ಭಾನುವಾರ, ಡಿಸೆಂಬರ್ 15, 2019
18 °C

ಬಡವರಿಗೆ 12 ಸಾವಿರ ನಿವೇಶನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಡವರಿಗೆ 12 ಸಾವಿರ ನಿವೇಶನ

ಕೋಲಾರ: ‘ಜಿಲ್ಲೆಯಲ್ಲಿ ಬಡವರಿಗೆ 12 ಸಾವಿರ ನಿವೇಶನ ನೀಡುವ ಸಂಕಲ್ಪ ಮಾಡಿದ್ದು, ಎಲ್ಲಾ ನಿವೇಶನರಹಿತರಿಗೂ ಅ.2ರಂದು ನಿವೇಶನಗಳ ಹಕ್ಕುಪತ್ರ ನೀಡಲಾಗುವುದು’ ಎಂದು ಸಂಸದ ಕೆ.ಎಚ್. ಮುನಿಯಪ್ಪ ತಿಳಿಸಿದರು. ಕೇಂದ್ರ ಸರ್ಕಾರ ಪುರಸ್ಕೃತ ಯೋಜನೆಗಳ ಅನುಷ್ಠಾನ ಸಂಬಂಧ ನಗರದಲ್ಲಿ ಶುಕ್ರವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ‘ಜಿಲ್ಲೆಯ ಕಡು ಬಡವರಿಗೆ ನಿವೇಶನ ಮತ್ತು ವಸತಿ ಸೌಲಭ್ಯ ಕಲ್ಪಿಸಲು ಜಿಲ್ಲಾಡಳಿತವು ಆರು ತಿಂಗಳಿನಿಂದ ಸಕ್ರಿಯವಾಗಿ ಕಾರ್ಯ ನಿರ್ವಹಿಸಿ ಜಮೀನು ಗುರುತಿಸಿದೆ’ ಎಂದರು.

‘ಜಿಲ್ಲಾಡಳಿತವು ನಿವೇಶನ ಹಂಚಿಕೆ ಸಂಬಂಧ ನಗರ ಮತ್ತು ಪಟ್ಟಣ ಪ್ರದೇಶದಲ್ಲಿ 7 ಸಾವಿರ, ಗ್ರಾಮೀಣ ಭಾಗದಲ್ಲಿ 5 ಸಾವಿರ ಅರ್ಜಿಗಳನ್ನು ಸ್ವೀಕರಿಸಿದೆ. ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್‌) ಕುಟುಂಬಗಳ ಜೀವನ ಮಟ್ಟ ಸುಧಾರಣೆಗಾಗಿ ಸೀಮೆ ಹಸು ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. ಆ.15ರ ಸ್ವಾತಂತ್ರ್ಯ ದಿನಾಚರಣೆಯಂದು 4 ಸಾವಿರ ಕುಟುಂಬಗಳಿಗೆ ಸೀಮೆ ಹಸು ಕೊಡಲಾಗುತ್ತದೆ’ ಎಂದು ಭರವಸೆ ನೀಡಿದರು.

‘ಜಿಲ್ಲೆಯನ್ನು ಬಯಲು ಬಹಿರ್ದೆಸೆ ಮುಕ್ತ ಜಿಲ್ಲೆಯಾಗಿ ಮಾಡಲು ಸಕಲ ಸಿದ್ಧತೆ ನಡೆದಿದೆ. ಶೌಚಾಲಯ ನಿರ್ಮಿಸಿಕೊಳ್ಳದವರಿಗೆ ಅರಿವು ಮೂಡಿಸಿ ಎಲ್ಲಾ ಕುಟುಂಬಗಳಿಗೂ ಶೌಚಾಲಯ ಕಟ್ಟಿ ಕೊಡಲಾಗುತ್ತದೆ. ಈ ಯೋಜನೆಗೆ ಅನುದಾನದ ಕೊರತೆ ಇಲ್ಲ. ಜನ ಈ ಯೋಜನೆಯ ಸದುಪಯೋಗ ಪಡೆಯಬೇಕು’ ಎಂದು ಕಿವಿಮಾತು ಹೇಳಿದರು.

ಮಳೆ ಕೊರತೆ: ‘ಜಿಲ್ಲೆಯಲ್ಲಿ ಮಳೆ ಕೊರತೆ ಉಂಟಾಗಿದೆ, ಬಿತ್ತನೆಗೆ ಇನ್ನೂ ಕಾಲಾವಕಾಶವಿದ್ದು, ಅಷ್ಟರಲ್ಲಿ ರಸಗೊಬ್ಬರ ಮತ್ತು ಬಿತ್ತನೆ ಬೀಜ ದಾಸ್ತಾನು ಮಾಡಿಕೊಂಡು ರೈತರಿಗೆ ಯಾವುದೇ ತೊಂದರೆಯಾಗದಂತೆ ಎಚ್ಚರಿಕೆ ವಹಿಸಬೇಕು. ಮಳೆ ಪ್ರಮಾಣ ಸಂಪೂರ್ಣ ಕಡಿಮೆಯಾಗಿ ಅನಾವೃಷ್ಟಿ ಎದುರಾದರೂ ಪರಿಸ್ಥಿತಿ ನಿಭಾಯಿಸಲು ಪರ್ಯಾಯ ಸಿದ್ಧತೆ ಮಾಡಿಕೊಳ್ಳಬೇಕು’ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವಕುಮಾರ್ ಅವರಿಗೆ ಸೂಚನೆ ನೀಡಿದರು.

‘ಜಿಲ್ಲೆಯಲ್ಲಿ ಈವರೆಗೆ ಆಗಿರುವ ಮಳೆಗೆ ರೈತರು ತೊಗರಿ ಮತ್ತು ನೆಲಗಡಲೆ ಬಿತ್ತನೆ ಮಾಡಿದ್ದಾರೆ. ಒಂದು ತಿಂಗಳಿನಿಂದ ಮಳೆ ಕೊರತೆ ಇರುವುದರಿಂದ ರಾಗಿ ಬಿತ್ತನೆ ಆರಂಭವಾಗಿಲ್ಲ. ಆದರೂ ರಾಗಿ ಬಿತ್ತನೆಗೆ ಇನ್ನೂ ಕಾಲಾವಕಾಶವಿದೆ’ ಎಂದು ಶಿವಕುಮಾರ್ ವಿವರಿಸಿದರು.

ಡೆಂಗಿ ಉಲ್ಬಣ: ಜಿಲ್ಲೆಯಲ್ಲಿ ಡೆಂಗಿ, ಚಿಕೂನ್ ಗುನ್ಯಾ ಹಾಗೂ ಮಲೇರಿಯಾ ಪ್ರಕರಣಗಳು ಉಲ್ಬಣವಾಗಿವೆ. ಇಂತಹ ಪರಿಸ್ಥಿತಿಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಎಚ್ಚರ ತಪ್ಪಿದರೆ ಮುಂದೆ ಗಂಭೀರ ಸಮಸ್ಯೆ ಎದುರಿಸಬೇಕಾಗುತ್ತದೆ’ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ತ್ರಿಲೋಕಚಂದ್ರ ಎಚ್ಚರಿಕೆ ನೀಡಿದರು.

‘ದಿನದಿಂದ ಡೆಂಗಿ ಜ್ವರ ಪ್ರಕರಣಗಳು ಹೆಚ್ಚುತ್ತಿವೆ. ಸೊಳ್ಳೆ ಕಾಟ ಇದಕ್ಕೆ ಮುಖ್ಯ ಕಾರಣ. ಪ್ರಮುಖವಾಗಿ ನಗರ ಪ್ರದೇಶದಲ್ಲಿ ರೋಗ ಹೆಚ್ಚಾಗಿದೆ. ನಗರಸಭೆ ಮತ್ತು ಪುರಸಭೆ ಅಧಿಕಾರಿಗಳು ಎಚ್ಚರ ವಹಿಸಿ ಸೊಳ್ಳೆಗಳ ನಿರ್ಮೂಲನೆಗೆ ಕ್ರಮ ತೆಗೆದುಕೊಳ್ಳಬೇಕು. ಎಲ್ಲೆಡೆ ಸ್ವಚ್ಛತೆ ಕಾಪಾಡಬೇಕು. ಈ ವಿಷಯದಲ್ಲಿ ಬೇಜವಾಬ್ದಾರಿ ತೋರಿದರೆ ಶಿಸ್ತುಕ್ರಮ ಜರುಗಿಸುತ್ತೇನೆ’ ಎಂದರು.

‘ಡೆಂಗಿ ಹಾಗೂ ಚಿಕೂನ್‌ ಗುನ್ಯಾ ಭೀತಿಯಿಂದ ಜನ ಆತಂಕಗೊಂಡಿದ್ದಾರೆ. ಅಧಿಕಾರಿಗಳು ಈ ಕಾಯಿಲೆಗಳ ಹತೋಟಿಗೆ ಸಮರೋಪಾದಿಯಲ್ಲಿ ಕಾರ್ಯ ನಿರ್ವಹಿಸಬೇಕು’ ಎಂದು ಕೆಜಿಎಫ್ ಶಾಸಕಿ ರಾಮಕ್ಕ ಹೇಳಿದರು.

ಸಮಸ್ಯೆಗೆ ಸ್ಪಂದಿಸುತ್ತಿಲ್ಲ: ಶ್ರೀನಿವಾಸಪುರದ ಕೆರೆಯೊಂದರಲ್ಲಿ ರೈತರು ಕೊಳಚೆ ನೀರು ಸಂಗ್ರಹಿಸಿಕೊಂಡು ಬೆಳೆ ಬೆಳೆಯುತ್ತಿದ್ದಾರೆ. ಇದರಿಂದ ಆ ಭಾಗದಲ್ಲಿ ಜ್ವರದ ಸಮಸ್ಯೆ ಜಾಸ್ತಿಯಾಗಿದೆ. ಈ ಬಗ್ಗೆ ಅಧಿಕಾರಿಗಳಿಗೆ ದೂರು ನೀಡಿದರೂ ಸಮಸ್ಯೆಗೆ ಸ್ಪಂದಿಸುತ್ತಿಲ್ಲ’ ಎಂದು ಶ್ರೀನಿವಾಸಪುರ ಪುರಸಭೆ ಅಧ್ಯಕ್ಷೆ ಅರುಣಾ ದೂರಿದರು.

‘ಗ್ರಾಮೀಣ ಪ್ರದೇಶದಲ್ಲಿ ಶೌಚಾಲಯಗಳ ನಿರ್ಮಾಣಕ್ಕೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕು. ಸಾರ್ವಜನಿಕರು ಕಡ್ಡಾಯವಾಗಿ ಶೌಚಾಲಯ ನಿರ್ಮಿಸಿಕೊಂಡು ಜಿಲ್ಲೆಯನ್ನು ಮಾದರಿಯಾಗಿಸಬೇಕು’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಬಿ.ಬಿ. ಕಾವೇರಿ ಮನವಿ ಮಾಡಿದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಗೀತಮ್ಮ, ಉಪಾಧ್ಯಕ್ಷೆ ಯಶೋದಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹಿಣಿ ಕಟೋಚ್‌ ಸೆಪಟ್‌, ಕೆಜಿಎಫ್ ಪೊಲೀಸ್‌ ಜಿಲ್ಲಾ ವರಿಷ್ಠಾಧಿಕಾರಿ ಬಿ.ಎಸ್‌. ಲೋಕೇಶಕುಮಾರ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಲಕ್ಷ್ಮೀನಾರಾಯಣ ಪಾಲ್ಗೊಂಡಿದ್ದರು.

* * 

81 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, ಈ ಪೈಕಿ 43 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ಮತ್ತು 38 ಗ್ರಾಮಗಳಿಗೆ ಕೊಳವೆ ಬಾವಿಗಳಿಂದ ನೀರು ಕೊಡಲಾಗುತ್ತಿದೆ

ಕೆ.ಎಚ್‌.ಮುನಿಯಪ್ಪ

ಸಂಸದ

ಪ್ರತಿಕ್ರಿಯಿಸಿ (+)