ಶುಕ್ರವಾರ, ಡಿಸೆಂಬರ್ 6, 2019
18 °C
ಬಿ.ಎಸ್‌. ಯಡಿಯೂರಪ್ಪ ಗಂಭೀರ ಆರೋಪ

ಸಿಎಂ,ವೇಣುಗೋಪಾಲ್ ಷಡ್ಯಂತ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಿಎಂ,ವೇಣುಗೋಪಾಲ್ ಷಡ್ಯಂತ್ರ

ಉಡುಪಿ: ‘ನಿರಂತರವಾಗಿ ನಡೆಯುತ್ತಿರುವ ಗಲಭೆ ಮತ್ತು ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರ ಕೊಲೆ ಹಿಂದೆ ವ್ಯವಸ್ಥಿತ ಷಡ್ಯಂತ್ರ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಅವರ ಕೈವಾಡ ಇದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಗಂಭೀರ ಆರೋಪ ಮಾಡಿದರು.

ಹಿಂದೂ ಸಂಘಟನೆಗಳ ಕಾರ್ಯಕರ್ತರ ಕೊಲೆ ವಿರೋಧಿಸಿ ಹಾಗೂ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನೀತಿ ಖಂಡಿಸಿ ಜಿಲ್ಲಾ ಬಿಜೆಪಿ ನಗರದಲ್ಲಿ ಗುರುವಾರ ಏರ್ಪಡಿಸಿದ್ದ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.

‘ಕೇರಳದಲ್ಲಿ ಆರ್‌ಎಸ್‌ಎಸ್ ಹಾಗೂ ಬಿಜೆಪಿ ಕಚೇರಿಗೆ ಬೆಂಕಿ ಹಾಕಲಾಯಿತು. ವೇಣುಗೋಪಾಲ್ ಅವರು ರಾಜ್ಯಕ್ಕೆ ಬಂದ ನಂತರ ಅಂತಹ ಘಟನೆಗಳು ಇಲ್ಲಿಯೂ ನಡೆಯುತ್ತಿವೆ. ಇದು ಕರ್ನಾಟಕ, ಕೇರಳ ಅಲ್ಲ ಎಂಬುದನ್ನು ಅವರು ಅರ್ಥಮಾಡಿಕೊಳ್ಳಬೇಕು’ ಎಂದರು.

ಆಯುಧ ಪೂಜೆ: ‘ಗಲಭೆಗೆ ಕಾರಣರಾದ  ಯಾವೊಬ್ಬ ಮುಸಲ್ಮಾನನ ಮನೆಗೂ ಪೊಲೀಸರು ಹೋಗಿಲ್ಲ ಅದೇ ಕಾರಣಕ್ಕೆ ಷಂಡರು ಎಂದು ಕರೆಯಲಾಯಿತು. ಹಿಂದೂಗಳು ಪುಗಸಟ್ಟೆ ಸಿಕ್ಕಿದ್ದಾರೆ ಎಂಬ ಕಾರಣಕ್ಕೆ ಬಂಧಿಸಲಾಗುತ್ತಿದೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲ. ಇನ್ನೇನು ಆಯುಧ ಪೂಜೆ ಹಬ್ಬ ಹತ್ತಿರ ಬರುತ್ತಿದ್ದು,  ಹಿಂದೂಗಳು ತಮ್ಮ ರಕ್ಷಣೆಗೆ ಶಸ್ತ್ರಗಳನ್ನು ಪೂಜೆ ಮಾಡಿ. ನಮ್ಮನ್ನು ನಾವೇ ರಕ್ಷಣೆ ಮಾಡಿಕೊಳ್ಳಬೇಕಿದೆ. ಸರ್ಕಾರ ನಮಗೆ ರಕ್ಷಣೆ ಕೊಡುತ್ತದೆ ಅನಿಸುತ್ತಿಲ್ಲ’ ಎಂದು ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕ ವಿ. ಸುನೀಲ್ ಕುಮಾರ್ ಹೇಳಿದರು.

‘ಈಗಿನ ಪರಿಸ್ಥಿತಿ  ನೋಡಿದರೆ ಗೃಹ ಇಲಾಖೆ ಮಸೀದಿಯಲ್ಲಿ ಕುಳಿತು ಆಡಳಿತ ನಡೆಸುತ್ತಿದೆ ಎಂಬ ಭಾವನೆ ಮೂಡುತ್ತಿದೆ. ಆದ್ದರಿಂದ ಹಿಂದೂ ಸಮಾಜ ಸಂಘಟನೆಗೊಳ್ಳಬೇಕು’ ಎಂದರು.

17ರಂದು ರಾಜನಾಥ್‌ ಭೇಟಿ (ಮಂಗಳೂರು ವರದಿ): ಇದೇ 17ರಂದು ರಾಜ್ಯದ ಬಿಜೆಪಿ ಸಂಸದರ ನಿಯೋಗ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ರಾಜನಾಥ್‌ ಸಿಂಗ್‌ ಅವರನ್ನು ಭೇಟಿ ಮಾಡಿ ಆರ್‌ಎಸ್‌ಎಸ್‌ ಕಾರ್ಯಕರ್ತ ಶರತ್‌ಕುಮಾರ್‌ ಕೊಲೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ (ಎನ್‌ಐಎ) ಒಪ್ಪಿಸುವಂತೆ ಆಗ್ರಹಿಸಲಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌ಯಡಿಯೂರಪ್ಪ ತಿಳಿಸಿದರು.

ಇಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದ ಬಳಿಕ ನಿರಂತರವಾಗಿ ಆರ್‌ಎಸ್‌ಎಸ್‌ ಮತ್ತು ಬಿಜೆಪಿ ಕಾರ್ಯಕರ್ತರ ಹತ್ಯೆಗಳು ನಡೆಯುತ್ತಿವೆ. ಇಲ್ಲಿನ ಪೊಲೀಸರು ನಡೆಸುವ ತನಿಖೆಯಲ್ಲಿ ಬಿಜೆಪಿಗೆ ವಿಶ್ವಾಸವಿಲ್ಲ. ಎನ್‌ಐಎ ತನಿಖೆ ನಡೆದರೆ ಮಾತ್ರ ನಿಜವಾದ ಆರೋಪಿಗಳ ಪತ್ತೆ ಸಾಧ್ಯವಾಗಲಿದೆ. ಈ ಕಾರಣದಿಂದ ಶರತ್‌ ಕೊಲೆ ಪ್ರಕರಣದ ತನಿಖೆಯನ್ನು ಎನ್‌ಐಎಗೆ ವರ್ಗಾವಣೆ ಮಾಡುವಂತೆ ಕೇಂದ್ರ ಗೃಹ ಸಚಿವರನ್ನು ಒತ್ತಾಯಿಸಲಾಗುವುದು ಎಂದರು.

‘ಕೇರಳದ ಸಂಸದರಾಗಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ ಅವರು ರಾಜ್ಯ ಕಾಂಗ್ರೆಸ್‌ ಉಸ್ತುವಾರಿಯಾಗಿ ನೇಮಕಗೊಂಡ ಬಳಿಕ ಕರಾವಳಿಯಲ್ಲಿ ಸಂಘ ಪರಿವಾರ ಮತ್ತು ಬಿಜೆಪಿ ಕಾರ್ಯಕರ್ತರ ಮೇಲಿನ ದಾಳಿಗಳು ಹೆಚ್ಚುತ್ತಿವೆ. ವೇಣುಗೋಪಾಲ್‌ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಒಟ್ಟಾಗಿ ಸಂಘ ಪರಿವಾರದ ಕಾರ್ಯಕರ್ತರ ಕೊಲೆಗೆ ಪ್ರಚೋದನೆ ನೀಡುತ್ತಿದ್ದಾರೆ. ಕೊಲೆಗಡುಕರಿಗೆ ರಕ್ಷಣೆ ನೀಡುವ ಕೆಲಸವನ್ನೂ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.

ಪ್ರತಿಕ್ರಿಯಿಸಿ (+)