರಿಸರ್ವ್‌ ಬ್ಯಾಂಕ್‌ನ ಗವರ್ನರ್‌ ರೈತರ ಸಾಲಮನ್ನಾದಿಂದ ದೇಶದ ಆರ್ಥಿಕತೆಯಲ್ಲಿ ಅಶಿಸ್ತು ಉಂಟಾಗುತ್ತದೆ ಎಂದಿದ್ದಾರೆ. ಆದರೆ ಕಾರ್ಪೊರೇಟ್‌ ಹೌಸ್‌ಗೆ ಲಕ್ಷಾಂತರ ಕೋಟಿ ರೂಪಾಯಿ ರಿಯಾಯಿತಿ ನೀಡಿದ್ದಾರೆ. ಇದು ಬಿಜೆಪಿ ರೈತ ವಿರೋಧಿ ನಿಲುವು ತೋರಿಸುತ್ತದೆ’ ಎಂದು ಆರೋಪಿಸಿದರು.

ರಾಜ್ಯ ಸರ್ಕಾರ ಸಾಲ ಮನ್ನಾ ಮಾಡಿದೆ. ಕಾಂಗ್ರೆಸ್‌ ಪಕ್ಷ ಮಾತ್ರ ರೈತರ ಪರವಾಗಿದೆ. ಸಿದ್ದರಾಮಯ್ಯಗೆ ಅಭಿನಂದನೆಗಳನ್ನು ಸಲ್ಲಿಸುತ್ತೇವೆ. ಕೇಂದ್ರ ಸರ್ಕಾರವು ಎಲ್ಲ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿರುವ ಸಾಲ ಮನ್ನಾ ಮಾಡಬೇಕು. ರೈತ ವಿರೋಧಿ ನಿಲುವನ್ನು ಬಿಡಬೇಕು ಎಂದರು.

ನಗರ ಕ್ಷೇತ್ರ ಶಾಸಕ ರಫೀಕ್‌ ಅಹಮದ್‌  ಮಾತನಾಡಿ, ‘ರಾಜ್ಯ ಸರ್ಕಾರ ಸಹಕಾರಿ ಬ್ಯಾಂಕುಗಳಲ್ಲಿನ ಸಾಲಮನ್ನಾ ಮಾಡಿರುವುದು ಸ್ವಾಗತಾರ್ಹ. ಹಿಂದೆ ಕೇಂದ್ರದಲ್ಲಿ ಯುಪಿಎ ಸರ್ಕಾರ ಇದ್ದಾಗ ಮನಮೋಹನ್‌ ಸಿಂಗ್‌ ಸುಮಾರು ₹ 72 ಸಾವಿರ ಕೋಟಿ ಸಾಲ ಮನ್ನಾ ಮಾಡಿದ್ದರು. ಆದರೆ ನರೇಂದ್ರ ಮೋದಿಯವರು ನಯಾಪೈಸೆ ಸಾಲಮನ್ನಾ ಮಾಡಿಲ್ಲ. ಕೇಂದ್ರ ಸರ್ಕಾರ ಕಾರ್ಪೊರೇಟ್‌ ಪರವಾದ ಸರ್ಕಾರವಾಗಿದೆ.’ ಎಂದು ಹೇಳಿದರು.

ಜಿಲ್ಲಾ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ರಾಮಕೃಷ್ಣ, ಜಿಲ್ಲಾ ಯುವ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಎಂ.ಶರತ್‌ಕುಮಾರ್‌, ಉಪಾಧ್ಯಕ್ಷ ಆರ್‌.ರಾಜೇಂದ್ರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT